Saturday, 14th December 2024

ಫೆ.20 ರಿಂದ ಅರೆಸೈನಿಕ ಪಡೆಗಳಲ್ಲಿನ ಕಾನ್ಸ್’ಟೇಬಲ್ ನೇಮಕಾತಿ ಪರೀಕ್ಷೆ

ವದೆಹಲಿ: ಸಿಆರ್‌’ಪಿಎಫ್, ಬಿಎಸ್‌ಎಫ್ ಮತ್ತು ಸಿಐಎಸ್‌ಎಫ್ ನಂತಹ ಅರೆಸೈನಿಕ ಪಡೆಗಳಲ್ಲಿನ ಕಾನ್ಸ್’ಟೇಬಲ್ ನೇಮಕಾತಿ ಪರೀಕ್ಷೆಯನ್ನು ಫೆ.20 ರಿಂದ ಮಾರ್ಚ್ 7 ರವರೆಗೆ ಮೊದಲ ಬಾರಿಗೆ ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲಾಗುವುದು ಎಂದು ಗೃಹ ಸಚಿವಾಲಯ ಭಾನುವಾರ ತಿಳಿಸಿದೆ.

ದೇಶಾದ್ಯಂತ 128 ನಗರಗಳಲ್ಲಿ ಸುಮಾರು 48 ಲಕ್ಷ ಅಭ್ಯರ್ಥಿಗಳು ಕಾನ್ಸ್’ಟೇಬಲ್ (ಸಾಮಾನ್ಯ ಕರ್ತವ್ಯ) ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಇಂತಹ ನೇಮಕಾತಿ ಪರೀಕ್ಷೆಗಳನ್ನು ಇಂಗ್ಲಿಷ್ ಮತ್ತು ಹಿಂದಿ ಹೊರತುಪಡಿಸಿ ಪ್ರಾದೇಶಿಕ ಭಾಷೆಗಳಲ್ಲಿ ನಡೆಸುವ ನಿರ್ಧಾರವನ್ನು ಕಳೆದ ವರ್ಷ ಏಪ್ರಿಲ್ ನಲ್ಲಿ ಪ್ರಕಟಿಸಲಾಗಿತ್ತು.

ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಸ್ಥಳೀಯ ಯುವಕರ ಭಾಗವಹಿಸುವಿಕೆ ಹೆಚ್ಚಿಸಲು ಮತ್ತು ಪ್ರಾದೇಶಿಕ ಭಾಷೆಗಳನ್ನು ಉತ್ತೇಜಿಸಲು ಗೃಹ ಸಚಿವ ಅಮಿತ್ ಶಾ ಅವರ ಉಪಕ್ರಮದ ಮೇರೆಗೆ ಈ ಐತಿಹಾಸಿಕ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ, ಅಸ್ಸಾಮಿ, ಬಂಗಾಳಿ, ಗುಜರಾತಿ, ಮರಾಠಿ, ಮಲಯಾಳಂ, ಕನ್ನಡ, ತಮಿಳು, ತೆಲುಗು, ಒಡಿಯಾ, ಉರ್ದು, ಪಂಜಾಬಿ, ಮಣಿಪುರಿ ಮತ್ತು ಕೊಂಕಣಿ ಸೇರಿದಂತೆ ಈ ಕೆಳಗಿನ 13 ಪ್ರಾದೇಶಿಕ ಭಾಷೆಗಳಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಲಾಗುತ್ತದೆ.