ಬೆಂಗಳೂರು: ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ- 2023 (BNSS) ಜಾರಿಯಾದ ಬಳಿಕ, ದೇಶದಲ್ಲಿ ಇದರ ಮೊದಲ ತೀರ್ಪನ್ನು ನೀಡಿದ ಕೀರ್ತಿ ಕರ್ನಾಟಕ ಹೈಕೋರ್ಟ್ (Karnataka High Court) ಪಾಲಾಗಿದೆ. ಈ ತೀರ್ಪಿನಲ್ಲಿ, ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ (BJP MLA Basangouda Patil Yatnal) ವಿರುದ್ಧ ನೋಟೀಸನ್ನು ಹೈಕೋರ್ಟ್ ರದ್ದುಗೊಳಿಸಿದೆ.
ಸಚಿವ ಶಿವಾನಂದ ಎಸ್.ಪಾಟೀಲ್ ದಾಖಲಿಸಿದ್ದ ಮಾನನಷ್ಟ ಪ್ರಕರಣ ಸಂಬಂಧ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್) ಸೆಕ್ಷನ್ 223 ಅಡಿಯಲ್ಲಿ ನೋಟೀಸ್ ಜಾರಿಗೊಳಿಸಿತ್ತು. ಇದನ್ನು ಹೈಕೋರ್ಟ್ ರದ್ದುಪಡಿಸಿದ್ದು, ಪ್ರಕರಣವನ್ನು ಹೊಸದಾಗಿ ವಿಚಾರಣೆ ನಡೆಸಲು ವಿಶೇಷ ನ್ಯಾಯಾಲಯಕ್ಕೆ ಆದೇಶಿಸಿದೆ.
ಶಿವಾನಂದ ಪಾಟೀಲ್ ಅವರ ಖಾಸಗಿ ದೂರು ಪರಿಗಣಿಸಿ ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯ (ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ) ತಮಗೆ ಜಾರಿಗೊಳಿಸಿದ್ದ ನೋಟಿಸ್ ರದ್ದುಪಡಿಸುವಂತೆ ಕೋರಿ ಯತ್ನಾಳ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಾನ್ಯ ಮಾಡಿ ಈ ತೀರ್ಪು ಪ್ರಕಟಿಸಿದೆ.
ಇದರೊಂದಿಗೆ, 2024ರ ಜುಲೈನಿಂದ ಹೊಸದಾಗಿ ಜಾರಿಗೆ ಬಂದಿರುವ ಬಿಎನ್‌ಎಸ್‌ಎಸ್ ಅಡಿಯಲ್ಲಿ ದೇಶದಲ್ಲೇ ಪ್ರಕಟಗೊಂಡ ಮೊದಲ ತೀರ್ಪು ಇದಾಗಿದೆ. ಪ್ರಕರಣದಲ್ಲಿ ತೀರ್ಪು ಪ್ರಕಟಿಸಿದ ನಂತರ ರಾಜ್ಯ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಜಗದೀಶ್ ಅವರನ್ನು ಉದ್ದೇಶಿಸಿ ಪ್ರತಿಕ್ರಿಯಿಸಿದ ನ್ಯಾ.ನಾಗಪ್ರಸನ್ನ ಅವರು, ಬಿಎನ್‌ಎಸ್‌ಎಸ್ ಅಡಿಯಲ್ಲಿ ಪ್ರಕಟಗೊಂಡ ಮೊದಲ ತೀರ್ಪು ಇದಾಗಿದೆ ಎಂದರು. ದೇಶದಲ್ಲಿ ಈವರೆಗೂ ಬಿಎನ್‌ಎಸ್‌ಎಸ್ ಅಡಿಯಲ್ಲಿ ಯಾವ ನ್ಯಾಯಾಲಯವೂ ತೀರ್ಪು ಬರೆದಿಲ್ಲ. ಈ ತೀರ್ಪಿನಿಂದ ಖಾಸಗಿ ದೂರು ದಾಖಲಾದ ಸಂದರ್ಭದಲ್ಲಿ ಅಧೀನ ನ್ಯಾಯಾಲಯಗಳು ಬಿಎನ್‌ಎಸ್‌ಎಸ್ ಅಡಿಯಲ್ಲಿ ಯಾವ ಪ್ರಕ್ರಿಯೆ ಅನುಸರಿಸಬೇಕು ಎಂಬ ಬಗ್ಗೆ ಸ್ಪಷ್ಟತೆ ಸಿಗುತ್ತದೆ ಎಂದು ತಿಳಿಸಿದರು.
ಪ್ರಕರಣದಲ್ಲಿ ಯತ್ನಾಳ್ ಅವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 156 ಅಡಿಯಲ್ಲಿ ವಿಶೇಷ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿತ್ತು. ಅದನ್ನು ವಿಚಾರಣೆಗೆ ಅಂಗೀಕರಿಸಿದ್ದ ವಿಶೇಷ ನ್ಯಾಯಾಲಯ, ಬಿಎನ್‌ಎಸ್‌ಎಸ್ ಸೆಕ್ಷನ್ 223 ಅಡಿಯಲ್ಲಿ ಆರೋಪಿಯಾಗಿರುವ ಯತ್ನಾಳ್ ಅವರಿಗೆ ನೇರವಾಗಿ ನೋಟಿಸ್ ಜಾರಿ ಮಾಡಿತ್ತು. ಅದನ್ನು ಆಕ್ಷೇಪಿಸಿರುವ ಹೈಕೋರ್ಟ್, ಬಿಎನ್‌ಎಸ್‌ಎಸ್ ಸೆಕ್ಷನ್ 223ರ ಪ್ರಕಾರ ಖಾಸಗಿ ದೂರನ್ನು ದಾಖಲಿಸಿಕೊಳ್ಳುವ ಮೊದಲಿಗೆ ಆರೋಪಿಗೆ ದೂರಿನ ಪ್ರತಿ, ಎಫ್‌ಐಆರ್, ದೂರುದಾರರ ಮತ್ತು ಸಾಕ್ಷಿಯ ಸ್ವಯಂ ಹೇಳಿಕೆ ಹಾಗೂ ಪೂರಕ ದಾಖಲೆಗಳನ್ನು ಒದಗಿಸಿಸಬೇಕು. ಬಳಿಕ ಅವರ ಅಹವಾಲು ಆಲಿಸಬೇಕು. ಆ ನಂತರವೇ ನೋಟಿಸ್ ಜಾರಿ ಮಾಡುವ ಪ್ರಕ್ರಿಯೆಗೆ ಮುಂದಾಗಬೇಕು. ಅದು ಬಿಟ್ಟು ನೇರವಾಗಿ ಕಾಗ್ನಿಜೆನ್ಸ್ (ಪ್ರಕರಣವನ್ನು ವಿಚಾರಣೆಗೆ ಪರಿಗಣಿಸುವ ಪ್ರಕ್ರಿಯೆ) ತೆಗೆದುಕೊಂಡು ನೋಟಿಸ್ ಜಾರಿ ಮಾಡಲು ಅವಕಾಶವಿಲ್ಲ ಎಂದು ನ್ಯಾಯಪೀಠ ಹೇಳಿದೆ.
ಯತ್ನಾಳ್ ಅವರಿಗೆ ನೋಟಿಸ್ ಜಾರಿ ಮಾಡಿರುವ ಪ್ರಕ್ರಿಯೆಯಲ್ಲಿ ಕಾನೂನು ಲೋಪ ಕಂಡುಬಂದಿದೆ. ಆದ್ದರಿಂದ ಯತ್ನಾಳ್ ಅವರ ವಿರುದ್ಧದ ನೋಟಿಸ್ ರದ್ದುಪಡಿಸಲಾಗುತ್ತಿದೆ ಎಂದು ತಿಳಿಸಿದ ನ್ಯಾಯಪೀಠ, ಪ್ರಕರಣವನ್ನು ವಿಚಾರಣಾ ನ್ಯಾಯಾಲಯಕ್ಕೆ ಹಿಂದಿರುಗಿಸಿದೆ. ಮುಂದಿನ ನಾಲ್ಕು ವಾರದಲ್ಲಿ ಹೈಕೋರ್ಟ್ ಆದೇಶದಲ್ಲಿ ವ್ಯಕ್ತಪಡಿಸಿರುವ ಅಭಿಪ್ರಾಯಗಳನ್ನು ಗಮನದಲ್ಲಿ ಇರಿಸಿಕೊಂಡು ಪ್ರಕರಣವನ್ನು ಹೊಸದಾಗಿ ವಿಚಾರಣೆ ನಡೆಸಬೇಕು ಎಂದು ವಿಶೇಷ ನ್ಯಾಯಾಲಯಕ್ಕೆ ಆದೇಶಿಸಿದೆ.
ಪ್ರಕರಣದ ಹಿನ್ನೆಲೆ
ಕಳೆದ ಲೋಕಸಭಾ ಚುನಾವಣೆಯಲ್ಲಿ ಬಾಗಲಕೋಟೆ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಮಾಡುವ ಸಂದರ್ಭದಲ್ಲಿ ಯತ್ನಾಳ್ ಅವರು ನನ್ನ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಸಚಿವ ಶಿವಾನಂದ ಎಸ್.ಪಾಟೀಲ್ ಅವರು ಖಾಸಗಿ ದೂರು ದಾಖಲಿಸಿದ್ದರು. ಅದನ್ನು ವಿಚಾರಣೆ ನಡೆಸಿದ್ದ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ದೂರನ್ನು ವಿಚಾರಣೆಗೆ ಅಂಗೀಕರಿಸಿ ಬಿಎನ್‌ಎಸ್‌ಎಸ್ ಸೆಕ್ಷನ್ 223 ಅಡಿಯಲ್ಲಿ ನೋಟಿಸ್ ಜಾರಿ ಮಾಡಿತ್ತು. ಅದನ್ನು ಪ್ರಶ್ನಿಸಿ ಯತ್ನಾಳ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿದಾರರ ಪರ ಹೈಕೋರ್ಟ್ ವಕೀಲ ವೆಂಕಟೇಶ್ ಪಿ.ದಳವಾಯಿ ಹಾಗೂ ಶಿವಾನಂದ ಎಸ್. ಪಾಟೀಲ್ ಪರ ನಿವೇದಿತಾ ಸಿ.ಶಿವಶಂಕರ್ ವಾದ ಮಂಡಿಸಿದ್ದರು.
ಇದನ್ನೂ ಓದಿ: Muda Case: ಮುಡಾ ಹಗರಣದ ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ