ಮುಂಬೈ: ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮಮಂದಿರದ ಉದ್ಘಾಟನೆಗೆ ದಿನಾಂಕ ನಿಗದಿಯಾಗಿರುವ ಕುರಿತು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಮಹತ್ವದ ಮಾಹಿತಿ ನೀಡಿದ್ದಾರೆ.
‘ಜನವರಿ 22ರಂದು ರಾಮ ಮಂದಿರದಲ್ಲಿ ರಾಮಲಲ್ಲಾನ ಪ್ರತಿಷ್ಠಾಪನೆಯಾಗುತ್ತದೆ’ ಎಂದು ವಿಜಯದಶಮಿ ದಿನವೇ ಮೊಹನ್ ಭಾಗವತ್ ದಿನಾಂಕ ಘೋಷಿಸಿದ್ದಾರೆ.
ವಿಜಯ ದಶಮಿ ಹಿನ್ನೆಲೆಯಲ್ಲಿ ನಾಗ್ಪುರದಲ್ಲಿರುವ ಆರ್‌ಎಸ್‌ಎಸ್ ಕಚೇರಿಯಲ್ಲಿ ಆಯೋಜಿಸಿದ್ದ ವಿಜಯ ದಶಮಿ ಉತ್ಸವದಲ್ಲಿ ಅವರು ಮಾತನಾಡಿ ದರು.
‘ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದಲ್ಲಿ ಜನವರಿ 22ರಂದು ಪ್ರತಿಷ್ಠಾಪನೆ ಮಾಡಲಾಗುತ್ತದೆ. ಅದೇ ದಿನ ದೇಶದ ಎಲ್ಲ ದೇವಾಲಯಗಳಲ್ಲಿ ವಿಶೇಷ ಕಾರ್ಯಕ್ರಮ, ಧಾರ್ಮಿಕ ವಿಧಿವಿಧಾನ ಆಯೋಜಿಸಲಾಗುತ್ತದೆ’ ಎಂದು ತಿಳಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರ ಉದ್ಘಾಟನೆ ನೆರವೇರಿಸಲಿದ್ದಾರೆ.
ರಾಮಮಂದಿರ ವಿವಾದಕ್ಕೆ ಸಂಬಂಧಿಸಿದಂತೆ 2019ರ ನವೆಂಬರ್ 9ರಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿ, ರಾಮಜನ್ಮಭೂಮಿಯಲ್ಲಿಯೇ ರಾಮಮಂದಿರ ನಿರ್ಮಾಣಕ್ಕೆ ಅನುಮತಿ ನೀಡಿದೆ. 2020ರ ಆಗಸ್ಟ್ 5ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ.