Tuesday, 24th September 2024

MUDA Scam: ಸಿಎಂ ಸಿದ್ದರಾಮಯ್ಯ ಅವರಿಗೆ ಇಂದು ಬಿಗ್‌ ಡೇ, ಮುಡಾ ಹಗರಣ ತನಿಖೆ ಕುರಿತು ಹೈಕೋರ್ಟ್‌ ತೀರ್ಪಿಗೆ ಕ್ಷಣಗಣನೆ

karnataka high court news muda scam

ಬೆಂಗಳೂರು: ರಾಜ್ಯದಲ್ಲಿ ತೀವ್ರ ರಾಜಕೀಯ ಕೋಲಾಹಲ ಎಬ್ಬಿಸಿರುವ ಮುಡಾ ಹಗರಣ (MUDA Scam) ಪ್ರಕರಣದಲ್ಲಿ, ಪ್ರಕರಣವನ್ನು ತನಿಖೆಗೆ ಎತ್ತಿಕೊಳ್ಳಬಹುದೋ ಬೇಡವೋ ಎಂಬ ಬಗ್ಗೆ ಹೈಕೋರ್ಟ್‌ (High court) ಇಂದು ತೀರ್ಪು ಪ್ರಕಟಿಸಲಿದೆ. ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ (Prosecution) ರಾಜ್ಯಪಾಲರು ನೀಡಿರುವ ಪೂರ್ವಾನುಮತಿ ರದ್ದುಪಡಿಸಲು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಸಲ್ಲಿಸಿರುವ ತಕರಾರು ಅರ್ಜಿಯ ಬಗೆಗಿನ ತೀರ್ಪನ್ನು ಹೈಕೋರ್ಟ್ ಇಂದು ಪ್ರಕಟಿಸಲಿದೆ.

ಮುಖ್ಯಮಂತ್ರಿಗಳ ಅರ್ಜಿ ಕುರಿತು ಘಟಾನುಘಟಿ ಹಿರಿಯ ವಕೀಲರ ಸುದೀರ್ಘ ವಾದ-ಪ್ರತಿವಾದ ಆಲಿಸಿ ಕಾಯ್ದಿರಿಸಿರುವ ತೀರ್ಪನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕ ಸದಸ್ಯ ನ್ಯಾಯಪೀಠ ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಪ್ರಕಟಿಸಲಿದೆ. ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದಿರುವ ಮುಡಾ ಪ್ರಕರಣ ಮತ್ತು ಮುಖ್ಯಮಂತ್ರಿಗಳನ್ನು ಕಾಡುತ್ತಿರುವ ಪ್ರಾಸಿಕ್ಯೂಷನ್ ಭೀತಿಯ ಭವಿಷ್ಯ ನಿರ್ಧಾರವಾಗಲಿದೆ.

ಏನಾಗಬಹುದು?

ಮುಖ್ಯಮಂತ್ರಿಗಳ ಸಿದ್ದರಾಮಯ್ಯ ಅರ್ಜಿಯನ್ನು ಹೈಕೋರ್ಟ್ ಪುರಸ್ಕರಿಸಿದರೆ, ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ನೀಡಿರುವ ಪೂರ್ವಾನುಮತಿ ರದ್ದಾಗುತ್ತದೆ. ಇದರಿಂದ ಸಿದ್ದರಾಮಯ್ಯ ಅವರು ನಿರಾಳರಾಗಬಹುದು. ಆದರೆ, ರಾಜ್ಯಪಾಲರ ಪೂರ್ವಾನುಮತಿಯನ್ನು ಹೈಕೋರ್ಟ್‌ ಮಾನ್ಯ ಮಾಡಿದರೆ, ಸಿದ್ದರಾಮಯ್ಯ ಅವರಿಗೆ ಪ್ರಾಸಿಕ್ಯೂಷನ್ ಭೀತಿ ಎದುರಾಗಲಿದೆ.

ಅರ್ಜಿಯನ್ನು ಹೈಕೋರ್ಟ್ ಏಕ ಸದಸ್ಯ ಪೀಠ ವಜಾಗೊಳಿಸಿದರೆ, ಆ ತೀರ್ಪು ಪ್ರಶ್ನಿಸಿ ಸಿದ್ದರಾಮಯ್ಯ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿ ರಾಜ್ಯಪಾಲರ ಪೂರ್ವಾನುಮತಿ ಮತ್ತು ಏಕ ಸದಸ್ಯ ನ್ಯಾಯಪೀಠದ ತೀರ್ಪಿಗೆ ತಡೆಕೋರಬಹುದು. ಜೊತೆಗೆ, ತಮ್ಮ ವಿರುದ್ಧ ತೀರ್ಪು ಬಂದರೆ ಅದರ ವಿರುದ್ಧ ಮೇಲ್ಮನವಿ ಸಲ್ಲಿಸಲು ಅನುವಾಗುವಂತೆ ತೀರ್ಪಿಗೆ ಮಧ್ಯಂತರ ತಡೆ ನೀಡುವಂತೆ ಏಕಸದಸ್ಯ ಪೀಠಕ್ಕೆ ಅರ್ಜಿ ಸಲ್ಲಿಸಬಹುದು.

ವಿಭಾಗೀಯ ಪೀಠ ರಾಜ್ಯಪಾಲರ ಪೂರ್ವಾನುಮತಿ ಮತ್ತು ಏಕ ಸದಸ್ಯ ನ್ಯಾಯಪೀಠದ ತೀರ್ಪಿಗೆ ಮಧ್ಯಂತರ ತಡೆಯಾಜ್ಞೆ ನೀಡಿದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೆ ರಿಲೀಫ್ ಸಿಗಲಿದೆ. ಒಂದು ವೇಳೆ ಸಿದ್ದರಾಮಯ್ಯ ಅವರ ಅರ್ಜಿ ಪುರಸ್ಕಾರವಾದರೆ, ರಾಜ್ಯಪಾಲರ ಕಚೇರಿ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಬಹುದು. ಜೊತೆಗೆ, ಏಕ ಸದಸ್ಯ ಪೀಠದ ತೀರ್ಪಿಗೆ ವಿಭಾಗೀಯ ಪೀಠದಲ್ಲಿ ರಾಜ್ಯಪಾಲರ ಕಚೇರಿ ತಡೆಯಾಜ್ಞೆ ಕೋರುವ ಸಾಧ್ಯತೆ ತಳ್ಳಿಹಾಕುವಂತಿಲ್ಲ. ಅಥವಾ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸದೇ ನೇರವಾಗಿ ಸುಪ್ರೀಂಗೆ ವಿಶೇಷ ಮೇಲ್ಮನವಿ ಸಲ್ಲಿಸುವ ಸಾಧ್ಯತೆಯೂ ಇದೆ.

ಮುಖ್ಯಮಂತ್ರಿ ವಿರುದ್ದದ ಪ್ರಾಸಿಕ್ಯೂಷನ್‌ಗೆ ಮಂಜೂರಾಗಿರುವ ಅನುಮತಿಯನ್ನು ಹೈಕೋರ್ಟ್ ರದ್ದುಪಡಿಸಿ, ಪುನಃ ಪ್ರಕರಣವನ್ನು ರಾಜ್ಯಪಾಲರ ಅಂಗಳಕ್ಕೆ ಮರಳಿಸಬಹುದು. ಜೊತೆಗೆ, ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿರುವ ಅರ್ಜಿಗಳನ್ನು ಹೊಸದಾಗಿ ಪರಿಗಣಿಸಿ, ಎಲ್ಲ ದಾಖಲೆ ಪರಿಶೀಲನೆ ನಡೆಸಿದ‌ ನಂತರವೇ ಸೂಕ್ತ ಕಾರಣಗಳನ್ನು ನೀಡಿ ನಿರ್ಧಾರ ಕೈಗೊಳ್ಳುವಂತೆ ರಾಜ್ಯಪಾಲರನ್ನು ಹೈಕೋರ್ಟ್ ಕೋರಬಹುದು. ಆಗ ಕೇಸ್ ಮತ್ತೆ ಮೊದಲಿನ ಹಂತಕ್ಕೆ ಬರಲಿದೆ. ಆಗ ಸಂಬಂಧಿಸಿದ ದಾಖಲೆಗಳನ್ನು ರಾಜ್ಯಪಾಲರು ಮರು ಪರಿಶೀಲಿಸಿ ತೀರ್ಮಾನ ಕೈಗೊಳ್ಳುವ ಅಗತ್ಯ ಸೃಷ್ಟಿಯಾಗುತ್ತದೆ.

ಮುಡಾ ಪ್ರಕರಣ ಸಂಬಂಧ ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿ ರಾಜ್ಯಪಾಲರು ಆ.17ರಂದು ಆದೇಶಿಸಿದ್ದರು. ಅದನ್ನು ಪ್ರಶ್ನಿಸಿ ಮುಖ್ಯಮಂತ್ರಿಗಳು ಆ.19ರಂದು ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಅಂದೇ ಅರ್ಜಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ವಕೀಲರು ರಾಜ್ಯಪಾಲರ ಆದೇಶಕ್ಕೆ ತಡೆಯಾಜ್ಞೆ ನೀಡುವಂತೆ ಕೋರಿದ್ದರು. ಹೈಕೋರ್ಟ್, ಪ್ರಾಸಿಕ್ಯೂಷನ್ ಆಧರಿಸಿ ಸಿಎಂ ವಿರುದ್ಧ ಆತುರದ ಕ್ರಮ ಜರುಗಿಸದಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮತ್ತು ಲೋಕಾಯುಕ್ತ ಪೊಲೀಸರಿಗೆ ನಿರ್ದೇಶಿಸಿ ಮಧ್ಯಂತರ ಆದೇಶ ಮಾಡಿತ್ತು.

ರಾಜ್ಯಪಾಲರ ಕಚೇರಿ ಪರ ಸುಪ್ರೀಂ ಕೋರ್ಟ್ ಸಾಲಿಸಿಟರ್‌ ಜನರಲ್ ತುಷಾರ್ ಮೆಹ್ತಾ, ಖಾಸಗಿ ದೂರುದಾರ ಟಿ.ಜೆ.ಅಬ್ರಾಹಾಂ, ಎಸ್.ಪಿ. ಪ್ರದೀಪ್ ಕುಮಾರ್ ಮತ್ತು ಸ್ನೇಹಮಯಿ ಕೃಷ್ಣ ಪರ ವಕೀಲರು ಪ್ರತಿವಾದ ಮಂಡಿಸಿದ್ದರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪರ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ ಶೆಟ್ಟಿ ವಾದಿಸಿದ್ದರು. ಸೆ. 12ರಂದು ವಾದ ಪೂರ್ಣಗೊಂಡ ನಂತರ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು.

ಇದನ್ನೂ ಓದಿ: Muda Scam: ಮುಡಾದಲ್ಲಿ ಮತ್ತೊಂದು ಹಗರಣ; ವೃದ್ಧ ದಂಪತಿಗೆ ವಂಚಿಸಿ 5.14 ಎಕರೆ ಭೂಮಿ ಸ್ವಾಧೀನ!