Friday, 22nd November 2024

ಮಧ್ಯಪ್ರದೇಶ, ಛತ್ತೀಸ್‌ಗಢದ ಹೊಸ ಮುಖ್ಯಮಂತ್ರಿ ಪ್ರಮಾಣವಚನ ಇಂದು

ನವದೆಹಲಿ: ಮಧ್ಯಪ್ರದೇಶ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್, ಛತ್ತೀಸ್‌ಗಢದ ನೂತನ ಸಿಎಂ ಆಗಿ ವಿಷ್ಣು ದೇವ್ ಸಾಯಿ ಬುಧವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಮಧ್ಯಪ್ರದೇಶದ ಲಾಲ್ ಪರೇಡ್ ಮೈದಾನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಮೋಹನ್ ಯಾದವ್ ಹಾಗೂ ವಿಷ್ಣು ಸಾಯಿ ಅವರು ಮಧ್ಯಾಹ್ನ ಛತ್ತೀಸ್‌ಗಢದ ರಾಯ್‌ಪುರದ ಸೈನ್ಸ್ ಕಾಲೇಜು ಮೈದಾನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಇತರರು ಎರಡೂ ಸ್ಥಳಗಳಲ್ಲಿ ನಡೆಯಲಿರುವ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ. ಮಧ್ಯಪ್ರದೇಶದಲ್ಲಿ ಉಪ ಮುಖ್ಯಮಂತ್ರಿಯಾಗಿ ರಾಜೇಂದ್ರ ಶುಕ್ಲಾ ಮತ್ತು ಜಗದೀಶ್ ದೇವದಾ ಅಧಿಕಾರ ಸ್ವೀಕರಿಸಲಿದ್ದಾರೆ. ಕೇಂದ್ರ ಮಾಜಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಅಸೆಂಬ್ಲಿ ಸ್ಪೀಕರ್ ಆಗಲಿದ್ದಾರೆ.

”ನಮ್ಮ ನೂತನ ಮುಖ್ಯಮಂತ್ರಿ ಮೋಹನ್ ಯಾದವ್ ಮತ್ತು ಅವರ ಸಂಪುಟದ ಸಚಿವರು ಬುಧವಾರ ಮೋತಿಲಾಲ್ ನೆಹರು ಕ್ರೀಡಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್ ಶಾ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ ಕಾರ್ಯಕ್ರಮ ಜರುಗಲಿದೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಡಿ ಶರ್ಮಾ ಹೇಳಿದ್ದಾರೆ.

ಮಧ್ಯಪ್ರದೇಶದಲ್ಲಿ ನ.17 ರಂದು 230 ವಿಧಾನಸಭಾ ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಡಿಸೆಂಬರ್ 3 ರಂದು ಮತ ಎಣಿಕೆ ಜರುಗಿತ್ತು. ಬಿಜೆಪಿ 163 ಸ್ಥಾನಗಳನ್ನು ಗೆದ್ದುಕೊಂಡಿದೆ. ಆದರೆ, ಕಾಂಗ್ರೆಸ್ 66 ಸ್ಥಾನಗಳೊಂದಿಗೆ ಎರಡನೇ ಸ್ಥಾನವನ್ನು ಗಳಿಸಿದೆ.