ನವದೆಹಲಿ: ಕೋಲ್ಕತ್ತಾ ಟ್ರೈನಿ ವೈದ್ಯೆ ಅತ್ಯಾಚಾರ ಕೊಲೆ ಪ್ರಕರಣ(Kolkata doctor Murder Case)ಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಪ್ರತಿಕ್ರಿಯಿಸಿದ್ದು, ಮಹಿಳೆಯರ ಮೇಲಿನ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ತ್ವರಿತ ನ್ಯಾಯದ ಅಗತ್ಯವನ್ನು ಒತ್ತಿ ಹೇಳಿದರು. ಅವರು ಇಂದು ಭಾರತದ ಮುಖ್ಯ ನ್ಯಾಯಮೂರ್ತಿ(CJI) ಡಿವೈ ಚಂದ್ರಚೂಡ್(D Y Chandrachud) ಅವರ ಉಪಸ್ಥಿತಿಯಲ್ಲಿ ಜಿಲ್ಲಾ ನ್ಯಾಯಾಂಗದ ರಾಷ್ಟ್ರೀಯ ಸಮ್ಮೇಳನದ ಉದ್ಘಾಟನಾ ಭಾಷಣ ಮಾಡಿದರು.ಈ ವೇಳೆ ಅವರು ಕೋಲ್ಕತ್ತಾದ ಹೀನಕೃತ್ಯದ ಬಗ್ಗೆ ಪ್ರಸ್ತಾಪಿಸಿದ್ದು, ತ್ವರಿತ ನ್ಯಾಯ ಮತ್ತು ಕಟ್ಟುನಿಟ್ಟಿನ ಕಾನೂನು ಕ್ರಮದಿಂದ ಮಾತ್ರ ಮಹಿಳಾ ಸುರಕ್ಷತೆ ಹೆಚ್ಚಿಸಲು ಸಾಧ್ಯ ಎಂಉದ ಅಭಿಪ್ರಾಯಪಟ್ಟರು.
ಕೋಲ್ಕತ್ತಾದ ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 31 ವರ್ಷದ ಮಹಿಳಾ ಟ್ರೈನಿ ವೈದ್ಯೆಯ ಕೊಲೆ ಮತ್ತು ಅತ್ಯಾಚಾರ ಮತ್ತು ಥಾಣೆಯಲ್ಲಿ ಇಬ್ಬರು ನರ್ಸರಿ ಶಾಲೆಯ ಬಾಲಕಿಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ಬಗ್ಗೆ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿರುವ ಬೆನ್ನಲ್ಲೇ ಪ್ರಧಾನಿ ಮೋದಿ ಈ ಹೇಳಿಕೆ ನೀಡಿದ್ದಾರೆ.
“ಇಂದು, ಮಹಿಳೆಯರ ಮೇಲಿನ ದೌರ್ಜನ್ಯಗಳು, ಮಕ್ಕಳ ಸುರಕ್ಷತೆಯು ಸಮಾಜದ ಗಂಭೀರ ಕಾಳಜಿಯಾಗಿದೆ. ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಎಷ್ಟು ವೇಗವಾಗಿ ನ್ಯಾಯ ದೊರೆಯುತ್ತದೆಯೋ, ಜನಸಂಖ್ಯೆಯ ಅರ್ಧದಷ್ಟು ಜನರು ತಮ್ಮ ಸುರಕ್ಷತೆಯ ಬಗ್ಗೆ ಹೆಚ್ಚಿನ ಭರವಸೆಯನ್ನು ಹೊಂದುತ್ತಾರೆ. ಮಹಿಳೆಯರ ವಿರುದ್ಧದ ಅಪರಾಧಗಳನ್ನು ಎದುರಿಸಲು ಹಲವಾರು ಕಠಿಣ ಕಾನೂನುಗಳಿವೆ ಮತ್ತು ತ್ವರಿತ ನ್ಯಾಯವನ್ನು ಖಚಿತಪಡಿಸಿಕೊಳ್ಳಲು ಅಪರಾಧ ನ್ಯಾಯ ವ್ಯವಸ್ಥೆಯ ನಡುವೆ ಉತ್ತಮ ಸಮನ್ವಯವನ್ನು ಖಚಿತಪಡಿಸಿಕೊಳ್ಳುವ ಅಗತ್ಯವಿದೆ ಎಂದು ಮೋದಿ ಹೇಳಿದರು.
ನ್ಯಾಯಾಂಗವನ್ನು ಸಂವಿಧಾನದ ರಕ್ಷಕ ಎಂದು ಪರಿಗಣಿಸಲಾಗಿದೆ ಮತ್ತು ಸುಪ್ರೀಂ ಕೋರ್ಟ್ ಮತ್ತು ನ್ಯಾಯಾಂಗವು ಜವಾಬ್ದಾರಿಯನ್ನು ನಿರ್ವಹಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಭಾರತದ ಜನರು ಸುಪ್ರೀಂ ಕೋರ್ಟ್ ಅಥವಾ ನ್ಯಾಯಾಂಗದ ಮೇಲೆ ಎಂದಿಗೂ ಅಪನಂಬಿಕೆ ತೋರಿಸಿಲ್ಲ ಎಂದು ಮೋದಿ ಹೇಳಿದರು. ತುರ್ತು ಪರಿಸ್ಥಿತಿಯನ್ನು “ಕರಾಳ” ಅವಧಿ ಎಂದು ಬಣ್ಣಿಸಿದ ಪ್ರಧಾನಿ, ಮೂಲಭೂತ ಹಕ್ಕುಗಳನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗವು ಪ್ರಮುಖ ಪಾತ್ರ ವಹಿಸಿದೆ. ರಾಷ್ಟ್ರೀಯ ಭದ್ರತೆಯ ವಿಷಯಗಳಲ್ಲಿ, ನ್ಯಾಯಾಂಗವು ರಾಷ್ಟ್ರೀಯ ಹಿತಾಸಕ್ತಿಗಳನ್ನು ಪ್ರಧಾನವಾಗಿಟ್ಟುಕೊಂಡು ರಾಷ್ಟ್ರೀಯ ಸಮಗ್ರತೆಯನ್ನು ರಕ್ಷಿಸಿದೆ ಎಂದು ಮೋದಿ ಹೇಳಿದರು.
ಏನಿದು ಕೋಲ್ಕತ್ತಾ ಪ್ರಕರಣ?
ಪಶ್ಚಿಮ ಬಂಗಾಳದ ಕೋಲ್ಕತಾದಲ್ಲಿನ ಸರ್ಕಾರಿ ಸ್ವಾಮ್ಯದ ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್ನಲ್ಲಿ ಆಗಸ್ಟ್ 9ರಂದು ಟ್ರೈನಿ ವೈದ್ಯೆಯ ಶವ ಪತ್ತೆಯಾಗಿತ್ತು. ಎರಡನೇ ವರ್ಷದ ಸ್ನಾತಕೋತ್ತರ ವೈದ್ಯಕೀಯ ಪದವಿ ವಿದ್ಯಾರ್ಥಿಯಾಗಿದ್ದ ಆಕೆ, ಆಗಸ್ಟ್ 8ರ ರಾತ್ರಿ ತಡವಾಗಿ ಊಟ ಮುಗಿಸಿ ಕ್ಯಾಂಪಸ್ನ ಮೂರನೇ ಮಹಡಿಯಲ್ಲಿನ ಸೆಮಿನಾರ್ ಹಾಲ್ಗೆ ಓದುವ ಸಲುವಾಗಿ ತೆರಳಿದ್ದರು. ಮರುದಿನ ಬೆಳಿಗ್ಗೆ ಅವರ ಶವ ಪತ್ತೆಯಾಗಿತ್ತು. ಮರಣೋತ್ತರ ಪರೀಕ್ಷೆಯಲ್ಲಿ ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ ಕ್ರೂರವಾಗಿ ಹತ್ಯೆಗೈದಿರುವುದು ಬೆಳಕಿಗೆ ಬಂದಿತ್ತು. ಕುತ್ತಿಗೆ ಮುರಿದ ಸ್ಥಿತಿಯಲ್ಲಿ ಕಂಡು ಬಂದಿತ್ತು. ಈ ಪ್ರಕರಣ ದೇಶಾದ್ಯಂತ ಸಂಚಲನ ಸೃಷ್ಟಿಸಿದೆ. ಇನ್ನು ವೈದ್ಯೆ ಕೊಲೆ ಪ್ರಕರಣದ ತನಿಖೆ ನಡೆಸಲು ಸುಪ್ರೀಂಕೋರ್ಟ್ ರಾಷ್ಟ್ರೀಯ ಕಾರ್ಯಪಡೆಯನ್ನು ನೇಮಕ ಮಾಡಿದೆ. ಈ ಕಾರ್ಯಪಡೆಯಲ್ಲಿ ಸರ್ಜನ್ ವೈಸ್ ಅಡ್ಮಿರಲ್ ಆರ್.ಕೆ. ಸರಿನ್, ಏಷ್ಯನ್ ಇನ್ಸ್ಟಿಟ್ಯೂಟ್ ಆಫ್ ನ್ಯಾಷನಲ್ ಗ್ಯಾಸ್ಟ್ರೋಲಜಿ ವ್ಯವಸ್ಥಾಪಕ ನಿರ್ದೇಶಕ ಡಾ. ನಾಗೇಶ್ವರ ರೆಡ್ಡಿ ಇದ್ದಾರೆ.