Wednesday, 23rd October 2024

Kolkata Murder Case: ಸಂಧಾನ ಯಶಸ್ವಿ; ದೀದಿ ಭೇಟಿ ಬಳಿಕ ಉಪವಾಸ ಸತ್ಯಾಗ್ರಹ ಕೈಬಿಟ್ಟ ವೈದ್ಯರು

Kolkata Murder Case

ಕೊಲ್ಕತ್ತಾ: ಟ್ರೈನಿ ವೈದ್ಯೆ ಕೊಲೆ ಮತ್ತು ಅತ್ಯಾಚಾರ ಪ್ರಕರಣ(Kolkata Murder case) ಖಂಡಿಸಿ ಕೋಲ್ಕತ್ತಾದಲ್ಲಿ ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹವನ್ನು ಕಿರಿಯ ವೈದ್ಯರು(Kolkata doctors protest) ಕೊನೆಗೊಳಿಸಿದ್ದಾರೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ(Mamata Banerjee)ಭೇಟಿಯಾದ ಕೆಲವೇ ಗಂಟೆಗಳ ನಂತರ ಆರ್‌ಜಿ ಕಾರ್ ನ ಕಿರಿಯ ವೈದ್ಯರು ತಮ್ಮ ಉಪವಾಸ ಸತ್ಯಾಗ್ರಹವನ್ನು(hunger strike) ಕೈಬಿಟ್ಟಿದ್ದಾರೆ.

ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮಹಿಳಾ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಕಿರಿಯ ವೈದ್ಯರ ತಂಡ ತಮ್ಮ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು. ನಿನ್ನೆ ಸಂಜೆ ಮುಖ್ಯಮಂತ್ರಿ ಬ್ಯಾನರ್ಜಿ ಅವರು ವೈದ್ಯರ ಜತೆ ಸಂಧಾನ ಮಾತುಕತೆ ನಡೆಸಿದ್ದು, ಪ್ರತಿಭಟನಾ ನಿತರ ವೈದ್ಯರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ವೈದ್ಯಾಧಿಕಾರಿಗಳ ಬೇಡಿಕೆಯಂತೆ ಮುಖ್ಯಮಂತ್ರಿ ಮತ್ತು ಪ್ರತಿಭಟನಾನಿರತ ವೈದ್ಯರ ನಡುವಿನ ಕೊನೆಯ ಸಭೆಯು ಎರಡು ಗಂಟೆಗಳಿಗೂ ಹೆಚ್ಚು ಕಾಲ ನಡೆಯಿತು. ಇದಾದ ಬಳಿಕ ವೈದ್ಯರು ತಮ್ಮ ಪ್ರತಿಭಟನೆಯನ್ನು ಕೈಬಿಟ್ಟಿದ್ದಾರೆ.

ಇನ್ನು ಈ ಬಗ್ಗೆ ವೈದ್ಯರೊಬ್ಬರು ಪ್ರತಿಕ್ರಿಯಿಸಿದ್ದು, ಇಂದಿನ ಸಭೆಯಲ್ಲಿ ನಮ್ಮ ಬೇಡಿಕೆಗಳ ಈಡೇರಿಕೆಯ ಭರವಸೆಗಳು ಸಿಕ್ಕಿವೆ. ಸಿಎಂ ಉಪವಾಸವನ್ನು ಕೊನೆಗೊಳಿಸುವಂತೆ ನಮ್ಮನ್ನು ಒತ್ತಾಯಿಸಿದ್ದಾರೆ. ರಾಜ್ಯ ಆರೋಗ್ಯ ಕಾರ್ಯದರ್ಶಿಯನ್ನು ಹುದ್ದೆಯಿಂದ ವಜಾಗೊಳಿಸುವುದನ್ನು ಹೊರತುಪಡಿಸಿ ಉಳಿದೆಲ್ಲಾ ಬೇಡಿಕೆಗಳನ್ನು ಪರಿಹರಿಸಲಾಗಿದೆ ಎಂದು ಹೇಳಿದರು. ಜನಸಾಮಾನ್ಯರು ನಮ್ಮನ್ನು ತುಂಬು ಹೃದಯದಿಂದ ಬೆಂಬಲಿಸಿದ್ದಾರೆ. ಅವರು ಮತ್ತು ಸಂತ್ರಸ್ತೆಯ ಪೋಷಕರು ನಮ್ಮ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಉಪವಾಸ ಸತ್ಯಾಗ್ರಹವನ್ನು ಕೈಬಿಡುವಂತೆ ಮನವಿ ಮಾಡುತ್ತಿದ್ದಾರೆ. ಎಲ್ಲರ ಮನವಿಯ ಮೇರೆಗೆ ನಾವು ಈ ನಿರ್ಧಾರವನ್ನು ಕೈಗೊಂಡಿದ್ದೇವೆ ಎಂದು ಪ್ರತಿಭಟನಾ ನಿರತ ವೈದ್ಯರು ಹೇಳಿದ್ದಾರೆ.

ಪಶ್ಚಿಮ ಬಂಗಾಳದ ಕೋಲ್ಕತಾದಲ್ಲಿನ ಸರ್ಕಾರಿ ಸ್ವಾಮ್ಯದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಆಗಸ್ಟ್‌ 9ರಂದು ಟ್ರೈನಿ ವೈದ್ಯೆಯ ಶವ ಪತ್ತೆಯಾಗಿತ್ತು. ಎರಡನೇ ವರ್ಷದ ಸ್ನಾತಕೋತ್ತರ ವೈದ್ಯಕೀಯ ಪದವಿ ವಿದ್ಯಾರ್ಥಿಯಾಗಿದ್ದ ಆಕೆ, ಆಗಸ್ಟ್‌ 8ರ ರಾತ್ರಿ ತಡವಾಗಿ ಊಟ ಮುಗಿಸಿ ಕ್ಯಾಂಪಸ್‌ನ ಮೂರನೇ ಮಹಡಿಯಲ್ಲಿನ ಸೆಮಿನಾರ್ ಹಾಲ್‌ಗೆ ಓದುವ ಸಲುವಾಗಿ ತೆರಳಿದ್ದರು. ಮರುದಿನ ಬೆಳಿಗ್ಗೆ ಅವರ ಶವ ಪತ್ತೆಯಾಗಿತ್ತು. ಮರಣೋತ್ತರ ಪರೀಕ್ಷೆಯಲ್ಲಿ ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ ಕ್ರೂರವಾಗಿ ಹತ್ಯೆಗೈದಿರುವುದು ಬೆಳಕಿಗೆ ಬಂದಿತ್ತು. ಕುತ್ತಿಗೆ ಮುರಿದ ಸ್ಥಿತಿಯಲ್ಲಿ ಕಂಡು ಬಂದಿತ್ತು. ಈ ಪ್ರಕರಣ ದೇಶಾದ್ಯಂತ ಸಂಚಲನ ಸೃಷ್ಟಿಸಿದೆ. ಟ್ರೈನಿ ವೈದ್ಯೆ ಕೊಲೆ ಪ್ರಕರಣ ಖಂಡಿಸಿ ಪ್ರತಿಭಟನೆ ನಡೆಸಿರುವ ವೈದ್ಯರ ಒತ್ತಾಯಕ್ಕೆ ಕೊನೆಗೂ ಮಮತಾ ಬ್ಯಾನರ್ಜಿ ಸರ್ಕಾರ ಮಣಿದಿದೆ. ವೈದ್ಯರ ಬೇಡಿಕೆಯಂತೆ ಕೋಲ್ಕತ್ತಾ ಪೊಲೀಸ್‌ ಕಮಿಷನರ್‌ ಮತ್ತು ಆರೋಗ್ಯ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಇದಾದ ಬಳಿಕ ವಿವಿಧ ಬೇಡಿಕೆಗೆ ಆಗ್ರಹಿಸಿದ ಕಿರಿಯ ವೈದ್ಯರು ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು.

ಈ ಸುದ್ದಿಯನ್ನೂ ಓದಿ: Kolkata Doctors Protest: ಕೋಲ್ಕತ್ತಾದಲ್ಲಿ ಮತ್ತೆ ವೈದ್ಯರ ಮುಷ್ಕರ; ವಿವಿಧ ಬೇಡಿಕೆಗಳಿಗೆ ಆಗ್ರಹ