ಜಿಲ್ಲೆಯಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಗೆ ಅಗತ್ಯವಾದ ಕ್ರಮಗಳನ್ನು ಕೈಗೊಳ್ಳು ವಂತೆ ಪತ್ರದಲ್ಲಿ ಸೂಚನೆ ನೀಡಲಾಗಿದೆ. ಕೇಂದ್ರ ಚುನಾವಣಾ ಆಯೋಗದ ತಂಡ ಸಹ ರಾಜ್ಯಕ್ಕೆ ಆಗಮಿಸಿ ಸಿದ್ಧತೆಗಳನ್ನು ಪರಿಶೀಲನೆ ನಡೆಸಿದೆ. ಜಿಲ್ಲಾಧಿಕಾರಿಗಳು, ರಾಜಕೀಯ ಪಕ್ಷಗಳ ಜೊತೆ ಸಭೆ ನಡೆಸಿದೆ. ಮಾ.27 ಅಥವ ಏಪ್ರಿಲ್ ಮೊದಲ ವಾರದಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ನಿರೀಕ್ಷೆ ಇದೆ.
ಈ ಹಿನ್ನಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಪತ್ರದ ಮೂಲಕ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ. ಯಾವುದೇ ಕ್ಷಣದಲ್ಲಿ ಚುನಾವಣೆ ಘೋಷಣೆಯಾಗಿ, ಮಾದರಿ ನೀತಿ ಸಂಹಿತೆ ಜಾರಿಗೆ ಬರಬಹುದು. ಮಾದರಿ ನೀತಿ ಸಂಹಿತೆ ಜಾರಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ಪತ್ರದಲ್ಲಿ ಸೂಚನೆ ಕೊಟ್ಟಿದೆ. ರಾಜಕೀಯ ನಾಯಕರ ಫೆಕ್ಸ್, ಬ್ಯಾನರ್ ತೆರವು ಮಾಡುವ ಕಾರ್ಯವನ್ನು ಈಗಾಗಲೇ ಜಿಲ್ಲೆಗಳಲ್ಲಿ ಕೈಗೊಳ್ಳಲಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬಿಬಿಎಂಪಿ ಆಯುಕ್ತರು ಚುನಾವಣಾಧಿಕಾರಿಗಳಾಗಿರುತ್ತಾರೆ.
ರಾಜ್ಯ ಚುನಾವಣಾ ಆಯೋಗ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಬರೆದಿರುವ ಪತ್ರದಲ್ಲಿ ಕರ್ನಾಟಕ ರಾಜ್ಯ ವಿಧಾನಸಭೆಗೆ ಏಪ್ರಿಲ್ ಮತ್ತು ಮೇ ತಿಂಗಳ ನಡುವೆ ಸಾರ್ವತ್ರಿಕ ಚುನಾವಣೆ ನಡೆಯಲಿದೆ.
ಚುನಾವಣಾ ಮಾದರಿ ನೀತಿ ಸಂಹಿತೆ ಮಾದರಿಯನ್ನು ಪತ್ರದೊಂದಿಗೆ ಲಗತ್ತಿಸಲಾಗಿದೆ. ಚುನಾವಣೆ ಘೋಷಣೆಯಾದ ಕೂಡಲೇ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯುವ ನಿರೀಕ್ಷೆ ಇದೆ.
ಮಾ.25ರಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು, ದಾವಣಗೆರೆ, ಚಿಕ್ಕಬಳ್ಳಾಪುರಕ್ಕೆ ಭೇಟಿ ನೀಡುತ್ತಿದ್ದಾರೆ. ರಾಜ್ಯದಲ್ಲಿ ಚುನಾವಣೆ ಘೋಷಣೆಗೂ ಮೊದಲೇ ಇದು ಪ್ರಧಾನಿಗಳ ಕೊನೆಯ ಭೇಟಿಯಾಗಿದೆ. ನೀತಿ ಸಂಹಿತೆ ಜಾರಿಯಾದ ಬಳಿಕ ಅವರು ಚುನಾವಣಾ ಪ್ರಚಾರಕ್ಕಾಗಿ ಆಗಮಿಸಲಿದ್ದಾರೆ. ಕರ್ನಾಟಕ ಸರ್ಕಾರ ಸಹ ಶುಕ್ರವಾರ ಕೊನೆಯ ಸಚಿವ ಸಂಪುಟ ಸಭೆಯನ್ನು ನಡೆಸಲಿದೆ.