ಚುನಾವಣೆಯ ಈ ಸಂದರ್ಭದಲ್ಲಿ ನಂದಿನಿ ಜತೆ ಅಮೂಲ್ ವಿಲೀನ ಮಾಡಲಾಗುತ್ತದೆ ಎಂಬ ಆರೋಪ ಬಲವಾಗಿ ಕೇಳಿ ಬಂದಿದೆ.
ಜತೆಗೆ ಈಗಾಗಲೇ ಕೇಂದ್ರ ಬಿಜೆಪಿ ಸರಕಾರದ ಮೇಲೆ ಹಿಂದಿ ಹೇರಿಕೆಯ ಕುರಿತೂ ಆರೋಪ ಇದೆ. ಈ ನಡುವೆಯೇ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ನೇಮಕ ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಬರೆಯುವಂತೆ ಕಡ್ಡಾಯಗೊಳಿಸಿದೆ. ಇದಷ್ಟೇ ಅಲ್ಲ, ಕೇಂದ್ರ ಸರಕಾರ ತನ್ನ ಸುಪರ್ದಿಯಲ್ಲಿ ನಡೆಸುವ ಎಲ್ಲ ನೇಮಕ ಪರೀಕ್ಷೆ ಗಳನ್ನು ಹಿಂದಿ, ಇಂಗ್ಲಿಷ್‌ನಲ್ಲೇ ನಡೆಸುತ್ತಿದೆ. ಈ ಭಾಷಾ ನೀತಿಯಿಂದಾಗಿ ಕೇಂದ್ರದಲ್ಲಿ ಕನ್ನಡಿಗ ಯುವಜನರು ಉದ್ಯೋಗ ವಂಚಿತರಾಗುತ್ತಿದ್ದಾರೆ.
ಇದರಿಂದ ರಾಜ್ಯದಲ್ಲಿ ನಿರುದ್ಯೋಗದ ಪ್ರಮಾಣ ಹೆಚ್ಚಾಗುತ್ತಿದೆ. ಯುವಜನರ ಭವಿಷ್ಯ ಮಂಕಾಗುತ್ತಿದೆ. ಕನ್ನಡ ಭಾಷಾ ಮಾಧ್ಯಮದಲ್ಲಿ ಓದಿದ ನಮ್ಮ ಯುವಜನರು ಜ್ಞಾನಿ ಗಳಾಗಿದ್ದರೂ ಭಾಷೆಯ ಸಮಸ್ಯೆಯಿಂದಾಗಿ ಕೇಂದ್ರ ಸರಕಾರ ನಡೆಸುವ ಪರೀಕ್ಷೆಯಲ್ಲಿ ಅನುತ್ತೀರ್ಣರಾಗುತ್ತಿದ್ದಾರೆ. ಕೇವಲ ಹಿಂದಿ ಕೇಂದ್ರಿತ ನೇಮಕ ಪ್ರಕ್ರಿಯೆ ಇತರ ಭಾಷಿಕರನ್ನು ಉದ್ಯೋಗ ವಂಚಿತರ ನ್ನಾಗಿಸುವುದು ಮಾತ್ರವಲ್ಲ, ಅನ್ಯ ಭಾಷೆಗಳನ್ನು ಹತ್ತಿಕ್ಕಿ ಹಿಂದಿ ಹೇರಿಕೆ ಮಾಡುವುದಷ್ಟೇ ದುರುದ್ದೇಶವಿದೆಯೇನೋ ಎಂಬ ಅನುಮಾನ ವ್ಯಕ್ತವಾಗಿದೆ.
ಮಾತೃಭಾಷೆಯಲ್ಲಿ ಪರೀಕ್ಷೆ ಬರೆಯುವುದು ನಿರಾಕರಿಸುವುದು ಎಂದರೆ ಸಂವಿಧಾನಕ್ಕೆ ಅಪಚಾರ ಎಸಗಿದಂತೆ. ಉದ್ಯಮ, ಉದ್ಯೋಗ, ಶಿಕ್ಷಣ ಹೀಗೆ ಪ್ರತಿಯೊಂದು ಕ್ಷೇತ್ರದಲ್ಲಿಯೂ ಮಾತೃಭಾಷೆಗೆ ಪ್ರಾಮುಖ್ಯತೆ ಕೊಡಬೇಕು ಎಂದು ಈ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಹೇಳಿದ್ದಾರೆ. ಆದರೂ ಅಧಿಕಾರಿಗಳ ಲೋಪಗಳಿಂದ ಇಂತಹ ಆದೇಶಗಳು ಹೊರಬೀಳುತ್ತಿವೆ.
ಆದ್ದರಿಂದ ಕೂಡಲೇ ಪ್ರಧಾನಿ ನರೇಂದ್ರ ಮೋದಿ ಕೂಡಲೇ ಮಧ್ಯ ಪ್ರವೇಶಿಸಿ ಸಿಆರ್‌ಪಿಎಫ್ ನೇಮಕ ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಬರೆಯುವಂತೆ ಕಡ್ಡಾಯಗೊಳಿಸಿರುವುದನ್ನು ತಕ್ಷಣ ಸಡಿಲಿಸಿ, ಕನ್ನಡ ಸೇರಿ ದೇಶದ ಎಲ್ಲ ಭಾಷೆ ಗಳಲ್ಲೂ ಬರೆಯಲು ಅಭ್ಯರ್ಥಿಗಳಿಗೆ ಅವಕಾಶ ನೀಡಬೇಕು. ಇಲ್ಲವಾದರೆ, ಈ ತಾರತಮ್ಯದಿಂದಾಗಿ ಕೇಂದ್ರ ಸರಕಾರದ ವಿರುದ್ಧ ಹಿಂದಿಯೇತರ ರಾಜ್ಯಗಳಲ್ಲಿ ಅವಿಶ್ವಾಸ ಮೂಡಲಿದೆ. ಚುನಾವಣೆಯ ಈ ಸಂದರ್ಭದಲ್ಲಿ ಕೇಂದ್ರದ ಬಿಜೆಪಿ ನಾಯಕರೇ ಪ್ರತಿಪಕ್ಷ ಗಳಿಗೆ ಮತ್ತೊಂದು ಅಸ್ತ್ರ ಕೊಟ್ಟಂತಾಗುತ್ತದೆ.