ಗುಬ್ಬಿ: ಸ್ಥಳೀಯ ಪಟ್ಟಣ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಎರಡನೇ ಅವಧಿಗೆ ನಡೆದ ಚುನಾವಣೆ ಯಲ್ಲಿ ಒಟ್ಟು 19 ಸದಸ್ಯರಲ್ಲಿ 12 ಸದಸ್ಯರ ಬಹುಮತದೊಂದಿಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸಾಮಾನ್ಯ ಮಹಿಳಾ ಮೀಸಲಿನ ಅಧ್ಯಕ್ಷ ಸ್ಥಾನಕ್ಕೆ ಮಂಗಳಮ್ಮ ರಾಜಣ್ಣ, ಪರಿಷ್ಟ ಜಾತಿ ಮಹಿಳೆ ಮೀಸಲಿನ ಉಪಾಧ್ಯಕ್ಷ ಸ್ಥಾನಕ್ಕೆ ಮಮತಾ ಶಿವಪ್ಪ ಅವಿರೋಧವಾಗಿ ಆಯ್ಕೆಯಾದರು.
ಶಾಸಕ ಎಸ್ಆರ್ ಶ್ರೀನಿವಾಸ್ ಮಾತನಾಡಿ ಪಟ್ಟಣದಲ್ಲಿ ಬಾಕಿ ಉಳಿದಿರುವ ಕಾಂಕ್ರೀಟ್ ರಸ್ತೆಯನ್ನು ಶೀಘ್ರದಲ್ಲಿ ಪೂರ್ಣಗೊಳಿಸಲಾಗುವುದು. ಯುಜಿಡಿ ಕಾಮಗಾರಿಗೆ 3.80 ಲಕ್ಷ ಬಿಡುಗಡೆ ಮಾಡಲಾಗಿದೆ. ರೈತರ ಜಮೀನು ಜಿಲ್ಲಾಧಿಕಾರಿಗಳ ಹಂತದಲ್ಲಿದ್ದು ಪರಿಶೀಲನೆಯ ನಂತರ ಕೆಲಸ ಪ್ರಾರಂಭಿಸುತ್ತೇವೆ. ರಾಜ ಕಾಲುವೆಗಳ ಮೂಲಕ ಬರುವ ನೀರನ್ನು ಪ್ರತ್ಯೇಕ ಚರಂಡಿ ಮಾಡಿ ಪಟ್ಟಣದಿಂದ ಹೊರಗೆ ಬಿಡುವ ಕೆಲಸ ಮಾಡಲಾಗುತ್ತದೆ ಎಂದು ತಿಳಿಸಿದರು.
ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮಂಗಳಮ್ಮ ರಾಜಣ್ಣ ಮಾತನಾಡಿ ಪಟ್ಟಣ ಪಂಚಾಯಿತಿಯ ಎಲ್ಲ ಸದಸ್ಯರ ಸಹಕಾರ ಪಡೆದು ರಸ್ತೆ, ನೀರು, ಚರಂಡಿ, ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ಪಟ್ಟಣದ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ತಿಳಿಸಿದರು.
ಉಪಾಧ್ಯಕ್ಷೆ ಮಮತಾ ಶಿವಪ್ಪ ಮಾತನಾಡಿ ಉಪಾಧ್ಯಕ್ಷರಾಗಿ ಆಯ್ಕೆಯಾಗಲು ಸಹಕಾರ ನೀಡಿದ ಶಾಸಕ ಎಸ್ ಆರ್ ಶ್ರೀನಿವಾಸ್ ರವರಿಗೆ ಹಾಗೂ ಪಟ್ಟಣ ಪಂಚಾಯಿತಿ ಎಲ್ಲ ಸದಸ್ಯರಿಗೂ ಅಭಿನಂದನೆ ತಿಳಿಸುತ್ತೇನೆ. ಎಲ್ಲಾ ವಾರ್ಡ್ ಗಳಲ್ಲಿಯೂ ಸಹ ಕುಡಿಯುವ ನೀರು ಮತ್ತು ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡುತ್ತೇನೆ ಎಂದು ತಿಳಿಸಿದರು.