Monday, 7th October 2024

Karnataka Rain: ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮುಂದುವರಿಯಲಿದೆ ವರುಣಾರ್ಭಟ!

Karnataka Rain

ಬೆಂಗಳೂರು: ರಾಜ್ಯದ ವಿವಿಧೆಡೆ ಭಾನುವಾರ ಭರ್ಜರಿ ಮಳೆಯಾಗಿದ್ದು, ಅ. 11ರವರೆಗೆ ಹಲವು ಜಿಲ್ಲೆಗಳಲ್ಲಿ ವರುಣನ ಅಬ್ಬರ ಮುಂದುವರಿಯಲಿದೆ. ಕಳೆದ 24 ಗಂಟೆಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಅರಿಯಡ್ಕದಲ್ಲಿ ರಾಜ್ಯದಲ್ಲೇ ಅತ್ಯಧಿಕ 120 ಮಿಮೀ ಮಳೆಯಾಗಿದೆ. ಇನ್ನು ಅ.8ರಂದು ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ, ಚಾಮರಾಜನಗರ, ಮೈಸೂರು, ಮಂಡ್ಯ, ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ (Karnataka Rain) ಮುನ್ಸೂಚನೆ ನೀಡಿದೆ.

ಇನ್ನು ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಸ್ಥಳಗಳಲ್ಲಿ ಮಂಗಳವಾರ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಗುಡುಗು ಸಹಿತ ಮಳೆಯಾಗುವ ಸಂಭವವಿದೆ ಎಂದು ತಿಳಿಸಿದೆ.

ಅದೇ ರೀತಿ ಅ.9ರಂದು ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗಲಿದೆ. ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ ಎಂದು ಮಾಹಿತಿ ನೀಡಿದೆ.

ಹಾಗೆಯೇ ಅ.10ರಂದು ಕೂಡ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದ್ದು, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಇನ್ನು ಅ.13ರವರೆಗೆ ಇದೇ ರೀತಿಯ ಹವಾಮಾನ ಇರಲಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30° C ಮತ್ತು 21° C ಆಗಿರಬಹುದು.

ಈ ಸುದ್ದಿಯನ್ನೂ ಓದಿ | Karnataka Rain: ಉಡುಪಿಯ ಹೆಬ್ರಿಯಲ್ಲಿ ಮೇಘ ಸ್ಫೋಟ; ಪ್ರವಾಹಕ್ಕೆ ಕೊಚ್ಚಿ ಹೋದ ವಾಹನಗಳು, ಕೃಷಿ ಜಮೀನು ಜಲಾವೃತ

ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30° C ಮತ್ತು 21° C ಆಗಿರಬಹುದು.