Tuesday, 26th May 2020

ಸೆಸ್ಕ್ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಿ: ಸಚಿವ ಎಸ್.ಟಿ.ಸೋಮಶೇಖರ್ ಸಲಹೆ

ಮೈಸೂರು:

ಮಳೆ ಬಂದ ಸಂದರ್ಭದಲ್ಲಿ ಸೆಸ್ಕ್ ಅರಣ್ಯ ಇಲಾಖೆ ಹಾಗೂ ನಗರಪಾಲಿಕೆಯ ಅಧಿಕಾರಿಗಳು ಸಮನ್ವಯದಿಂದ ಒಟ್ಟಿಗೆ ಕೆಲಸ ಮಾಡಬೇಕು ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ತಿಳಿಸಿದರು.

ಗುರುವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೆಸ್ಕ್ ಹಾಗೂ ನಗರಪಾಲಿಕೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಮಳೆ ಬಂದಾಗ ಜನರಿಗೆ ಅಪಾಯವಾಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂದು ಸೂಚಿಸಿದರು.

ಸೆಸ್ಕ್‌ನವರು ಉನ್ನತ ಗುಣಮಟ್ಟದ ವಿದ್ಯುತ್ ಕಂಬ ನಿಲ್ಲಿಸಬೇಕು. ವಿದ್ಯುತ್ ತಂತಿಗೆ ತಾಕುವ ಅಪಾಯಕಾರಿ ಮರಗಳು ಕೊಬೆಯನ್ನು ಅರಣ್ಯ ಇಲಾಖೆಯವರು ಸಹಕಾರದೊಂದಿಗೆ ತೆರವುಗೊಳಿಸಿ, ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗದಂತೆ ಕಾಯ್ದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರು ಮಾತನಾಡಿ, ಜಿಲ್ಲಾ ವ್ಯಾಪ್ತಿಗೆ ಒಳಪಡುವ ಅನೇಕ ಹಾಡಿಗಳಿಗೆ ಇನ್ನೂ ವಿದ್ಯುತ್ ಸಂಪರ್ಕವಿಲ್ಲ. ನಾಗರಹೊಳೆ ಸುತ್ತಮುತ್ತಲಿನ ಅರಣ್ಯ ಪ್ರದೇಶಗಳಲ್ಲಿ ಪ್ರಾಣಿಗಳು ಓಡಾಡುವ ಕಾರಣ ಅಲ್ಲಿ ವಿದ್ಯುತ್ ಕಂಬಗಳು ನಿಲ್ಲಿಸುವುದು ಸೂಕ್ತವಲ್ಲ. ಆದ್ದರಿಂದ ನೆಲಮಾರ್ಗದ ಮೂಲಕ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಈ ವೇಳೆ ಸೆಸ್ಕ್‌ನ ವ್ಯವಸ್ಥಾಪಕ ನಿರ್ದೇಶಕ ಡಾ.ಗೋಪಾಲಕೃಷ್ಣ ಅವರು ಮಾತನಾಡಿ, ಇತ್ತೀಚಿಗೆ ಮೂರು ಬಾರಿ ಬಂದಿರುವ ಗಾಳಿ ಮಳೆಯಿಂದಾಗಿ ಮರದ ಕೊಂಬೆ ಬಿದ್ದು ವಿದ್ಯುತ್ ಅನೇಕ ಕಂಬಗಳಿಗೆ ಹಾನಿಯಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಬೀಳುವ ಸ್ಥಿತಿಯಲ್ಲಿರುವ ಮರಗಳನ್ನು ತೆರವುಗೊಳಿಸಿದರೆ ಸಂಭವಿಸುವ ಅಪಾಯ ತಪ್ಪಿಸಬಹುದು ಎಂದರು.

ಸಭೆಯಲ್ಲಿ ಶಾಸಕರಾದ ಎಲ್.ನಾಗೇಂದ್ರ, ಸಂಸದ ಪ್ರತಾಪ್ ಸಿಂಹ, ನಗರಪಾಲಿಕೆ ಆಯುಕ್ತ ಗುರುದತ್ ಹೆಗಡೆ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *