Sunday, 21st April 2024

ಅವಕಾಶ ಸಿಕ್ಕರೆ ನಾನ್ಯಾಕೆ ಮುಖ್ಯಮಂತ್ರಿ ಆಗಬಾರದು: ಪರಮೇಶ್ವರ್

ತುಮಕೂರು: ಅವಕಾಶ ಸಿಕ್ಕರೆ ನಾನ್ಯಾಕೆ ಮುಖ್ಯಮಂತ್ರಿ ಆಗಬಾರದು ಎಂದು ಮಾಜಿ ಡಿಸಿಎಂ ಪರಮೇಶ್ವರ್ ಆಶಯ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಗಳು ಸಾಕಷ್ಟು ಜನರಿದ್ದು, ಸಿಎಲ್‌ಪಿ ಸಭೆಯ ಅಭಿಪ್ರಾಯ ಪಡೆದು ಹೈಕಮಾಂಡ್ ಮುಖ್ಯ ಮಂತ್ರಿ ಅಭ್ಯರ್ಥಿಯನ್ನು ತೀರ್ಮಾನಿಸಲಿದೆ ಎಂದು  ಪ್ರತಿಕ್ರಿಯಿಸಿದರು.
ಪ್ರಸಕ್ತ ಚುನಾವಣೆಯಲ್ಲಿ ರಾಜ್ಯದ ಜನತೆ ಬದಲಾವಣೆ ಬಯಸಿದ್ದು ಆಡಳಿತ ಪಕ್ಷ ಬಿಜೆಪಿ ವಿರೋಧಿ ಅಲೆ ಕಾಂಗ್ರೆಸ್ ಪರವಾಗಿ ಬೀಸಿರುವ ಹಿನ್ನೆಲೆಯಲ್ಲಿ ಈ ಸಲ ಕಾಂಗ್ರೆಸ್ ಆಡಳಿತ ನಡೆಸಲಿದೆ .ಪ್ರಸಕ್ತ ಚುನಾವಣೆ ಅತ್ಯಂತ ಯಶಸ್ವಿಯಾಗಿ ನಡೆಯಲು ಸಹಕರಿಸಿದ ಪಕ್ಷದ ನಾಯಕರು, ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಮತದಾರರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.
ರಾಜ್ಯದ ಜನರ ಆಶಾಭಾವನೆ, ಅಭಿಪ್ರಾಯ ಕಾಂಗ್ರೆಸ್ ಪಕ್ಷದ ಪರವಾಗಿ ಕಂಡು ಬರುತ್ತಿದ್ದು, ಶೇ.18 ರಿಂದ 20 ರಷ್ಟು ಯುವ ಮತದಾರರು ಮತ್ತು ಅವರ ಚಿಂತನೆಗಳು ಕಾಂಗ್ರೆಸ್ ಪರವಾಗಿ ಗೋಚರಿಸಿದ್ದು, ರಾಜ್ಯದಲ್ಲಿ ಫಲಿತಾಂಶ ಚಿತ್ರಣ ಬದಲಾಗಲಿದೆ ಎಂದರು.
ರಾಜ್ಯದ ವಿವಿಧ ಸಮೀಕ್ಷೆಗಳು ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಸ್ಥಾನ ಬರುವುದಾಗಿ ತಿಳಿಸಿದ್ದು, ಪಕ್ಷದ ಆಂತರಿಕ ಸಮೀಕ್ಷೆಗಳು ಮತ್ತು ಕಾರ್ಯಕರ್ತರ ಅಭಿಪ್ರಾಯಗಳು ಪಕ್ಷದ ಪರವಾಗಿ ಕೇಳಿ ಬರುತ್ತಿದ್ದು, 130ಕ್ಕೂ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿ, ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ನಿಚ್ಚಳವಾಗಿದೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಮೊದಲ ಸಂಪುಟ ಸಭೆಯಲ್ಲಿ ಚುನಾವಣಾ ಪ್ರಣಾಳಿಕೆಯಲ್ಲಿ ನಾವು ನೀಡಿರುವ ಭರವಸೆಗಳು ಮತ್ತು ಐದು ಗ್ಯಾರಂಟಿಗಳ ಜಾರಿಗೆ ಅನುಮೋದನೆ ಪಡೆಯುವು ದಾಗಿ ತಿಳಿಸಿ, ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ 7ಕ್ಕೂ ಹೆಚ್ಚು ಸ್ಥಾನಗಳನ್ನು ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದರು.
ಮಧುಗಿರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಎನ್.ರಾಜಣ್ಣ ಮಾತನಾಡಿ, ಮಧುಗಿರಿ ಕ್ಷೇತ್ರದಲ್ಲಿ ಶೇ.85.35ರಷ್ಟು ಮತದಾನ ವಾಗಿದ್ದು, ಶಾಂತಿಯುತ ಮತದಾನಕ್ಕೆ ಸಹಕರಿಸಿದ ಪಕ್ಷದ ನಾಯಕರು, ಮುಖಂಡರು, ಕಾರ್ಯಕರ್ತರು ಮತ್ತು ಮತದಾರರಿಗೆ ತುಂಬುಹೃದಯದ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿ, ಸಮಾಜಘಾತುಕ ಸಂಘಟನೆಗಳ ನಿಷೇಧಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ ಬದ್ದವಾಗಿದ್ದು, ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕದಡುವ ಯಾವುದೆ ಸಂಘಟನೆಯನ್ನು ನಿಷೇಧಿಸುವುದು ಕಾನೂನು ಪ್ರಕಾರ ಸರಿಯಾದ ಕ್ರಮ. ಇಂತಹ ಸಂಘಟನೆಗಳನ್ನು ನಿಷೇಧ ಮಾಡುವ ಹಕ್ಕು ರಾಜ್ಯ ಸರ್ಕಾರಕ್ಕೆ ಇಲ್ಲ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿ, ಅನುಮೋದನೆ ಪಡೆದು ನಂತರ ನಿಷೇಧ ಕುರಿತು ಅಗತ್ಯ ಕ್ರಮಕೈಗೊಳ್ಳಬೇಕಾಗುತ್ತದೆ. ಮತದಾನದ ಪ್ರಮಾಣ ಹೆಚ್ಚಳಕ್ಕೆ ಸರ್ಕಾರ ಕಾನೂನು ರೂಪಿಸಿ ಮತ ಹಾಕದಿದ್ದರೆ ಅಂತಹವರಿಗೆ ಸರ್ಕಾರದಿಂದ ಸಿಗಬಹುದಾದ ಯಾವುದೆ ಸೌಲಭ್ಯ ದೊರೆಯುವುದಿಲ್ಲ ಎಂದು ಆದೇಶಿಸಬೇಕು ಎಂಬ ಸಲಹೆ ನೀಡಿದರು.
ಮಾಜಿ ಶಾಸಕ ಗಂಗಹನುಮಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಚಂದ್ರಶೇಖರಗೌಡ, ತುಮಕೂರು ನಗರ ಕ್ಷೇತ್ರದ ಅಭ್ಯರ್ಥಿ ಇಕ್ಬಾಲ್ ಅಹಮದ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುರುಳೀಧರ ಹಾಲಪ್ಪ, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ರಾಯಸಂದ್ರ ರವಿಕುಮಾರ್, ಮುಖಂಡರಾದ ರೆಡ್ಡಿಚಿನ್ನಯಲ್ಲಪ್ಪ, ಡಿ.ಟಿ.ವೆಂಕಟೇಶ್, ಮರಿಚನ್ನಮ್ಮ, ಕೇಶವಮೂರ್ತಿ, ಲಿಂಗ ರಾಜು, ಆರ್.ರಾಮಕೃಷ್ಣ ಮತ್ತಿತರರಿದ್ದರು.
error: Content is protected !!