ಬೆಂಗಳೂರು: ಸೋಮವಾರ ಮುಂಜಾನೆ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಮಳೆ ಆರ್ಭಟಿಸಿತ್ತು. ಇದರಿಂದ ರಾಜಧಾನಿಯ ಹಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ರಾಜಧಾನಿಯಲ್ಲಿ ಅಬ್ಬರಿಸುತ್ತಿರುವ ಮಳೆಯ (Karnataka Rain) ತೀವ್ರತೆ ಇನ್ನೂ ಮೂರು ದಿನಗಳು ಮುಂದುವರಿಯುವ ಸಾಧ್ಯತೆ ಇದೆ. ಯಾಕೆಂದರೆ, ಬೆಂಗಳೂರು ಸೇರಿ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಅಕ್ಟೋಬರ್ 23 ರವರೆಗೆ ಗುಡುಗು-ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ.
ಅ.22ರಂದು ಉಡುಪಿ, ಮೈಸೂರು, ಬೆಂಗಳೂರು, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಭಾರಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಕರಾವಳಿ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಇನ್ನು ಅ.23ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಕೊಡಗು, ಮೈಸೂರು, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಚಿತ್ರದುರ್ಗ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಭಾರಿ ಮಳೆ/ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ.
ಅ.24 ರಂದು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳು ಹಾಗೂ ಕರಾವಳಿ ಜಿಲ್ಲೆಗಳಲ್ಲೂ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇದೇ ರೀತಿಯ ಹವಾಮಾನ ಅ.27ರವರೆಗೆ ಮುಂದುವರಿಯಲಿದೆ.
ಅ.23 ಬೆಳಗ್ಗೆವರೆಗಿನ ಬೆಂಗಳೂರು, ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ
ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆ ಅಥವಾ ಗುಡುಗು ಸಹಿತ ಭಾರಿ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29° C ಮತ್ತು 20° C ಆಗಿರಬಹುದು.
ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29° C ಮತ್ತು 20 ° C ಆಗಿರಬಹುದು.