Friday, 22nd November 2024

Karnataka Weather: ಇಂದು ಬೆಂಗಳೂರು, ಹಾಸನ ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ!

Karnataka Weather

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಕಳೆದೆರಡು ದಿನಗಳಿಂದ ಭರ್ಜರಿ ಮಳೆ ಸುರಿಯುತ್ತಿದೆ. ಇನ್ನೂ ಮೂರು ದಿನಗಳ ಕಾಲ ರಾಜ್ಯದಲ್ಲಿ ಧಾರಾಕಾರ ಮಳೆ (Karnataka Weather) ಮುನ್ಸೂಚನೆ ಇದೆ. ಅದೇ ರೀತಿ ಅ.16ರಂದು ಬುಧವಾರ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಮೈಸೂರು, ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಅದೇ ರೀತಿ ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲೂ ಭಾರಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಅದೇ ರೀತಿ ಅ.17ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಅ.18ರಂದು ಕರಾವಳಿ ಕರ್ನಾಟಕದ ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಒಳನಾಡಿನ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದೇ ರೀತಿಯ ಹವಾಮಾನ ಅ.20ರವರೆಗೆ ಮುಂದುವರಿಯಲಿದೆ.

ದಕ್ಷಿಣ ಒಳನಾಡಿಗೆ ಆರೆಂಜ್‌ ಅಲರ್ಟ್‌

ದಕ್ಷಿಣ ಒಳನಾಡಿದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೊಡಗು, ಕೋಲಾರ, ಮೈಸೂರು, ಮಂಡ್ಯ ಸೇರಿ ವಿವಿಧ ಜಿಲ್ಲೆಗಳಲ್ಲಿ ಅ.17ರವರೆಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಇನ್ನು ಉತ್ತರ ಒಳನಾಡು ಕೆಲವು ಭಾಗಗಳಲ್ಲಿ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಚದುರಿದ ಮಳೆಯಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮತ್ತು ಅತಿಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಅದೇ ರೀತಿ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗಲಿದ್ದು, ಅ.17ರಂದು ಆರೆಂಜ್‌ ಅಲರ್ಟ್‌ ನೀಡಲಾಗಿದೆ.

ಈ ಸುದ್ದಿಯನ್ನೂ ಓದಿ | Bengaluru Rain: ಭಾರಿ ಮಳೆ ಹಿನ್ನೆಲೆ ಬೆಂಗಳೂರಿನ ಶಾಲೆಗಳಿಗೆ ನಾಳೆ ರಜೆ ಘೋಷಣೆ

ಅ.17ರ ಬೆಳಗ್ಗೆವರೆಗಿನ ಬೆಂಗಳೂರು, ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:

ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ. ಕೆಲವೊಮ್ಮೆ ಸಾಧಾರಣ ಮಳೆಯಾಗುವ ಸಾಧ್ಯತೆ ತುಂಬಾ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 25 ° C ಮತ್ತು 20 ° C ಆಗಿರಬಹುದು.