ಮಂಡ್ಯ: ನಾಗಮಂಗಲ(Nagamangala)ದ ಬದರಿಕೊಪ್ಪಲಿನಲ್ಲಿ ಗಣೇಶೋತ್ಸವ ವಿಸರ್ಜನಾ ಮೆರವಣಿಗೆ ವೇಳೆ ಬುಧವಾರ ರಾತ್ರಿ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿ, ಪೆಟ್ರೋಲ್ ಬಾಂಬ್ ಎಸೆದು ದಾಂಧಲೆ ನಡೆಸಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಘಟನೆಯನ್ನು ಹಿಂದೂ ಜಾಗರಣ ವೇದಿಕೆ ಖಂಡಿಸಿದ್ದು, ಇಂದು (ಸೆಪ್ಟೆಂಬರ್ 12) ಸಂಜೆ ಎಲ್ಲಾ ಜಿಲ್ಲಾ ಕೇಂದ್ರ, ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲು ಕರೆ ನೀಡಿದೆ (Mandya Violence).
ಹಿಂದೂ ಜಾಗರಣ ವೇದಿಕೆಯ ಮುಖಂಡರಾದ ದೋ ಕೇಶವಮೂರ್ತಿ ಈ ಬಗ್ಗೆ ಮಾಹಿತಿ ನೀಡಿ, ʼʼಮಂಡ್ಯ ಜಿಲ್ಲೆಯ ನಾಗಮಂಗಲದ ಬದರಿ ಕೊಪ್ಪಲುವಿನಲ್ಲಿ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ನಡೆದ ಗಲಭೆ ಖಂಡನಾರ್ಹ. ಆರೋಪಿಗಳ ಬಂಧನ ಮತ್ತು ಪ್ರಕರಣದ ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಿ ಇಂದು ಸಂಜೆ ಎಲ್ಲಾ ಜಿಲ್ಲಾ ಕೇಂದ್ರ, ತಾಲೂಕು ಕೇಂದ್ರಗಳಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಗಳ ಒಕ್ಕೂಟದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆʼʼ ಎಂದು ತಿಳಿಸಿದ್ದಾರೆ.
ಪರಿಸ್ಥಿತಿ ಹೇಗಿದೆ?
ʼʼಸದ್ಯ ಗಲಭೆ ನಡೆದ ಪ್ರದೇಶದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. 2-3 ಅಂಗಡಿಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಸೆಪ್ಟೆಂಬರ್ 14ರವರೆಗೆ ಸೆಕ್ಷನ್ 144 ಜಾರಿ ಮಾಡಿದ್ದೇವೆ. ಅಗತ್ಯಬಿದ್ದರೆ ಸೆಕ್ಷನ್ 144 ಮುಂದುವರಿಸಲಾಗುವುದುʼʼ ಎಂದು ಅದಿಕಾರಿಗಳು ತಿಳಿಸಿದ್ದಾರೆ.
ʼʼಬದರಿಕೊಪ್ಪಲು ಬಳಿ ಸಂಜೆ 7 ಗಂಟೆ ವೇಳೆಗೆ ಗಣೇಶ ಮೂರ್ತಿಯ ವಿಸರ್ಜನಾ ಮೆರವಣಿಗೆ ನಡೆಸಲಾಯಿತು. ಈ ವೇಳೆ ಹಿಂದೂ ಯುವಕರು ಕುಣಿದು, ಪಟಾಕಿ ಸಿಡಿಸಿ ಸಂಭ್ರಮಿಸುತ್ತಿದ್ದರು. ಮೆರವಣಿಗೆ ಬದರಿಕೊಪ್ಪಲಿನಿಂದ ಮಂಡ್ಯ ಸರ್ಕಲ್ ಮಾರ್ಗವಾಗಿ ತೆರಳಿತ್ತು. ಯಾ ಅಲ್ಲಾ ಮಸೀದಿ ಮತ್ತು ದರ್ಗಾ ಮುಂಭಾಗದ ರಸ್ತೆಯಲ್ಲಿ ಮೆರವಣಿಗೆ ಹೊರಟಿತ್ತು. ಆಗ ಮಸೀದಿ ಮುಂದೆ ಬರದಂತೆ ಮಂಡ್ಯ ಸರ್ಕಲ್ನಲ್ಲೇ ಅನ್ಯಕೋಮಿನ ಯುವಕರು ತಡೆದಿದ್ದರು. ಆಗ ಪರಸ್ಪರ ಮಾತಿನ ಚಕಮಕಿ ನಡೆದಿತ್ತು. ಇದಾದ ಬಳಿಕ ಗಣೇಶ ಮೂರ್ತಿ ಮೆರವಣಿಗೆ ಮೇಲೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ್ದರುʼʼ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಶಾಲೆ-ಕಾಲೇಜುಗಳಿಗೆ ರಜೆ
ನಾಗಮಂಗಲದಲ್ಲಿ ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಅದಾಗ್ಯೂ ಮುಂಜಾಗ್ರತಾ ಕ್ರಮವಾಗಿ ಇಂದು ನಾಗಮಂಗಲದಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಗಲಭೆ ಪ್ರಕರಣ ಸಂಬಂಧ ಈಗಾಗಲೇ 50 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ಜಿಲ್ಲೆ ನಾಗಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಲ್ಲೆಡೆ ವ್ಯಾಪಕ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಈ ಸುದ್ದಿಯನ್ನೂ ಓದಿ: Mandya Violence: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಉದ್ದೇಶ ಪೂರ್ವಕವಾಗಿಯೇ ಅನ್ಯ ಕೋಮಿನ ಪುಂಡರಿಂದ ದಾಂಧಲೆ; ಎಚ್‌ಡಿಕೆ ವಾಗ್ದಾಳಿ
ರಾಜ್ಯ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ನೀತಿಯ ಪರಿಣಾಮವಾಗಿ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ದೊಂಬಿ-ಗಲಭೆ ಎಬ್ಬಿಸಿ ಬೆಂಕಿ ಹಚ್ಚುವ ಘಟನೆ ನಡೆದಿದೆ.
— BJP Karnataka (@BJP4Karnataka) September 12, 2024
ಹಿಂದೂ ವಿರೋಧಿ ನೀತಿ ಅನುಸರಿಸುತ್ತಿರುವ ಕಾಂಗ್ರೆಸ್ ಸರ್ಕಾರ ವೋಟ್ ಬ್ಯಾಂಕ್ ದುರಾಸೆಗೊಳಗಾಗದೆ ಮತಾಂಧ ಶಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು.
– ಶ್ರೀ… pic.twitter.com/I9be1ValQp
ಪ್ರಲ್ಹಾದ ಜೋಶಿ ಖಂಡನೆ
ʼʼರಾಜ್ಯ ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಅಕ್ಷರಶಃ ಪಾಕಿಸ್ತಾನ ಮಾಡಲು ಹೊರಟಿದೆʼʼ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯದ ನಾಗಮಂಗಲ ಘಟನೆ ಕುರಿತು ಪ್ರತಿಕ್ರಿಯಿಸಿರುವ ಅವರು, ಗಣಪತಿ ವಿಸರ್ಜನೆ ವೇಳೆ ನಡೆದ ಈ ದುಷ್ಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದಾರೆ. ʼʼಸರ್ವ ಜನಾಂಗದ ಶಾಂತಿಯ ತೋಟ ಎಂಬಂತಿರುವ ಕರ್ನಾಟಕವನ್ನು ಕಾಂಗ್ರೆಸ್ ಸರ್ಕಾರ ರಾಜಕೀಯ ತುಷ್ಟೀಕರಣಕ್ಕಾಗಿ ಮತ್ತೊಂದು ಪಾಕಿಸ್ತಾನ ಮಾಡಲು ಹೊರಟಿದೆʼʼ ಎಂದು ವಾಗ್ದಾಳಿ ನಡೆಸಿದ್ದಾರೆ.