ಕೊಪ್ಪಳ: ಟಿಪ್ಪು ರೀತಿಯಲ್ಲಿ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಿ ಎಂಬ ಸಚಿವ ಅಶ್ವತ್ಥ್ ನಾರಾಯಣ ಹೇಳಿಕೆ ನೂರಕ್ಕೆ ನೂರು ತಪ್ಪು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ಹೇಳಿಕೆ ಸರಿಯಲ್ಲ ಎಂದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಮಾತನಾಡಲು ಅವಕಾಶ ಇದೆ. ಎಲ್ಲ ಪಕ್ಷಗಳಿಗೆ ಅವರದ್ದೇ ಆದ ಸಿದ್ಧಾಂತವಿದೆ. ಸಿದ್ಧಾಂತದ ಆಧಾರದಲ್ಲಿ ಪಕ್ಷ ಸಂಘಟನೆ ಮಾಡಬೇಕೇ ಹೊರತು ಇಂತಹ ಹೇಳಿಕೆ ಅಗತ್ಯವಿಲ್ಲ ಎಂದು ಹೇಳಿದರು.
ರಾಜ್ಯದಲ್ಲಿ ಉನ್ನತ ಮಟ್ಟದ ಅಧಿಕಾರಿಗಳ ಬಹಿರಂಗ ಹೇಳಿಕೆ ಸರಿಯಲ್ಲ. ಇದಕ್ಕೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ. ರಾಜ್ಯ ಸರ್ಕಾರ ಈಗಾಗಲೇ ಕಾರ್ಯೋನ್ಮುಖವಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಟಿಪ್ಪು ಜಯಂತಿ ಆಚರಣೆ ಮೂಲಕ ವೋಟ್ ಬ್ಯಾಂಕ್ ರಾಜಕಾರಣ ಹಾಗೂ ಧರ್ಮ ರಾಜಕಾರಣ ಮಾಡುತ್ತಿದೆ. ಮುಸ್ಲಿಮರಲ್ಲಿ ಮೂರ್ತಿ ಪೂಜೆ ಇಲ್ಲ. ಟಿಪ್ಪು ಜಯಂತಿ ಯಾರೂ ಕೇಳಿರಲಿಲ್ಲ. ಜನರನ್ನು ಒಡೆದು ಆಳುವ ನೀತಿ ಅನುಸರಿಸುವ ಮೂಲಕ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಎಂದು ಟೀಕಿಸಿದರು.