Sunday, 15th December 2024

ಜ.12 ರಂದು ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ ಉದ್ಘಾಟನೆ

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಅತಿ ಉದ್ದದ ಸಮುದ್ರ ಸೇತುವೆ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ ಅನ್ನು ಜ.12 ರಂದು ಉದ್ಘಾಟಿಸಲಿದ್ದಾರೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ತಿಳಿಸಿದ್ದಾರೆ.

ಮುಂಬೈನ ಸೆವ್ರಿ ಮತ್ತು ರಾಯಗಡ ಜಿಲ್ಲೆಯ ನ್ಹವಾ ಶೇವಾ ಪ್ರದೇಶದ ನಡುವಿನ 21.8 ಕಿ.ಮೀ ಉದ್ದದ ಸೇತುವೆಯು ಪ್ರಸ್ತುತ ಎರಡು ಗಂಟೆಗಳಿಂದ ಸುಮಾರು 15-20 ನಿಮಿಷಗಳಿಗೆ ಪ್ರಯಾಣವನ್ನು ಕಡಿಮೆ ಮಾಡುತ್ತದೆ ಎಂದು ಸಿಎಂ ಹೇಳಿದ್ದಾರೆ.

ಈ ಸೇತುವೆಯು ಆರ್ಥಿಕ ಅಭಿವೃದ್ಧಿ ಮತ್ತು ಅದಕ್ಕೆ ಸಂಬಂಧಿಸಿದ ಪ್ರದೇಶಗಳಲ್ಲಿ ಬೆಳವಣಿಗೆಯನ್ನು ತರುತ್ತದೆ ಎಂದು ಶಿಂಧೆ ತಿಳಿಸಿದ್ದಾರೆ.

ರಾಜ್ಯದ ಎರಡು ದೊಡ್ಡ ನಗರಗಳನ್ನು ಸಂಪರ್ಕಿಸುವ ಮುಂಬೈ ಪುಣೆ ಎಕ್ಸ್‌ ಪ್ರೆಸ್‌ವೇಗೆ MTHL ಮತ್ತಷ್ಟು ಸಂಪರ್ಕ ಕಲ್ಪಿಸುತ್ತದೆ. MTHL 6-ಲೇನ್ ಸಮುದ್ರ ಕೊಂಡಿಯಾಗಿದ್ದು, ಸಮುದ್ರದ ಮೇಲೆ 16.50 ಕಿಲೋಮೀಟರ್ ಮತ್ತು ಭೂಮಿಯಲ್ಲಿ 5.50 ಕಿಲೋಮೀಟರ್ ವಿಸ್ತಾರವಾಗಿದೆ.

ಯೋಜನೆಯಿಂದ ಸಂತ್ರಸ್ತರಾದ ವ್ಯಕ್ತಿಗಳಿಗೆ ಪುನರ್ವಸತಿ ಕಲ್ಪಿಸಲಾಗಿದೆ ಮತ್ತು ಯೋಜನೆಯ ಅನುಷ್ಠಾನದಿಂದ ಜೀವನೋಪಾಯಕ್ಕೆ ತೊಂದರೆ ಯಾದ ಮೀನುಗಾರರಿಗೆ ಸರ್ಕಾರದ ನೀತಿಗಳಿಗೆ ಅನುಗುಣವಾಗಿ ಪರಿಹಾರವನ್ನು ನೀಡಲಾಗಿದೆ.