Friday, 26th July 2024

ಪೊಲೀಸ್ ಇನ್‌ಸ್ಪೆಕ್ಟರ್ ಸೇರಿ 60 ಸಿಬ್ಬಂದಿಗೆ ಸೋಂಕು

ಬೆಂಗಳೂರು: ಕೋವಿಡ್ ನಿಯಮಗಳ ಜಾರಿಗೆ ತರುವ ಜತೆಗೆ ಕಾನೂನು ಸುವ್ಯವಸ್ಥೆ ಪಾಲನೆ ಮಾಡುತ್ತಿರುವ ಪೊಲೀಸರಿಗೆ ಕರೋನಾ ಆತಂಕ ಶುರುವಾಗಿದೆ.

ಪಶ್ಚಿಮ ವಿಭಾಗದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಸೇರಿದಂತೆ 60 ಪೊಲೀಸ್ ಸಿಬ್ಬಂದಿಗೆ ಸೋಂಕು ತಗುಲಿರುವ ಆತಂಕಕಾರಿ ಸಂಗತಿ ಹೊರ ಬಿದ್ದಿದೆ.

ರಾಜಧಾನಿ ಬೆಂಗಳೂರಿನಲ್ಲಿ ದಿನೇ ದಿನೇ ಪ್ರಕರಣಗಳು ಹೆಚ್ಚುತ್ತಿವೆ. ನೈಟ್ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯು ಜತೆಗೆ ಕಾನೂನು ಸುವ್ಯವಸ್ಥೆಯಲ್ಲಿ ತೊಡಗಿಸಿ ಕೊಂಡಿರುವ ಪೊಲೀಸ್ ಸಿಬ್ಬಂದಿ ದಿನ ನಿತ್ಯ ಸಾರ್ವಜನಿಕರ ಮಧ್ಯೆ ಕೆಲಸ ಮಾಡುತ್ತಿದ್ದಾರೆ.

ಪೊಲೀಸ್ ಇನ್‌ಸ್ಪೆಕ್ಟರ್ ಹಾಗೂ ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್ ಕೂಡ ಸೇರಿದ್ದು ಒಂದೇ ದಿನ ಹನ್ನೆರಡು ಮಂದಿ ಪೊಲೀಸ್ ಸಿಬ್ಬಂದಿಗೆ ಸೋಂಕು ಕಾಣಿಸಿ ಕೊಂಡಿದೆ. ಕೆಲ ದಿನಗಳ ಹಿಂದಷ್ಟೇ ಕೆ.ಆರ್. ಮಾರ್ಕೆಟ್ ಪೊಲೀಸ್ ಠಾಣೆಯ 12 ಸಿಬ್ಬಂದಿಗೆ ಸೋಂಕು ಕಾಣಿಸಿಕೊಂಡಿತ್ತು. ಇದೀಗ ಮೂರೇ ದಿನದಲ್ಲಿ ಒಂದು ವಿಭಾಗದಲ್ಲಿ 60 ಸಿಬ್ಬಂದಿ ಸೋಂಕಿಗೆ ಗುರಿಯಾಗಿದ್ದಾರೆ.

ಎಲ್ಲಾ ಪೊಲೀಸ್ ಸಿಬ್ಬಂದಿಗೂ ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದು ಕೊಳ್ಳುವ ಜತೆಗೆ ಮುನ್ನೆಚ್ಚರಿಕೆ ಕ್ರಮ ವಹಿಸಲು ಸೂಚಿಸಲಾಗಿದೆ. ಇನ್ನು ಪೊಲೀಸ್ ಸಿಬ್ಬಂದಿಗೆ ಯಾವ ಮಾದರಿಯ ವೈರಸ್ ಕಾಣಿಸಿಕೊಂಡಿದೆ ಎಂಬುದರ ಬಗ್ಗೆ ಇನ್ನೂ ಮಾಹಿತಿ ಬಂದಿಲ್ಲ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ ಎಂ. ಪಾಟೀಲ್ ತಿಳಿಸಿದ್ದಾರೆ. ಬೆಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ಎಂಟು ಉಪ ವಿಭಾಗದಲ್ಲಿ 110 ಕ್ಕೂ ಹೆಚ್ಚು ಕಾನೂನು ಸುವ್ಯವಸ್ಥೆ ಕಾಪಾಡುವ ಪೊಲೀಸ್ ಠಾಣೆಗಳಿವೆ. 

error: Content is protected !!