ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದೆಲ್ಲೆಡೆ ವರುಣನ ಅರ್ಭಟ ಹೆಚ್ಚಾಗಿದ್ದು, ಕೆಲವು ಭಾಗಗಳಲ್ಲಿ ಗುಡುಗು-ಸಿಡಿಲು ಸಹಿತ ರಭಸದ ಮಳೆಯಾಗಿದೆ. ಈವರೆಗೂ ಒಟ್ಟು 6 ಮಂದಿ ಸಾವನ್ನಪ್ಪಿ, ಅನೇಕ ಕಡೆ ಕೆರೆಕಟ್ಟೆ ಗಳು ಒಡೆದು ಭಾರೀ ಪ್ರಮಾಣದ ಆಸ್ತಿ ಪಾಸ್ತಿ ನಷ್ಟ ಸಂಭವಿಸಿದೆ.
ವಿಜಯಪುರ ಜಿಲ್ಲೆಯಲ್ಲಿ ತಾಯಿ-ಮಗಳು ಹಾಗೂ ಚಿತ್ರದುರ್ಗ ಜಿಲ್ಲೆಯಲ್ಲಿ ರೈತರೊಬ್ಬರು ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಕಡಕೋಳ ಗ್ರಾಮದಲ್ಲಿ ಮಹಾದೇವಿ ಭಜಂತ್ರಿ (40) ಹಾಗೂ ಅವರ ಮಗಳು ಸೋನಿ ಭಜಂತ್ರಿ (12) ಮತ್ತು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ತಾಲ್ಲೂಕಿನ ಅಶೋಕ ಸಿದ್ದಾಪುರ ಗ್ರಾ.ಪಂ. ವ್ಯಾಪ್ತಿಯ ಕಾಡು ಸಿದ್ದಾಪುರ ಗ್ರಾಮದಲ್ಲಿ ಸಿಡಿಲು ಬಡಿದು ರೈತ ಗಾಳೆಪ್ಪ (50) ಮೃತಪಟ್ಟಿದ್ದಾರೆ.
ಮಳೆ ಪರಿಸ್ಥಿತಿ ಎದುರಿಸಲು ಸಿದ್ಧವಾಗಿರುವಂತೆ ಸರ್ಕಾರ ಜಿಲ್ಲಾಡಳಿತಗಳಿಗೆ ನಿರ್ದೇಶನ ನೀಡಿದೆ. ಕೊಪ್ಪಳದಲ್ಲಿ ಕೃಷಿ ಜಮೀನು ಗಳಿಗೆ ನೀರು ನುಗ್ಗಿದ್ದು, ಅಪಾರ ಪ್ರಮಾಣದ ಬೆಳೆ ಜಲಾವೃತ ಗೊಂಡಿದೆ. ನಾಳೆ ಕರಾವಳಿ ಭಾಗದ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಒಳನಾಡಿನಲ್ಲಿ ಅ.13ರವರೆಗೂ ಮಳೆಯಾಗುವ ಸಂಭವವಿದೆ.
ತುಮಕೂರು, ರಾಮನಗರ ಸೇರಿದಂತೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ಬಹುತೇಕ ಕಡೆ ಇನ್ನೂ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಧಾರವಾಡ, ಬೆಳಗಾವಿ, ವಿಜಯಪುರ, ಹಾವೇರಿ, ಬಳ್ಳಾರಿ, ಬಾಗಲಕೋಟೆ, ಕೊಡಗು, ಹಾಸನ, ಮಂಡ್ಯ ಜಿಲ್ಲೆಯ ವಿವಿಧೆಡೆ ಧಾರಾ ಕಾರ ಮಳೆಯಾಗಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ.