Monday, 25th November 2024

ಫೆ.6ಕ್ಕೆ ಪ್ರಧಾನಿ ಮೋದಿ ಅವರಿಂದ ಎಚ್ಎಎಲ್ ಲೋಕಾರ್ಪಣೆ

ತುಮಕೂರು: ಜಿಲ್ಲೆಯ ಗುಬ್ಬಿ ತಾಲೂಕಿನ ಬಿದರೆಹಳ್ಳ ಕಾವಲ್‌ನಲ್ಲಿ ನೂತನವಾಗಿ ನಿರ್ಮಿಸಿರುವ ಎಚ್‌ಎಎಲ್ ಘಟಕ ಹಾಗೂ ಚಿಕ್ಕನಾಯನಹಳ್ಳಿ ಮತ್ತು ತಿಪಟೂರಿನ ಜಲ್‌ಜೀವನ್ ಮಿಷನ್ ಯೋಜನೆಗೆ ಶಂಕು ಸ್ಥಾಪನೆಗೆ ಉದ್ಘಾಟನೆಗಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಫೆಬ್ರವರಿ ೬ರಂದು  ಬರುವ ನಿರೀಕ್ಷೆ ಇರುವುದರಿಂದ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್,  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪೂರ್ ವಾಡ್ ಹಾಗೂ ಇನ್ನಿತರೆ ಅಧಿಕಾರಿ ಗಳೊಂದಿಗೆ  ಸ್ಥಳ ಪರಿಶೀಲನೆ ನಡೆಸಿದರು.

ಎಚ್‌ಎಎಲ್ ಆವರಣದಲ್ಲಿ ಫೆಬ್ರವರಿ ೬ರಂದು ನಡೆಯಲಿರುವ ಕಾರ್ಯಕ್ರಮಕ್ಕೆ ಗಣ್ಯ ವ್ಯಕ್ತಿಗಳು ಹಾಗೂ ಸಾರ್ವಜನಿಕರು ಸೇರಿದಂತೆ ಸುಮಾರು ೫೦ಸಾವಿರಕ್ಕೂ ಹೆಚ್ಚು ಜನ ಬರುವ ನಿರೀಕ್ಷೆ ಇರುವುದರಿಂದ ವಾಹನ ನಿಲುಗಡೆಗಾಗಿ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.
ಎಚ್‌ಎಎಲ್ ಘಟಕದ ಪ್ರವೇಶದ್ವಾರದ ಮುಂದಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾರ್ವ ಜನಿಕರ ಸುಗಮ ಸಂಚಾರಕ್ಕೆ ಅಡ್ಡಿ ಯಾಗದಂತೆ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಕಾರ್ಯಕ್ರಮ ಸ್ಥಳಕ್ಕೆ ಗಣ್ಯವ್ಯಕ್ತಿಗಳು, ಸಾರ್ವಜನಿಕರಿಗೆ ಪ್ರತ್ಯೇಕ ಪ್ರವೇಶ ಹಾಗೂ ನಿರ್ಗಮನಕ್ಕೆ ವ್ಯವಸ್ಥೆ ಕಲ್ಪಿಸಬೇಕು. ಉಳಿ ದಂತೆ ಹೆಲಿಪ್ಯಾಡ್, ವೇದಿಕೆ ಸಜ್ಜು, ಆಸನ ವ್ಯವಸ್ಥೆ, ಭದ್ರತಾ ವ್ಯವಸ್ಥೆ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಕಾರ್ಯಕ್ರಮ ದಲ್ಲಿ ಯಾವುದೇ ಲೋಪದೋಷವಾಗದಂತೆ ಯಶಸ್ವಿಯಾಗಿ ನಡೆಯುವಂತೆ ಕಾರ್ಯನಿರ್ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಶಾಸಕ ಜಿ.ಬಿ.ಜ್ಯೋತಿಗಣೇಶ್, ಉಪವಿಭಾಗಾಧಿಕಾರಿ ಜಿ.ಆರ್. ನಟರಾಜ್, ಪ್ರಾದೇಶಿಕ ಸಾರಿಗೆ ಅಧಿಕಾರಿ ರಾಜು, ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮ, ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಶಾಂತ್ ಕೂಡ್ಲಿಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಮಂಜುನಾಥ್, ತಹಶೀಲ್ದಾರ್ ಆರತಿ, ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು, ಎಚ್‌ಎಎಲ್ ಘಟಕದ ಮುಖ್ಯಸ್ಥರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.