Monday, 18th November 2024

Ration Card: ರಾಜ್ಯದಲ್ಲಿ ರದ್ದಾಗಲಿದೆ 14 ಲಕ್ಷ ಮಂದಿಯ ಪಡಿತರ ಕಾರ್ಡ್​!

bpl ration card

ಬೆಂಗಳೂರು: ರಾಜ್ಯದಲ್ಲಿ ಸುಮಾರು 14 ಲಕ್ಷ ಬಿಪಿಎಲ್‌ ಪಡಿತರ ಕಾರ್ಡ್‌ಗಳು (BPL card, Ration Card) ಅನರ್ಹರ ಪಾಲಾಗಿದ್ದು, ಇವುಗಳನ್ನು ರದ್ದುಪಡಿಸಲಾಗುತ್ತದೆ ಎಂದು ಸಚಿವ ಕೆಎಚ್ ಮುನಿಯಪ್ಪ (KH Muniyappa) ಮಾಹಿತಿ ನೀಡಿದ್ದಾರೆ.

ಕರ್ನಾಟಕದಲ್ಲಿ ಅನರ್ಹರೂ ಕೂಡ ಬಿಪಿಎಲ್ ಪಡಿತರ ಕಾರ್ಡ್​ ಹೊಂದಿದ್ದು, ಸರ್ಕಾರದಿಂದ ಬಡವರಿಗೆ ದೊರೆಯುವ ಅನೇಕ ಸವಲತ್ತುಗಳನ್ನು ಪಡೆಯುತ್ತಿರುವುದನ್ನು ಗಮನಿಸಿರುವ ಆಹಾರ ಇಲಾಖೆ ಕಠಿಣ ಕ್ರಮ ಆರಂಭಿಸಿದೆ. ವಿವಿಧ ಜಿಲ್ಲೆಗಳಲ್ಲಿ ಕಾರ್ಯಾಚರಣೆ ನಡೆಸಿ ಅನರ್ಹರ ಕಾರ್ಡ್​​ಗಳನ್ನು ರದ್ದುಗೊಳಿಸಲಾಗುತ್ತಿದೆ. ಇದೀಗ ಅಧಿಕಾರಿಗಳು 13.87 ಲಕ್ಷ ಅನರ್ಹ ಕಾರ್ಡ್‌ಗಳನ್ನು ಗುರುತಿಸಿದ್ದು, ಅವುಗಳಲ್ಲಿ 3.64 ಲಕ್ಷ ಕಾರ್ಡ್‌ಗಳನ್ನು ರದ್ದುಗೊಳಿಸಲಾಗಿದೆ ಎಂದಿದ್ದಾರೆ.

ಇದರಲ್ಲಿ ಸರ್ಕಾರಿ ನೌಕರರ 2,964 ಕಾರ್ಡ್‌ಗಳನ್ನು ರದ್ದುಗೊಳಿಸಲಾಗಿದೆ. ರಾಜ್ಯದಲ್ಲಿ 4.35 ಕೋಟಿ ಫಲಾನುಭವಿಗಳು 1.51 ಕೋಟಿ ಪಡಿತರ ಕಾರ್ಡ್ ಮೂಲಕ ಸರ್ಕಾರದ ಸವಲತ್ತುಗಳನ್ನು ಪಡೆಯುತ್ತಿದ್ದಾರೆ ಎಂದು ಮುನಿಯಪ್ಪ ತಿಳಿಸಿದ್ದಾರೆ.

6 ತಿಂಗಳವರೆಗೆ ಪಡಿತರ ಪಡೆಯದಿರುವವರು, ಒಂದು ವರ್ಷದವರೆಗೆ ನೇರ ನಗದು ವರ್ಗಾವಣೆ ಸೌಲಭ್ಯ ಪಡೆಯದಿರುವವರು ಮತ್ತು ನಿಗದಿಪಡಿಸಿದ್ದಕ್ಕಿಂತ ಹೆಚ್ಚಿನ ವಾರ್ಷಿಕ ಆದಾಯ ಹೊಂದಿರುವವರನ್ನು ಅನರ್ಹರೆಂದು ಪರಿಗಣಿಸಲಾಗುತ್ತಿದೆ. ಅನರ್ಹ ಪಡಿತರ ಚೀಟಿಗಳ ಸಂಖ್ಯೆ 20 ಲಕ್ಷಕ್ಕಿಂತ ಹೆಚ್ಚಿರಬಹುದು ಎಂದು ಸಚಿವರು ಅಂದಾಜಿಸಿದ್ದಾರೆ.

ಅರ್ಹ ಫಲಾನುಭವಿಗಳು ಸೌಲಭ್ಯ ಪಡೆಯದೇ ಕಾರ್ಡ್​ ರದ್ದಾದಲ್ಲಿ ಮುಂದಿನ ದಿನಗಳಲ್ಲಿ ಹೊಸ ಕಾರ್ಡ್‌ಗಳನ್ನು ಪಡೆಯಲು ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

ಪ್ರತಿ ಅನ್ನಭಾಗ್ಯ ಫಲಾನುಭವಿಗೆ ಐದು ಕೆಜಿ ಅಕ್ಕಿ ಬದಲಿಗೆ 170 ರೂ.ಗಳ ನೇರ ನಗದು ವರ್ಗಾವಣೆ (ಡಿಬಿಟಿ) ಮುಂದುವರಿಯಲಿದೆ ಎಂದು ಮುನಿಯಪ್ಪ ತಿಳಿಸಿದರು. ರಾಜ್ಯಕ್ಕೆ ಕೆಜಿ ಅಕ್ಕಿಯನ್ನು 28 ರೂ.ಗೆ ಮಾರಾಟ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ ಎಂದೂ ಅವರು ಹೇಳಿದರು. ಹೆಚ್ಚುವರಿಯಾಗಿ ಅಗತ್ಯವಿರುವ 20,000 ಮೆಟ್ರಿಕ್ ಟನ್ ಅಕ್ಕಿಯನ್ನು ರಾಜ್ಯ ಸರ್ಕಾರ ಬೇರೆಡೆಗಳಿಂದ ಸಂಗ್ರಹಿಸಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

2023-24ರಲ್ಲಿ ಕರ್ನಾಟಕಕ್ಕೆ ವಾರ್ಷಿಕ 27.48 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ಕೆಜಿಗೆ 34.6 ರೂಪಾಯಿಗೆ ನೀಡಲು ಕೇಂದ್ರ ನಿರಾಕರಿಸಿತ್ತು. ಹೀಗಾಗಿ ರಾಜ್ಯ ಸರ್ಕಾರವು ಚುನಾವಣಾ ಪೂರ್ವ ಭರವಸೆಯಂತೆ 5 ಕೆಜಿ ಅಕ್ಕಿ ಬದಲಿಗೆ 170 ರೂಪಾಯಿ ನೀಡಲು ನಿರ್ಧರಿಸಿತ್ತು. ಹೋಟೆಲ್, ಸಮುದಾಯ ಭವನಗಳಲ್ಲಿ ಆಹಾರ ಪೋಲು ಮಾಡುವುದನ್ನು ತಡೆಯಲು ಕಾನೂನು ರೂಪಿಸುವಂತೆಯೂ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮುನಿಯಪ್ಪ ತಿಳಿಸಿದ್ದಾರೆ.

ಇದನ್ನೂ ಓದಿ: Ration Card: ಬಿಪಿಎಲ್‌, ಅಂತ್ಯೋದಯಕ್ಕೆ ಇನ್ನು ನೇರ ನಗದು ಇಲ್ಲ, ಬದಲಿಗೆ ಆಹಾರ ಕಿಟ್