ಬೆಂಗಳೂರು: ಅಕ್ಟೋಬರ್ 26ರಂದು ಬೆಂಗಳೂರಿನಲ್ಲಿ ಆಯೋಜಿಸಿರುವ ಕಂಬಳ ಸ್ಪರ್ಧೆಯನ್ನು (Bengaluru Kambala) ನಿಲ್ಲಿಸುವಂತೆ ಪ್ರಾಣಿ ದಯಾ ಸಂಘ ‘ಪೆಟಾ’ (PETA India) ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದೆ. ಅರ್ಜಿಯನ್ನು ತುರ್ತು ವಿಚಾರಣೆಗೆ ಪರಿಗಣಿಸುವಂತೆ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ ಅವರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ಪೀಠಕ್ಕೆ ಮನವಿ ಮಾಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಂಪ್ರದಾಯಿಕವಾಗಿ ನಡೆಯುವ ಕಂಬಳವನ್ನು ಇದೇ ತಿಂಗಳು ಬೆಂಗಳೂರಿನಲ್ಲಿ ಆಯೋಜಿಸಲು ನಿರ್ಧರಿಸಲಾಗಿದ್ದು, ರಾಜ್ಯದ ವಿವಿಧ ಭಾಗಗಳಿಂದ ಕೋಣಗಳನ್ನು ಕರೆತರಲಾಗುತ್ತದೆ. ಆದರೆ, ಕಂಬಳ ಒಂದು ಪ್ರಾಣಿ ಹಿಂಸಾ ಕೃತ್ಯವಾಗಿದೆ ಎಂದು ವಕೀಲ ಧ್ಯಾನ್ ಚಿನ್ನಪ್ಪ ಪೀಠಕ್ಕೆ ತಿಳಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿರುವ ನ್ಯಾಯ ಪೀಠ, ಅ.26ಕ್ಕೆ ಕಂಬಳ ಸ್ಪರ್ಧೆ ಆಯೋಜಿಸಲಾಗಿದೆ ಎನ್ನುತ್ತಿದ್ದೀರಿ. ಕೊನೆಯ ಕ್ಷಣದಲ್ಲಿ ನ್ಯಾಯಾಲಯದ ಮುಂದೆ ಬಂದಿರುವುದೇಕೆ? ಎಂದು ಪೀಠ ಪ್ರಶ್ನಿಸಿದೆ. ‘ಈ ಸಂಬಂಧ ಜುಲೈನಲ್ಲಿಯೇ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಅದನ್ನು ಇನ್ನೂ ವಿಚಾರಣೆಗೆ ನಿಗದಿಪಡಿಸಲಾಗಿಲ್ಲ. ತುರ್ತು ವಿಚಾರಣೆಗೆ ಪರಿಗಣಿಸಬೇಕಿದೆ’ ಎಂದು ವಕೀಲರು ತಿಳಿಸಿದ್ದಾರೆ. ವಾದ ಆಲಿಸಿದ ಪೀಠ ವಿಚಾರಣೆಯನ್ನು ಮಂಗಳವಾರಕ್ಕೆ ಮೂಂದೂಡಿದೆ.
ಈ ಸುದ್ದಿಯನ್ನೂ ಓದಿ | MK Stalin: 16 ಮಕ್ಕಳನ್ನು ಹೊಂದುವಂತೆ ಕರೆ ನೀಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್; ಕಾರಣವೇನು?
ದಕ್ಷಿಣ ಕನ್ನಡ ಮತ್ತು ಉಡುಪಿಯ ಗ್ರಾಮೀಣ ಭಾಗಗಳಲ್ಲಿ ಹೊರತುಪಡಿಸಿ ಬೇರೆಲ್ಲೂ ಕಂಬಳ ಸ್ಪರ್ಧೆ ನಡೆಸಲು ಅನುಮತಿಸಬಾರದು. ಪ್ರಾಣಿಗಳ ಮೇಲಿನ ಕ್ರೌರ್ಯ ನಿಷೇಧ ಕಾಯ್ದೆಯ ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಗೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ. ಸಂಪ್ರದಾಯ ಮತ್ತು ಸಂಸ್ಕೃತಿಗೆ ವಿರುದ್ಧವಾಗಿ ವಾಣಿಜ್ಯ ಉದ್ದೇಶಕ್ಕಾಗಿ ಕಂಬಳ ಸ್ಪರ್ಧೆ ಆಯೋಜಿಸಲಾಗುತ್ತಿದ್ದು, ಅದಕ್ಕೆ ಅನುಮತಿಸದಂತೆ ಪೆಟಾ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಇದಕ್ಕೆ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಹೈಕೋರ್ಟ್ ಮೆಟ್ಟಿಲೇರಿದೆ.