Monday, 25th November 2024

Baba Siddique: ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದಲ್ಲಿ ಗುಜರಿ ವ್ಯಾಪಾರಿ ಪೊಲೀಸ್‌ ಬಲೆಗೆ; ಬಂಧಿತರ ಸಂಖ್ಯೆ 10ಕ್ಕೆ ಏರಿಕೆ

Baba Siddique murder case

ಮುಂಬೈ: ದೇಶವನ್ನೇ ಬೆಚ್ಚಿ ಬೀಳಿಸಿದ ಮಹಾರಾಷ್ಟ್ರದ ಮಾಜಿ ಸಚಿವ, ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ (Baba Siddique) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ (ಅಕ್ಟೋಬರ್‌ 20) ಮತ್ತೋರ್ವನನ್ನು ಬಂಧಿಸಲಾಗಿದೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 10ಕ್ಕೆ ಏರಿದೆ. ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಮುಂಬೈ ಪೊಲೀಸ್‌ನ ಕ್ರೈಂ ಬ್ರ್ಯಾಂಚ್‌ ಶೂಟರ್‌ಗಳಿಗೆ ಶಸ್ತ್ರಾಸ್ತ್ರ ಒದಗಿಸಿದ ಆರೋಪದ ಮೇಲೆ ನವೀ ಮುಂಬೈಯ ಗುಜರಿ ವ್ಯಾಪಾರಿಯನ್ನು ಬಂಧಿಸಿದೆ. ಆರೋಪಿಯನ್ನು ರಾಜಸ್ಥಾನದ ಉದಯಪುರ ಮೂಲದ ಭಗವತ್ ಸಿಂಗ್ ಓಂ ಸಿಂಗ್ (32) ಎಂದು ಗುರುತಿಸಲಾಗಿದೆ. ಈತ ಕೆಲವು ಸಮಯಗಳಿಂದ ನವೀ ಮುಂಬೈಯಲ್ಲಿ ವಾಸವಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಭಗವತ್ ಸಿಂಗ್ ಓಂ ಸಿಂಗ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅಕ್ಟೋಬರ್ 26ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಪ್ರಕರಣದ ಪ್ರಮುಖ ಶೂಟರ್ ಶಿವಕುಮಾರ್ ಗೌತಮ್ ಮತ್ತು ಕೊಲೆ ಪಿತೂರಿಯಲ್ಲಿ ಭಾಗಿಯಾಗಿರುವ ಇತರ ಇಬ್ಬರು ಇನ್ನೂ ತಲೆಮರೆಸಿಕೊಂಡಿದ್ದಾರೆ. ಲಾರೆನ್ಸ್ ಬಿಷ್ಣೋಯ್‌ ಗ್ಯಾಂಗ್‌ ಈಗಾಗಲೇ ಹತ್ಯೆಯ ಹೊಣೆ ಹೊತ್ತುಕೊಂಡಿದೆ.

ಪ್ರಕರಣದ ಹಿನ್ನೆಲೆ

66 ವರ್ಷದ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಅವರ ಮೇಲೆ ಅಕ್ಟೋಬರ್‌ 12ರಂದು ಮೂವರು ಗುಂಡಿನ ದಾಳಿ ನಡೆಸಿದ್ದರು. ಮುಂಬೈಯ ಬಾಂದ್ರಾ ಪ್ರದೇಶದ ಖೇರ್ ನಗರದಲ್ಲಿನ ಬಾಬಾ ಸಿದ್ದಿಕಿ ಅವರ ಪುತ್ರ, ಶಾಸಕ ಜೀಶಾನ್ ಸಿದ್ದಿಕಿ ಕಚೇರಿಯ ಹೊರಗೆ ಈ ದಾಳಿ ನಡೆದಿತ್ತು. ಆಘಾತಕಾರಿ ಸಂಗತಿಯೆಂದರೆ ದಸರಾ ಆಚರಣೆಯ ವೇಳೆ, ಪೊಲೀಸರು ಹೆಚ್ಚಿನ ಎಚ್ಚರಿಕೆ ವಹಿಸಿದ್ದ ದಿನದಂದೇ ಜನನಿಬಿಡ ರಸ್ತೆಯಲ್ಲಿ ಈ ದಾಳಿ ನಡೆಸಲಾಗಿತ್ತು. ಗಾಯಗೊಂಡ ಸಿದ್ದಿಕ್ಕಿ ಅವರನ್ನು ತಕ್ಷಣ ಲೀಲಾವತಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅಲ್ಲಿ ಅವರು ಮೃತಪಟ್ಟಿದ್ದರು.

ಕೊಲೆ ತನಿಖೆಗೆ ಸಂಬಂಧಿಸಿದಂತೆ, ಮುಂಬೈ ಪೊಲೀಸರು ಮಹಾರಾಷ್ಟ್ರದಾದ್ಯಂತ 15 ತಂಡಗಳನ್ನು ನಿಯೋಜಿಸಿದ್ದಾರೆ ಮತ್ತು ಶೂಟರ್‌ಗಳಿಗೆ ವ್ಯವಸ್ಥಾಪನಾ ಬೆಂಬಲವನ್ನು ನೀಡಿದವರನ್ನು ಗುರುತಿಸಲು ತನಿಖೆ ನಡೆಯುತ್ತಿದೆ ಎಂದು ಮುಂಬೈಯ ಅಪರಾಧ ವಿಭಾಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಲ್ಮಾನ್ ಮೇಲಿನ ದ್ವೇಷಕ್ಕೆ ಕೊಲೆ?

ಬಾಬಾ ಸಿದ್ದಿಕಿ ಅವರ ಹತ್ಯೆಯಲ್ಲಿ ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಣೋಯ್ ಮತ್ತು ನಟ ಸಲ್ಮಾನ್ ಖಾನ್ ನಡುವಿನ ದ್ವೇಷ ಸೇರಿದಂತೆ ಎಲ್ಲ ಸಂಭಾವ್ಯ ಕೋನಗಳ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ಲಾರೆನ್ಸ್ ಬಿಷ್ಣೋಯ್‌ ಸಲ್ಮಾನ್ ಖಾನ್‌ಗೆ ಪದೇ ಪದೆ ಬೆದರಿಕೆ ಒಡ್ಡುತ್ತಿದ್ದು ಕೊಲೆ ಮಾಡುವುದಾಗಿ ಹೇಳಿದ್ದಾನೆ. ಸಲ್ಮಾನ್ ಮತ್ತು ಬಾಬಾ ಸಿದ್ದಿಕಿ ಆಪ್ತರಾಗಿರುವ ಕಾರಣ ಅದೇ ಕೋಪದಲ್ಲಿ ಹತ್ಯೆ ಮಾಡಿದ್ದಾನೆ ಎಂಬುವ ವಾದವಿದೆ. ಈ ಹಿನ್ನೆಲೆಯಲ್ಲೂ ತನಿಖೆ ನಡೆಸುವುದಾಗಿ ಪೊಲೀಸರು ಹೇಳಿದ್ದಾರೆ. ವಿಜಯ ದಶಮಿಯಂದು ನಡೆದ ಸಿದ್ದೀಕ್ ಹತ್ಯೆಯ ಹೊಣೆ ಹೊತ್ತುಕೊಂಡಿರುವ ಬಿಷ್ಣೋಯ್, ಈ ಹಿಂದೆ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿದ್ದ. ಏಪ್ರಿಲ್ 14ರಂದು ಸಲ್ಮಾನ್ ವಾಸವಿರುವ ಮುಂಬೈನ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನಲ್ಲಿ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್‌ ಜತೆಗಾರರಾದ ಶೂಟರ್‌ಗಳು ಗುಂಡುಗಳನ್ನು ಹಾರಿಸಿದ್ದರು.

ಈ ಸುದ್ದಿಯನ್ನೂ ಓದಿ: Zeeshan Siddique: ಯುದ್ಧ ಮುಗಿದಿಲ್ಲ; ಬಿಷ್ಣೋಯ್‌ ಗ್ಯಾಂಗ್‌ಗೆ ಸವಾಲು ಒಡ್ಡಿದ ಬಾಬಾ ಸಿದ್ದಿಕಿ ಪುತ್ರ