Saturday, 27th July 2024

90ನೆ ವರ್ಷಕ್ಕೆ ಪಾದಾರ್ಪಣೆ ಮಾಡಿದ ಎಚ್‌.ಡಿ.ಡಿ

ಬೆಂಗಳೂರು: ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡರು ತಮ್ಮ ಮನೆಯಲ್ಲಿ ಕುಟುಂಬ ಸದಸ್ಯರೊಂದಿಗೆ ಸರಳವಾಗಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡರು. ಗೌಡರು 90ನೆ ವರ್ಷಕ್ಕೆ ಪಾದಾರ್ಪಣೆ ಮಾಡಿದ್ದಾರೆ.

ತಮ್ಮ ಹುಟ್ಟುಹಬ್ಬದ ಅಂಗವಾಗಿ ಜೆಪಿ ನಗರದ ವೆಂಕಟೇಶ್ವರಸ್ವಾಮಿ ದೇವಸ್ಥಾನಕ್ಕೆ ತೆರಳಿದ ಗೌಡರು ವಿಶೇಷ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು.

ಪಟ್ಟನಾಯಕನಹಳ್ಳಿಯ ಗುರುಗುಂಡ ಬ್ರಹ್ಮೇಶ್ವರಸ್ವಾಮಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಂಜಾವಧೂತ ಸ್ವಾಮೀಜಿ ಅವರು ಬೆಳಗ್ಗೆ ದೇವೇಗೌಡರ ನಿವಾ ಸಕ್ಕೆ ಆಗಮಿಸಿ ಹುಟ್ಟುಹಬ್ಬಕ್ಕೆ ಶುಭಕೋರಿ ಆಶೀರ್ವದಿಸಿದರು. ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ದೇವೇಗೌಡರಿಗೆ ಜನ್ಮದಿನದ ಶುಭಾಶಯ ಕೋರಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ, ವಿಧಾನ ಪರಿಷತ್ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಗೌಡರ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದಾರೆ. ಜೆಡಿಎಸ್ ಪಕ್ಷದ ಮಾಜಿ ಸಚಿವರು, ಮಾಜಿ ಶಾಸಕರು, ಪಕ್ಷದ ಕಾರ್ಯಕರ್ತರು, ಮುಖಂಡರು ಗೌಡರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸದಾ ನನ್ನ ಕೈ ಹಿಡಿದು ಮುನ್ನಡೆಸಿದ ಗೌಡರು ನನ್ನ ಪಾಲಿಗೆ ತಂದೆಯಷ್ಟೆ ಅಲ್ಲ, ಗುರು, ದೈವ, ಶಕ್ತಿಯೂ ಹೌದು. ಈ ನಾಡಿಗೆ, ದೇಶಕ್ಕೆ ಇನ್ನಷ್ಟು ದೀರ್ಘಕಾಲ ಗೌಡರ ಸೇವೆ, ಮಾರ್ಗದರ್ಶನದ ಅಗತ್ಯವಿದೆ. ಭಗವಂತ ಅವರಿಗೆ ಉತ್ತಮ ಆಯುರಾರೋಗ್ಯ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.

error: Content is protected !!