ಕಲಬುರಗಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸುತ್ತಿರುವ ವಿವಿಧ ನಿಗಮಗಳಲ್ಲಿನ ಖಾಲಿ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿಯನ್ನು ಪೊಲೀಸರು ಶನಿವಾರ ವಶಕ್ಕೆ ಪಡೆದಿದ್ದಾರೆ.
ನಗರದ ಎಸ್‌ಬಿ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಬ್ಲೂಟೂತ್ ಬಳಸಿ ಅಕ್ರಮವಾಗಿ ಪರೀಕ್ಷೆ ಬರೆಯುತ್ತಿದ್ದ ತ್ರಿಮೂರ್ತಿ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ.
ಹೊರಗಡೆಯಿಂದ ಬ್ಲೂಟೂತ್ ಮೂಲಕ ತ್ರಿಮೂರ್ತಿಗೆ ಉತ್ತರ ಹೇಳುತ್ತಿದ್ದವರನ್ನು ಪತ್ತೆ ಹಚ್ಚಬೇಕಿದೆ ಎಂದು ತಿಳಿದುಬಂದಿದೆ.
ತ್ರಿಮೂರ್ತಿಯನ್ನು ವಶಕ್ಕೆ ಪಡೆಯುತ್ತಿದ್ದಂತೆ ಪಿಎಸ್‌ಐ ನೇಮಕಾತಿ ಅಕ್ರಮದ ಪ್ರಮುಖ ಆರೋಪಿ ಅಫಜಲಪುರದ ಆರ್.ಡಿ. ಪಾಟೀಲ ಮೇಲೆ ಶಂಕೆ ವ್ಯಕ್ತವಾಗಿದೆ. ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಹಲವರು ಇದೇ ಮಾದರಿಯಲ್ಲಿ ಬ್ಲೂಟೂತ್ ಬಳಸಿ ಪರೀಕ್ಷೆ ಬರೆದಿದ್ದರು. ಹೀಗಾಗಿ, ಆರ್.ಡಿ. ಪಾಟೀಲ ಹೆಸರು ಕೇಳಿಬರುತ್ತಿದೆ.