ಬೆಂಗಳೂರು: ಹೈಕೋರ್ಟ್ (High Court) ವಿಚಾರಣೆ ಹಿನ್ನೆಲೆಯಲ್ಲಿ ತಡೆಹಿಡಿಯಲಾಗಿದ್ದ ಮುಡಾ ಹಗರಣದ (MUDA case, MUDA Scam) ಕುರಿತ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ತೀರ್ಪು ಇಂದು ಪ್ರಕಟವಾಗುವ ಸಾಧ್ಯತೆ ಇದ್ದು, ಸಿಎಂ ಸಿದ್ದರಾಮಯ್ಯ (CM Siddaramaiah) ಅವರಿಗೆ ಮತ್ತೊಂದು ಆತಂಕ ಎದುರಾಗಿದೆ.
ಮುಡಾ ಹಗರಣದ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ರಾಜ್ಯಪಾಲರು ನೀಡಿದ ಅನುಮತಿಯನ್ನು ಹೈಕೋರ್ಟ್ ಎತ್ತಿ ಹಿಡಿದ ಬೆನ್ನಲ್ಲೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆಗೆ ಆದೇಶ ನೀಡುವ ಕುರಿತು ಕಾಯ್ದಿರಿಸಿರುವ ತೀರ್ಪು ಬುಧವಾರ ಪ್ರಕಟವಾಗುವ ಸಾಧ್ಯತೆ ಇದೆ. ಹೀಗಾಗಿ, ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗುವ ಸಂಭವವಿದೆ.
ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ದೂರಿನ ವಿಚಾರಣೆ ಮುಕ್ತಾಯಗೊಂಡಿದ್ದು, ತೀರ್ಪನ್ನು ಕಾಯ್ದಿರಿಸಲಾಗಿತ್ತು. ರಾಜ್ಯಪಾಲರ ಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ತನ್ನ ವಿಚಾರಣೆ ಮುಕ್ತಾಯವಾಗುವವರೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಯ್ದಿರಿಸಿರುವ ತೀರ್ಪಿಗೆ ತಡೆ ನೀಡಿತ್ತು.
ಮಂಗಳವಾರ ರಾಜ್ಯಪಾಲರ ಆದೇಶವನ್ನು ಪ್ರಶ್ನಿಸಿದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧವಾರ ಕಾಯ್ದಿರಿಸಿರುವ ತೀರ್ಪನ್ನು ಪ್ರಕಟಿಸುವ ಸಾಧ್ಯತೆ ಇದೆ. ಒಂದು ವೇಳೆ ಮುಖ್ಯಮಂತ್ರಿಗಳು ಹೈಕೋರ್ಟ್ನ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿ ಕೆಳ ನ್ಯಾಯಾಲಯ ಕಾಯ್ದಿರಿಸಿರುವ ತೀರ್ಪಿಗೆ ತಡೆ ತಂದರೆ ಮಾತ್ರ ವಿಚಾರಣೆಗೆ ಆದೇಶ ನೀಡುವುದಕ್ಕೆ ತಡೆ ಸಿಗಲಿದೆ.