Saturday, 23rd November 2024

Karnataka Rain: ಉಡುಪಿಯ ಹೆಬ್ರಿಯಲ್ಲಿ ಮೇಘ ಸ್ಫೋಟ; ಪ್ರವಾಹಕ್ಕೆ ಕೊಚ್ಚಿ ಹೋದ ವಾಹನಗಳು, ಕೃಷಿ ಜಮೀನು ಜಲಾವೃತ

ಉಡುಪಿ: ಭಾನುವಾರ ಸಂಜೆ ಸುರಿದ ಭಾರಿ ಮಳೆಯಿಂದ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲಿನ ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ಬಲ್ಲಾಡಿ ಎಂಬಲ್ಲಿ ಹಠಾತ್ ಪ್ರವಾಹ ಉಂಟಾಗಿದೆ. ಇದರಿಂದ ಬಲ್ಲಾಡಿಯ ಈಶ್ವರನಗರ ಸಮೀಪದ ಬಮ್ಮಗುಂಡಿ ಹೊಳೆ ಉಕ್ಕಿ ಹರಿದು ಮನೆ, ಕೃಷಿ ಜಮೀನಿಗೆ ನೀರು (Karnataka Rain) ನುಗ್ಗಿ ಭಾರಿ ಅವಾಂತರ ಸೃಷ್ಟಿಯಾಗಿದೆ.

ಇನ್ನು ಭಾರಿ ಮಳೆಗೆ ಹಲವು ರೈತರ ಜಮೀನು ಸಂಪೂರ್ಣವಾಗಿ ಮುಳುಗಡೆಯಾಗಿದ್ದು, ರಬ್ಬರ್ ಗಿಡ, ಅಡಿಕೆ ಮರ, ತೆಂಗಿನ ತೋಟ ಸೇರಿ ಹಲವು ಬೆಳೆಗಳು ಸಂಪೂರ್ಣವಾಗಿ ಜಲಾವೃತವಾಗಿವೆ. ಭಾರಿ ನೆರೆಯಿಂದ ಮನೆ ಮುಂದೆ ನಿಲ್ಲಿಸಿದಂತಹ ಎರಡು ಕಾರುಗಳು ಹಾಗೂ ಎರಡು ಬೈಕ್‌ಗಳು ಪ್ರವಾಹದಲ್ಲಿ ಕೊಚ್ಚಿ ಹೋಗಿವೆ.

ಕಬ್ಬಿನಾಲೆ ಭಾಗದ ಪರ್ವತ ಸಾಲಿನಲ್ಲಿ ಮೇಘ ಸ್ಫೋಟವಾಗಿ ಈ ಭೀಕರ ಪ್ರವಾಹ ಸೃಷ್ಟಿಯಾಗಿದ್ದು, ಸ್ಥಳಿಯರಿಂದ ರಕ್ಷಣೆ ಕಾರ್ಯಚರಣೆ ಮುಂದುವದಿದೆ.

ನಾಳೆಯೂ ಉಡುಪಿ ಸೇರಿ ವಿವಿಧೆಡೆ ಭಾರಿ ಮಳೆ

ಬೆಂಗಳೂರು: ಅಕ್ಟೋಬರ್ 7ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಉತ್ತರ ಒಳನಾಡು ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ (Karnataka Rain) ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ಅ.8ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಪ್ರತ್ಯೇಕ ಭಾರಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಅ. 9ರಂದು ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇದೇ ರೀತಿಯ ಹವಾಮಾನ ಅ.12ವರೆಗೆ ಇರಲಿದೆ.