ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಈ ವಿಷಯ ತೀವ್ರ ಚರ್ಚೆಗೆ ಗ್ರಾಸವಾದ ಬೆನ್ನಲ್ಲೇ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಮೈಸೂರಿನ ಮುಡಾ ಪ್ರಾಧಿಕಾರಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರದಿಂದ ದೊಡ್ಡ ಹಗರಣ ನಡೆದಿದೆ ಎಂಬ ಆರೋಪದಡಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದರು.
ಈ ಪ್ರಕರಣದಲ್ಲಿ ತುರ್ತು ವಿಚಾರಣೆಗೆ ಒಪ್ಪಿರುವ ಕರ್ನಾಟಕ ಹೈಕೋರ್ಟ್ ಮಧ್ಯಾಹ್ನ 2.30ಕ್ಕೆ ವಿಚಾರಣೆ ನಡೆಸಲು ಒಪ್ಪಿದೆ.
ಇನ್ನು ರಾಜ್ಯಪಾಲರ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ಕೈಗೊಂಡಿರುವ ಕಾಂಗ್ರೆಸ್ ಕಾರ್ಯಕರ್ತರು, ಷಡ್ಯಂತ್ರಕ್ಕೆ ಸವಾಲ್ ಎಂಬ ಹೆಸರಿನಡಿ ಕಾಲ್ನಡಿಗೆಯಲ್ಲಿ ಭಾಗಿಯಾಗಿದ್ದಾರೆ.
ಇದೆಲ್ಲವೂ ಬಿಜೆಪಿ ಪಿತೂರಿ ಎಂದು ಆರೋಪಿಸಿ, ರಾಜ್ಯದ ನಾನಾ ಜಿಲ್ಲೆಗಳಲ್ಲಿ ಬೃಹತ್ ಪ್ರತಿಭಟನೆಯಲ್ಲಿ ಭಾಗಿಯಾಗಿರುವ ‘ಕೈ’ ಕಾರ್ಯಕರ್ತರು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಘೋಷಣೆಗಳನ್ನು ಕೂಗುತ್ತ ಧರಣಿ ನಡೆಸುತ್ತಿದ್ದಾರೆ.
ಬಾಗಲಕೋಟೆಯಲ್ಲಿ ಟೈರ್ಗೆ ಬೆಂಕಿ ಹಚ್ಚಿ ಕೈ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದರೆ, ಇತ್ತ ತುಮಕೂರು, ರಾಯಚೂರು, ಮಂಗಳೂರು, ಬೆಂಗಳೂರು, ಬೆಂಗಳೂರು ಗ್ರಾ., ದಾವಣಗೆರೆ, ಮೈಸೂರು ಸೇರಿದಂತೆ ಹಲವೆಡೆ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ. ಕಾಲ್ನಡಿಗೆಯಲ್ಲಿ ಭಾಗಿಯಾಗಿರುವ ಅಪಾರ ಸಂಖ್ಯೆಯ ಕಾಂಗ್ರೆಸ್ ಕಾರ್ಯಕರ್ತರು, ಯಾವುದೇ ಕಾರಣಕ್ಕೂ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ಸಲ್ಲಿಸಲ್ಲ ಎಂದು ಧ್ವನಿ ಏರಿಸುತ್ತಿದ್ದಾರೆ.
ಸಿಎಂ ಪರ ವಕೀಲ ರವಿವರ್ಮ ಕುಮಾರ್ ಅವರು ವಾದ ಮಂಡನೆ ಮಾಡಲಿದ್ದಾರೆ. ನ್ಯಾಯಮೂರ್ತಿ ಹೇಮಂತ್ ಕುಮಾರ್ ನೇತೃತ್ವದ ನ್ಯಾಯಪೀಠ ವಿಚಾರಣೆ ನಡೆಸಲಿದೆ. ಸುಪ್ರೀಂಕೋರ್ಟ್ ಹಿರಿಯ ವಕೀಲರುಗಳಾದ ಕಪಿಲ್ ಸಿಬಲ್, ಅಭಿಷೇಕ್ ಮನು ಸಿಂಗ್ವಿ ಹಾಗೂ ಪ್ರಶಾಂತ್ ಭೂಷಣ್ ಬೆಂಗಳೂ ರಿಗೆ ಬಂದಿಳಿದಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ ಅವರು ಮಂತ್ರಾಲಯ ಪ್ರವಾಸ ಕೈಗೊಳ್ಳಬೇಕಾಗಿತ್ತು. ಆದರೆ, ಪ್ರವಾಸವನ್ನು ರದ್ದುಗೊಳಿಸಿ ಬೆಂಗಳೂರಿನಲ್ಲೇ ಉಳಿದುಕೊಂಡು ವಕೀಲರುಗಳ ಜತೆ ಚರ್ಚೆ ನಡೆಸಿ, ಕಾನೂನು ಹೋರಾಟದಲ್ಲಿ ನಿರತರಾಗಿದ್ದಾರೆ.