ಚಿತ್ರದುರ್ಗ: ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅಧ್ಯಕ್ಷತೆಯಲ್ಲಿ ಚಿತ್ರದುರ್ಗ ಹಾಗೂ ಚಿಕ್ಕಮಗಳೂರು ಅಂತರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹೊಸದುರ್ಗ ತಾಲ್ಲೂಕಿನ ಸಾಣೇಹಳ್ಳಿಯಲ್ಲಿ ಫೆ.2 ಮತ್ತು 3ರಂದು ಆಯೋಜಿಸಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ ತಿಳಿಸಿದರು.
‘ರಾಜ್ಯದಲ್ಲಿಯೇ ಇದೊಂದು ವಿನೂತನ ಪ್ರಯತ್ನ. ಭೌಗೋಳಿಕ, ಸಾಹಿತ್ಯ ಹಾಗೂ ಸಾಂಸ್ಕೃತಿಕವಾಗಿ ಸಾಮ್ಯತೆ ಮತ್ತು ಭಿನ್ನತೆ ಹೊಂದಿರುವ ಎರಡು ಜಿಲ್ಲೆಗಳು ಒಂದೆಡೆ ಸಮ್ಮೇಳನ ನಡೆಸುತ್ತಿರುವುದು ಇದೇ ಮೊದಲು. ಎರಡು ಜಿಲ್ಲೆಯ ಬಾಂಧವ್ಯ ವೃದ್ಧಿಗೆ ಹಾಗೂ ಸಾಂಸ್ಕೃತಿಕ ವಾತಾವರಣ ನಿರ್ಮಾಣಕ್ಕೆ ಸಮ್ಮೇಳನ ನೆರವಾಗಲಿದೆ’ ಎಂದು ಮಾಹಿತಿ ನೀಡಿದರು.
‘ಡಿ.30 ಮತ್ತು 31ಕ್ಕೆ ಸಮ್ಮೇಳನವನ್ನು ಆಯೋಜಿಸಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದಿನಾಂಕ ಹೊಂದಾಣಿಕೆ ಆಗದ ಕಾರಣಕ್ಕೆ ಫೆಬ್ರುವರಿಗೆ ಮುಂದೂಡಲಾಯಿತು. ಸಮ್ಮೇಳನಕ್ಕೆ ಬರಲು ಪ್ರಯತ್ನಿಸುವುದಾಗಿ ಮುಖ್ಯಮಂತ್ರಿ ಆಶ್ವಾಸನೆ ನೀಡಿದ್ದಾರೆ ಎಂದರು.
‘ಸಾಹಿತಿ ಗೋ.ರು.ಚನ್ನಬಸಪ್ಪ ಅವರು ಫೆ. 2ರಂದು ಬೆಳಿಗ್ಗೆ 10.30ಕ್ಕೆ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಲಿದ್ದಾರೆ. ‘ಬೆಳಕಿನೆಡೆಗೆ’ ಸ್ಮರಣ ಸಂಚಿಕೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಲೋಕಾರ್ಪಣೆ ಮಾಡಲಿದ್ದಾರೆ’ ಎಂದು ವಿವರಿಸಿದರು.
‘ಕವಿಗೋಷ್ಠಿಗೆ 15 ಜನರನ್ನು ಆಯ್ಕೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ 9 ಹಾಗೂ ಚಿತ್ರದುರ್ಗ ಜಿಲ್ಲೆಯ 6 ಕವಿಗಳು ಪಾಲ್ಗೊಳ್ಳಲಿದ್ದಾರೆ.