Friday, 22nd November 2024

Muda Case: ಮುಡಾ ಹಗರಣದ ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ

Muda Case

ಬೆಂಗಳೂರು: ಮುಡಾ ಹಗರಣಕ್ಕೆ (Muda Case) ಸಂಬಂಧಿಸಿ ತನಿಖೆಗೆ ಕೋರ್ಟ್‌ ಸೂಚನೆ ನೀಡಿದ್ದರಿಂದ ಮೈಸೂರು ಲೋಕಾಯುಕ್ತದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah)ಮತ್ತು ಇತರರ ವಿರುದ್ಧ ಈಗಾಗಲೇ ಎಫ್‌ಐಆರ್‌ ದಾಖಲಾಗಿದೆ. ಆದರೆ, ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ದೂರುದಾರ ಸ್ನೇಹಮಯಿ ಕೃಷ್ಣ, ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಪ್ರಕರಣವನ್ನು ರಾಜ್ಯದ ತನಿಖಾ ಸಂಸ್ಥೆಗೆ ವಹಿಸಿರುವುದರಿಂದ ಅಧಿಕಾರದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ಲೋಕಾಯುಕ್ತ ಪೊಲೀಸರ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಹೀಗಾಗಿ ಪ್ರಕರಣದ ತನಿಖೆಯ ಹೊಣೆಯನ್ನು ಸಿಬಿಐಗೆ ನೀಡಬೇಕು ಎಂದು ಉಚ್ಚ ನ್ಯಾಯಾಲಯಕ್ಕೆ ದೂರುದಾರರು ರಿಟ್‌ ಅರ್ಜಿ ಸಲ್ಲಿಸಿದ್ದಾರೆ.

ಪ್ರಕರಣದ ತನಿಖೆಯನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ವಿಪಕ್ಷಗಳು ಒತ್ತಾಯಿಸುತ್ತಿವೆ. ಈ ನಡುವೆ ದೂರುದಾರರ ಪರ ವಕೀಲರು ಇತ್ತೀಚೆಗೆ ಪ್ರಕರಣವನ್ನು ಸಿಬಿಐಗೆ ನೀಡುವಂತೆ ನ್ಯಾಯಾಲಯದ ಮೊರೆ ಹೋಗುತ್ತೇವೆ ಎಂದು ಹೇಳಿದ್ದರು. ಈ ನಡುವೆ ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್‌ಗೆ ಮತ್ತೊಂದು ಅರ್ಜಿ ಸಲ್ಲಿಸಿ, ಸಿಬಿಐ ತನಿಖೆಗೆ ವರ್ಗಾಯಿಸುವಂತೆ ಕೋರಿದ್ದಾರೆ. ಈ ಅರ್ಜಿಯ ವಿಚಾರಣೆ ಸೋಮವಾರ ನಡೆಯುವ ಸಾಧ್ಯತೆ ಇದೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್‌

ಮೈಸೂರು: ಮುಡಾ ಹಗರಣದಲ್ಲಿ (Muda Case) ತನಿಖೆಗೆ ಜನಪ್ರತಿನಿಧಿಗಳ ಕೋರ್ಟ್ ಆದೇಶ ನೀಡಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಇತರರ ವಿರುದ್ಧ ಮೈಸೂರಿನ ಲೋಕಾಯುಕ್ತ ಎಸ್ಪಿ ಕಚೇರಿಯಲ್ಲಿ ಶುಕ್ರವಾರ ಎಫ್‌ಐಆರ್ ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ನೀಡಿದ ದೂರಿನ ಮೇರೆಗೆ ಎಫ್‌ಐಆರ್‌ ದಾಖಲಿಸಲಾಗಿದೆ.

ಮುಡಾ ಹಗರಣ ಸಂಬಂಧ ಸಿಆರ್‌ಪಿಸಿ ಸೆಕ್ಷನ್ 156(3) ಅಡಿ ತನಿಖೆ ನಡೆಸಿ ಮೂರು ತಿಂಗಳಲ್ಲಿ ವರದಿ ನೀಡುವಂತೆ ಮೈಸೂರಿನ ಲೋಕಾಯುಕ್ತ ಎಸ್‌ಪಿಗೆ ಜನಪ್ರತಿನಿಧಿಗಳ ಕೋರ್ಟ್‌ ಆದೇಶ ನೀಡಿತ್ತು. ಹೀಗಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು, ಪ್ರಕರಣದಲ್ಲಿ ಎ1 ಆಗಿ ಸಿದ್ದರಾಮಯ್ಯ, ಎ2 ಪತ್ನಿ ಪಾರ್ವತಿ, ಎ3 ಸಿದ್ಧರಾಮಯ್ಯ ಬಾಮೈದ ಮಲ್ಲಿಕಾರ್ಜನ ಸ್ವಾಮಿ, ಎ4 ಭೂ ಮಾಲೀಕ ದೇವರಾಜು ಹಾಗೂ ಎ5 ಆರೋಪಿಯಾಗಿ ಇತರರು ಎಂದು ಉಲ್ಲೇಖಿಸಲಾಗಿದೆ.

ಈ ಸುದ್ದಿಯನ್ನೂ ಓದಿ | Kumki elephants: ಕಾಡಾನೆ ಸೆರೆ ಕಾರ್ಯಾಚರಣೆಗೆ ಆಂಧ್ರಕ್ಕೆ ನಾಲ್ಕು ಕುಮ್ಕಿ ಆನೆ: ಸಚಿವ ಈಶ್ವರ್ ಖಂಡ್ರೆ

ಭ್ರಷ್ಟಾಚಾರ ತಡೆ ಕಾಯ್ದೆ 1988, ಬೇನಾಮಿ ಆಸ್ತಿ ವಹಿವಾಟು ಕಾಯ್ದೆ 1988, ಕರ್ನಾಟಕ ಭೂಮಿ ಕಬಳಿಕೆ ನಿಷೇಧ ಕಾಯ್ದೆ 2011, ಸೆಕ್ಷನ್ 120 ಬಿ, 166, 403, 406, 420, 426, 465, 468, 340, 351 ಸೆಕ್ಷನ್‌ಗಳಡಿ ಪ್ರಕರಣ ದಾಖಲಾಗಿದೆ.