ಲಕ್ನೋ: ಕಾಂಗ್ರೆಸ್ ಪಕ್ಷವು ತಮಗೆ ಮೋಸ ಮಾಡಿ, ಬಿಜೆಪಿಯೊಂದಿಗೆ ಒಳ ಒಪ್ಪಂದ ಮಾಡಿಕೊಂಡಿದೆ ಎಂದು ಉತ್ತರ ಪ್ರದೇಶ ಸಮಾಜವಾದಿ ಪಕ್ಷದ (ಎಸ್ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ. ಇದರೊಂದಿಗೆ ವಿರೋಧ ಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ದಲ್ಲಿ ಬಿರುಕು ಮೂಡಿದಂತಾಗಿದೆ.
ಕಾಂಗ್ರೆಸ್ ಇತರೆ ಪಕ್ಷಗಳನ್ನು ಲಘುವಾಗಿ ಪರಿಗಣಿಸಿದೆ. ವಿಧಾನಸಭಾ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷಗಳ ಅಭಿಪ್ರಾಯಕ್ಕೆ ಮನ್ನಣೆ ನೀಡುತ್ತಿಲ್ಲ. ಇದೇ ಮನೋಧರ್ಮವನ್ನು ಕಾಂಗ್ರೆಸ್ ಮುಂದುವರಿಸಿದರೆ ಮೈತ್ರಿಯಲ್ಲಿ ಮುಂದುವರಿಯುವ ಬಗ್ಗೆ ಮರು ಚಿಂತನೆ ನಡೆಸಬೇಕಾಗುತ್ತದೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಹಾಗೂ ಮಾಜಿ ಸಿಎಂ ಅಖಿಲೇಶ್ ಯಾದವ್ ಎಚ್ಚರಿಕೆ ನೀಡಿದ್ದಾರೆ.
ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವ ಸಮಾಜವಾದಿ ಪಕ್ಷದ ಬಗ್ಗೆ ಕಾಂಗ್ರೆಸ್ ತೆಗೆದಿರುವ ತಕರಾರಿಗೆ ಪ್ರತಿಕ್ರಿಯೆ ನೀಡಿರುವ ಅಖಿಲೇಶ್ ಯಾದವ್, ಕಾಂಗ್ರೆಸ್ ನಾಯಕರ ಧೋರಣೆ ಇಂಡಿಯಾ’ ಮೈತ್ರಿ ಕೇವಲ ಲೋಕಸಭಾ ಚುನಾವಣೆಗೆ ಮಾತ್ರ ಎಂಬಂತಿದೆ. ಕಾಂಗ್ರೆಸ್ ಚಿಂತನೆ ಇದೇ ಆಗಿದ್ದರೆ ವಿಧಾನಸಭಾ ಚುನಾವಣೆಗೆ ನಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತೇವೆ. ಲೋಕಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಹೋರಾಡಲು ನಾವು ಸಿದ್ಧ ಎಂದು ಹೇಳಿದ್ದಾರೆ.
230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆಗೆ ನವೆಂಬರ್ 17ರಂದು ಚುನಾವಣೆ ನಿಗದಿಯಾಗಿದೆ. ಡಿಸೆಂಬರ್ 3ರಂದು ಮತ ಎಣಿಕೆ ನಡೆಯಲಿದೆ.
‘ಕಾಂಗ್ರೆಸ್ ನಾಯಕರು ಬಿಜೆಪಿಯೊಂದಿಗೆ ಒಳ ಒಪ್ಪಂದ ಮಾಡಿಕೊಂಡಿದ್ದಾರೆ’ ಎಂದು ಬೇಸರದಿಂದ ಹೇಳಿರುವ ಅವರು, ‘ಕಾಂಗ್ರೆಸ್ ನಮಗೇನು ಮಾಡಿದೆಯೋ ಅದನ್ನೇ ನಾವೂ ಮಾಡುತ್ತೇವೆ’ ಎಂದು ಎಚ್ಚರಿಸಿದ್ದಾರೆ.