Tuesday, 5th July 2022

ಕೆಎಸ್‌ಆರ್’ಟಿಸಿ ಬಸ್ ಅಪಘಾತ: 25 ಮಂದಿಗೆ ಗಾಯ

ಬೆಂಗಳೂರು: ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಭಾನುವಾರ ತಡರಾತ್ರಿ ಕೆಎಸ್‌ಆರ್’ಟಿಸಿ ಬಸ್ ಅಪಘಾತ ಕ್ಕೀಡಾಗಿದ್ದು, ಘಟನೆಯಲ್ಲಿ 25 ಮಂದಿ ಗಾಯಗೊಂಡು ನಾಲ್ವರ ಸ್ಥಿತಿ ಗಂಭೀರವಾಗಿದೆ.

ಮಡಿಕೇರಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ 45 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು.

ಈ ಅಪಘಾತದಲ್ಲಿ ಯಾವುದೇ ಸಾವು ಸಂಭವಿಸಿಲ್ಲ ಎಂದು ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಡಾ. ಸಂಜೀವ್ ಪಾಟೀಲ್ ಮಾಹಿತಿ ನೀಡಿದ್ದಾರೆ.

ಕೆಂಗೇರಿಯ ಭಾರತ್ ಪೆಟ್ರೋಲಿಯಂ ಬಳಿ ಅಪಘಾತ ನಡೆದಿದೆ. ಮಡಿಕೇರಿಯಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ, ಕೆಂಗೇರಿಯ ಭಾರತ್ ಪೆಟ್ರೋಲಿಯಂ ಬಳಿ ಮೆಟ್ರೋ ಪಿಲ್ಲರ್ ಗೆ ಡಿಕ್ಕಿ ಹೊಡೆದಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.