Monday, 25th November 2024

ಪೆನ್​ಡ್ರೈವ್​ ಪ್ರಕರಣ: ಮಾಜಿ ಕಾರು ಚಾಲಕನ ಜಾಮೀನು ಅರ್ಜಿ ವಜಾ

ಹಾಸನ: ಹಾಸನ ಪೆನ್​ಡ್ರೈವ್​ ಪ್ರಕರಣಕ್ಕೆ ಸಂಬಂಧಿಸಿ ಪ್ರಜ್ವಲ್ ರೇವಣ್ಣ ಅವರ ಮಾಜಿ ಕಾರು ಚಾಲಕ ಕಾರ್ತಿಕ್ ಸೇರಿದಂತೆ ನಾಲ್ವರು ಆರೋಪಿಗಳ ಜಾಮೀನು ಅರ್ಜಿ ವಜಾ ಆಗಿದೆ.

ಪೆನ್​ಡ್ರೈವ್ ಬಿಡುಗಡೆ ಆರೋಪದಡಿ ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್ ಗೌಡ, ಪುಟ್ಟರಾಜ್​​, ನವೀನ್,​​ ಚೇತನ್ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿ ಹಾಸನ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.

ಹಾಸನ ಅಶ್ಲೀಲ ವಿಡಿಯೋ ಪೆನ್​ಡ್ರೈವ್ ಬಿಡುಗಡೆ ಆರೋಪದಡಿ ಜೆಡಿಎಸ್ ನೀಡಿದ ದೂರಿನ ಮೇರೆಗೆ ಸೈಬರ್ ಕ್ರೈಮ್​​ ಪೊಲೀಸ್ ಠಾಣೆಯಲ್ಲಿ ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್ ಗೌಡ, ಪುಟ್ಟರಾಜ್​​, ನವೀನ್,​​ ಚೇತನ್ ವಿರುದ್ಧ ಎಫ್​ಐಆರ್ ದಾಖಲಾಗಿತ್ತು. ಬಳಿಕ ಆರೋಪಿಗಳು ನಿರೀಕ್ಷಣಾ ಜಾಮೀನು ನೀಡುವಂತೆ ಕೋರಿ ಹಾಸನ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ್ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ವಿಡಿಯೋ ಸಿಕ್ಕ ಬಳಿಕ ನವೀನ್ ಗೌಡ, ಪ್ರಜ್ವಲ್ ಅಶ್ಲೀಲ ವಿಡಿಯೋ ಬಿಡುಗಡೆಗೆ ಕ್ಷಣಗಣನೆ ಎಂದು ಪೋಸ್ಟ್ ಹಾಕಿದ್ದ. ಇದು ಸಾಮಾಜಿಕ ಜಾಲತಾಣ ಗಳಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿತ್ತು. ಅಲ್ಲದೇ ಭಾರೀ ಚರ್ಚೆಗೆ ಗ್ರಾಸವಾಗಿತ್ತು.