ಮುಂಬೈ: ಅಫ್ಘಾನಿಸ್ತಾನ ವಿರುದ್ಧದ ಮುಂಬರುವ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಅನುಭವಿ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಸೇರ್ಪಡೆ ಕುರಿತು ಚರ್ಚಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಭಾನುವಾರ ಮುಂಬೈನಲ್ಲಿ ಸಭೆ ನಡೆಸಲಿದೆ.
ಜ.11ರಂದು ಪ್ರಾರಂಭವಾಗಲಿರುವ ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗೆ ತನ್ನ ತಂಡವನ್ನು ಪ್ರಕಟಿಸಿಲ್ಲ. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ಆಯ್ಕೆ ವಿಚಾರವೇ ಬಿಸಿಸಿಐಗೆ ನುಂಗಲಾದರ ಬಿಸಿತುಪ್ಪವಾಗಿ ಪರಿಣಮಿಸಿದೆ.
ಶನಿವಾರ ಅಫ್ಘಾನಿಸ್ತಾನ ತನ್ನ 19 ಸದಸ್ಯರ ಬಲಿಷ್ಠ ತಂಡವನ್ನು ಪ್ರಕಟಿಸಿದ್ದರೆ, ಬಿಸಿಸಿಐ ಆಯ್ಕೆ ಸಮಿತಿಯು ಭಾನುವಾರದ ಸಭೆಯ ನಂತರ, ಭಾರತ ತಂಡವನ್ನು ಪ್ರಕಟಿಸುವ ಸಾಧ್ಯತೆ ಇದೆ.
ನಾಯಕ ರೋಹಿತ್ ಶರ್ಮಾ ಮತ್ತು ಮಾಜಿ ನಾಯಕ ವಿರಾಟ್ ಕೊಹ್ಲಿ ಇಬ್ಬರೂ ಟಿ20 ಪಂದ್ಯಗಳಲ್ಲಿ ಭಾಗವಹಿಸಲು ತಮ್ಮ ಉತ್ಸುಕತೆಯನ್ನು ವ್ಯಕ್ತಪಡಿಸಿದ್ದಾರೆ.
2024ರ ಟಿ20 ವಿಶ್ವಕಪ್‌ನಲ್ಲಿ ಈ ಇಬ್ಬರು ಅನುಭವಿ ಆಟಗಾರರ ಭಾಗವಹಿಸುವಿಕೆಯ ಅಂತಿಮ ನಿರ್ಧಾರವು, ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024ರ ಪ್ರದರ್ಶನವನ್ನು ಅವಲಂಬಿಸಿರುತ್ತದೆ.
ಸೂರ್ಯಕುಮಾರ್ ಯಾದವ್ ಅವರು ಅಫ್ಘಾನಿಸ್ತಾನ ವಿರುದ್ಧದ ಸರಣಿಯಿಂದ ಹೊರಗುಳಿಯಲಿದ್ದಾರೆ. ಪಾದದ ಗಾಯದಿಂದಾಗಿ ಹಾರ್ದಿಕ್ ಪಾಂಡ್ಯ ಕೂಡ ಟಿ20 ಸರಣಿಯನ್ನು ತಪ್ಪಿಸಿಕೊಳ್ಳಲಿದ್ದಾರೆ.
ಭಾರತದ ಸಂಭಾವ್ಯ ತಂಡ
ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ರಿಂಕು ಸಿಂಗ್, ಜಿತೇಶ್ ಶರ್ಮಾ, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಕುಲದೀಪ್ ಯಾದವ್, ಅರ್ಶ್‌ದೀಪ್ ಸಿಂಗ್, ಮುಖೇಶ್ ಕುಮಾರ್, ದೀಪಕ್ ಚಹಾರ್.