ತುಮಕೂರು : ಬೆಂಗಳೂರಿನ ಸ್ಪೇಸ್ ಮೀಡಿಯಾ ಸಂಸ್ಥೆ ಹಾಗೂ ಅದಾನಿ ಗ್ರೂಪ್ಸ್ ವತಿಯಿಂದ ನೀಡುವ ಮಹಾತ್ಮ ಗಾಂಧಿ ಸದ್ಭಾವನಾ ಅಂತಾ ರಾಷ್ಟ್ರೀಯ ಪ್ರಶಸ್ತಿಗೆ ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಭಾಜನರಾಗಿದ್ದಾರೆ.
ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಸಮಾರಂಭವೊಕದರಲ್ಲಿ ಅವರು ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು. ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಪರಿವರ್ತನೆಗೆ ಕೊಡುಗೆ ನೀಡಿದ 15 ಸಾಧಕರಿಗೆ ಇದೇ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಪ್ರೊ. ಎಂ. ವೆಂಕಟೇಶ್ವರಲು ಅವರು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಮೇಲೆ ಜಾರಿಗೆ ತಂದ ಮಧ್ಯಾಹ್ನದ ಭೋಜನ ಯೋಜನೆಯು ದೇಶದ ವಿಶ್ವವಿದ್ಯಾನಿಲಯಗಳಲ್ಲೇ ಮೊದಲನೆಯದು ಎಂಬ ಮನ್ನಣೆಗೆ ಪಾತ್ರವಾಗಿದೆ. ಈ ಹಿಂದೆ ವಿವಿಯ ಕುಲಸಚಿವರಾಗಿಯೂ ಅವರು ಅನೇಕ ಆಡಳಿತಾತ್ಮಕ ಸುಧಾರಣೆಗಳನ್ನು ಜಾರಿಗೆ ತಂದಿದ್ದರು. ಕುಲಪತಿಗಳಾಗಿ ಹೊಸ ಕ್ಯಾಂಪಸ್‌ನ ಪ್ರಗತಿ, ಮೂಲಭೂತ ಸೌಕರ್ಯಗಳ ಅಭಿವೃದ್ಧಿ, ಶೈಕ್ಷಣಿಕ ಹಾಗೂ ಸಂಶೋಧನ ವಲಯದ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿರುವುದು ಪ್ರಶಂಸೆಗೆ ಪಾತ್ರವಾಗಿದೆ.
ಪ್ರಾಣಿಶಾಸ್ತ್ರ , ಅನ್ವಯಿಕ ಪ್ರಾಣಿಶಾಸ್ತ್ರ, ಪರಿಸರ ವಿಜ್ಞಾನ, ಸೂಕ್ಷ್ಮ ಜೀವವಿಜ್ಞಾನ ಮತ್ತು ವನ್ಯಜೀವಿ ನಿರ್ವಹಣೆಯಲ್ಲಿ ತಮ್ಮ ಬೋಧನೆ ಮತ್ತು ಸಂಶೋಧನೆಯನ್ನು ಕೈಗೊಂಡಿದ್ದಾರೆ. ನೂರಕ್ಕೂ ಹೆಚ್ಚು ಸಂಶೋಧನಾ ಪ್ರಬಂಧಗಳನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ನಿಯತ ಕಾಲಿಕಗಳಲ್ಲಿ ಪ್ರಕಟಿಸಿದ್ದಾರೆ. ಕುವೆಂಪು ವಿವಿ ದೂರ ಶಿಕ್ಷಣ ನಿರ್ದೇಶಕರಾಗಿ, ವಿವಿಧ ವಿಶ್ವವಿದ್ಯಾಲಯಗಳಲ್ಲಿ ಹಲವಾರು ಶೈಕ್ಷಣಿಕ ಮತ್ತು ಆಡಳಿತಾತ್ಮಕ ಹುದ್ದೆಗಳನ್ನು ನಿರ್ವಹಿಸಿದ್ದಾರೆ.