Sunday, 8th September 2024

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕ್ಷೇತ್ರಕ್ಕೆ ಭರ್ಜರಿ ಉಡುಗೊರೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ವಿಧಾನಸೌಧದಲ್ಲಿ 15ನೇ ಬಾರಿಗೆ ಕರ್ನಾಟಕದ ಬಜೆಟ್ ಮಂಡಿಸಿದ್ದಾರೆ. ಇದೇ ವೇಳೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕ್ಷೇತ್ರಕ್ಕೆ ಬಾರಿ ಸರ್ಕಾರದ ವತಿಯಿಂದ ಭರ್ಜರಿ ಉಡುಗೊರೆ ನೀಡಲಾಗಿದೆ.

ರಾಜ್ಯದಲ್ಲಿ ತೀವ್ರ ಅಸ್ವಸ್ಥತೆಯಿಂದ ಬಳಲುತ್ತಿರುವ ರೋಗಿಗಳಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಿ ಪ್ರಾಣ ಉಳಿಸುವ ಉದ್ದೇಶದಿಂದ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಆಧುನಿಕ ಕ್ರಿಟಿಕಲ್ ಕೇರ್ ಬ್ಲಾಕ್‌ಗಳನ್ನು ಸ್ಥಾಪಿಸಲಾಗುವುದು. ಈಗಾಗಲೇ 15 ಜಿಲ್ಲೆಗಳಲ್ಲಿ ನಿರ್ಮಾಣ ಕಾರ್ಯವನ್ನು ಪ್ರಾರಂಭಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಉಡುಪಿ, ದಾವಣಗೆರೆ, ವಿಜಯಪುರ, ಮೈಸೂರು, ಮಂಡ್ಯ, ಧಾರವಾಡ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ 187 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು. ಮುಂದಿನ ಸಾಲಿನಲ್ಲಿ ಉಳಿದ 9 ಜಿಲ್ಲೆಗಳಲ್ಲಿಯೂ ಕ್ರಿಟಿಕಲ್ ಕೇರ್ ಬ್ಲಾಕ್‌ಗಳನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ.

ತಾಲ್ಲೂಕು ಆಸ್ಪತ್ರೆಗಳಿಲ್ಲದ ಆನೇಕಲ್, ನೆಲಮಂಗಲ, ಹೊಸಕೋಟೆ, ಶೃಂಗೇರಿ, ಖಾನಾಪುರ, ಶಿರಹಟ್ಟಿ ಮತ್ತು ಯಳಂದೂರು ತಾಲ್ಲೂಕುಗಳಲ್ಲಿ ಪ್ರಸಕ್ತ ಸಾಲಿನಲ್ಲಿ 100 ಹಾಸಿಗೆ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆಗಳನ್ನು 280 ಕೋಟಿ ರೂ. ಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು. ಆರೋಗ್ಯ ಇಲಾಖೆಯ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ದುರಸ್ತಿ ಮತ್ತು ಉನ್ನತೀಕರಣಕ್ಕೆ 75 ಕೋಟಿ ರೂಪಾಯಿಗಳ ಅನುದಾನವನ್ನು ಒದಗಿಸಲಾಗುವುದು ಎಂದಿದ್ದಾರೆ.

ಬೆಂಗಳೂರಿನ ಕೆ.ಸಿ. ಜನರಲ್ ಆಸತ್ರೆ ಆವರಣದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ಮತ್ತಿತ್ತರ ಮೂಲಸೌಕರ್ಯ ಕಾಮಗಾರಿಗಳನ್ನು 150 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು.

ಪ್ರಸಕ್ತ ಸಾಲಿನಲ್ಲಿ 15 ಸಮುದಾಯ ಆರೋಗ್ಯ ಕೇಂದ್ರಗಳನ್ನು ಸಂಪನ್ಮೂಲದೊಂದಿಗೆ ಕಾರ್ಯಗತಗೊಳಿಸಲಾಗುವುದು.

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ನೀಡಲು 6,493 ಆರೋಗ್ಯ ಕ್ಷೇಮ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ 199 ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳ ಕಟ್ಟಡ ಕಾಮಗಾರಿಗಾಗಿ 130 ಕೋಟಿ ರೂಪಾಯಿ ಅನುದಾನ ಒದಗಿಸಲಾಗುವುದು ಎಂದು ಘೋಷಿಸಿದ್ದಾರೆ.

ಜಿಲ್ಲಾ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜುಗಳಲ್ಲಿರುವ ಮಕ್ಕಳ ತಜ್ಞರು, ಮತ್ತು ಕ್ರಿಟಿಕಲ್ ಕೇರ್ ಮೆಡಿಸಿನ್ ತಜ್ಞ ಮತ್ತಿತರ ತಜ್ಞ ವೈದ್ಯರುಗಳ ಸೇವೆಯನ್ನು ಟೆಲಿ-ಐಸಿಯು ವ್ಯವಸ್ಥೆಯ ಮೂಲಕ ತಾಲ್ಲೂಕು ಆಸ್ಪತ್ರೆಗಳಿಗೆ ಒದಗಿಸಲಾಗುವುದು.

ಬಹುತೇಕ ಜಿಲ್ಲೆಗಳಲ್ಲಿ Chemotherapy ಚಿಕಿತ್ಸಾ ಕೇಂದ್ರಗಳು ಲಭ್ಯವಿರದ ಕಾರಣ, ಸರ್ಕಾರವು 20 ಕೋಟಿ ರೂ. ವೆಚ್ಚದಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಒಂದು ಡೇ-ಕೇರ್ ಕಿಮೋಥೆರಪಿ ಕೇಂದ್ರವನ್ನು ಸ್ಥಾಪಿಸಲಾಗುವುದು.

Leave a Reply

Your email address will not be published. Required fields are marked *

error: Content is protected !!