ಜೈಪುರ: ಗುಜರಾತ್ ಟೈಟಾನ್ಸ್ ವಿರುದ್ಧ ಸವಾಯ್ ಮಾನ್ ಸಿಂಗ್ ಸ್ಟೇಡಿಯಂನಲ್ಲಿ ಬುಧವಾರ ರಾತ್ರಿ ನಡೆದ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಪಡೆಯು 17ನೇ ಸೀಸನ್ ನ ಮೊದಲ ಸೋಲು ಕಂಡಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದ ಕಾರಣ ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಅವರಿಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.
“ಇದು ಐಪಿಎಲ್ನ ನೀತಿ ಸಂಹಿತೆಯ ಅಡಿಯಲ್ಲಿ ಈ ಋತುವಿನ ಮೊದಲ ಅಪರಾಧವಾಗಿದ್ದು, ಕನಿಷ್ಠ ಓವರ್ ರೇಟ್ ಅಪರಾಧಗಳಿಗೆ ಸಂಬಂಧಿಸಿದಂತೆ ಸ್ಯಾಮ್ಸನ್ಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ” ಎಂದು ಐಪಿಎಲ್ ಪ್ರಕಟಣೆ ತಿಳಿಸಿದೆ.
ಜೈಪುರದಲ್ಲಿ ಉತ್ತಮ ಫಾರ್ಮ್ ಮುಂದುವರಿಸಿದ ಸಂಜು ಸ್ಯಾಮ್ಸನ್ 38 ಎಸೆತಗಳಲ್ಲಿ ಅಜೇಯ 68 ರನ್ ಗಳಿಸಿದರು. ರಿಯಾನ್ ಪರಾಗ್ ಅವರು 78 ರನ್ ಗಳಿಸಿ ನೆರವಾದರು. ರಾಯಲ್ಸ್ 3 ವಿಕೆಟ್ ನಷ್ಟಕ್ಕೆ 196 ರನ್ ಗಳಿಸಿತು.