ಬೆಂಗಳೂರು: ವಿಧಾನಸೌಧ ಸುತ್ತಮುತ್ತಲೂ ಜುಲೈ 3ರಿಂದ ನಿಷೇಧಾಜ್ಞೆ ಜಾರಿಗೊಳಿಸ ಲಾಗಿದೆ. ಈ ಸಂದರ್ಭದಲ್ಲಿ ಯಾವುದೇ ರೀತಿಯ ಪ್ರತಿಭಟನೆಯನ್ನು ಸಹ ನಡೆಸುವಂತಿಲ್ಲ ಎಂದು ಪೊಲೀಸರು ಆದೇಶದಲ್ಲಿ ತಿಳಿಸಿದ್ದಾರೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಈ ಕುರಿತು ಆದೇಶ ಹೊರಡಿಸಿದ್ದಾರೆ.
ಜುಲೈ 3 ರಿಂದ 14ರ ತನಕ ಪ್ರತಿದಿನ ಬೆಳಗ್ಗೆ 6 ರಿಂದ ರಾತ್ರಿ 12 ಗಂಟೆಯ ತನಕ ವಿಧಾನ ಸೌಧ ಸುತ್ತಮುತ್ತಲಿನ 2 ಕಿ. ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.
ಜು.3ರಂದು ಕರ್ನಾಟಕ ವಿಧಾನಸಭೆ ಬಜೆಟ್ ಅಧಿವೇಶನ ಆರಂಭವಾಗುತ್ತಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜು. 7 ರಂದು ಮುಖ್ಯಮಂತ್ರಿ, ಹಣಕಾಸು ಸಚಿವರು ಆಗಿರುವ ಸಿದ್ದರಾಮಯ್ಯ 2023-24ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತರು ವಿಧಾನಸೌಧ ಸುತ್ತಮುತ್ತಲಿನ 2 ಕಿ. ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುವ ಸಂದರ್ಭದಲ್ಲಿ 5 ಅಥವ ಅದಕ್ಕಿಂತ ಹೆಚ್ಚು ಜನರು ಗುಂಪು ಸೇರಬಾರದು ಎಂದು ಹೇಳಿದ್ದಾರೆ.
ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಈಗಾಗಲೇ ಸದನದ ಒಳಗೆ ಮತ್ತು ಹೊರಗೆ ಹೋರಾಟ ನಡೆಸುತ್ತೇವೆ ಎಂದು ರಾಜ್ಯದ ವಿರೋಧ ಪಕ್ಷವಾದ ಬಿಜೆಪಿ ಘೋಷಣೆ ಮಾಡಿದೆ. ಅಲ್ಲದೇ ಜು.3ರಂದು ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ ದಿನ ಪೂರ್ತಿ ಧರಣಿ ನಡೆಸುವುದಾಗಿ ಹೇಳಿದೆ.
ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಬಳಿಕ ಕಾಂಗ್ರೆಸ್ ಪೂರ್ಣ ಬಹುಮತ ಪಡೆದು ಸರ್ಕಾರ ರಚನೆ ಮಾಡಿದೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ. ಕೆ. ಶಿವಕುಮಾರ್ ಸರ್ಕಾರವನ್ನು ಮುನ್ನಡೆಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದೆ.