Saturday, 23rd November 2024

Dearness Allowance: ಬಾಕಿ ತುಟ್ಟಿಭತ್ಯೆ ನಗದು ರೂಪದಲ್ಲಿ ಬಿಡುಗಡೆ ಮಾಡಿ; ಸಿಎಂಗೆ ರಾಜ್ಯ ಸರ್ಕಾರಿ ನೌಕರರ ಸಂಘ ಪತ್ರ

Dearness Allowance

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ 2024ರ ಜುಲೈ 1ರಿಂದ ಅನ್ವಯವಾಗುವಂತೆ ಬಾಕಿ ಇರುವ ತುಟ್ಟಿಭತ್ಯೆಯನ್ನು ನಗದು ರೂಪದಲ್ಲಿ ಬಿಡುಗಡಲು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌.ಷಡಾಕ್ಷರಿ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಸಿ.ಎಸ್‌.ಷಡಾಕ್ಷರಿ ಅವರು, ಅಖಿಲ ಭಾರತ ಬೆಲೆ ಸೂಚ್ಯಂಕವನ್ನಾಧರಿಸಿ ಕೇಂದ್ರ ಸರ್ಕಾರವು ತನ್ನ ನೌಕರರಿಗೆ ತುಟ್ಟಿಭತ್ಯೆಯನ್ನು ಮಂಜೂರು ಮಾಡಿದ ದಿನಾಂಕದಿಂದಲೇ ರಾಜ್ಯ ಸರ್ಕಾರವು ಸಹ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಮಂಜೂರು ಮಾಡುವುದು ಸಂಪ್ರದಾಯವಾಗಿದೆ.

ಪ್ರಸ್ತುತ ಕೇಂದ್ರ ಸರ್ಕಾರವು ಅಖಿಲ ಭಾರತ ಬೆಲೆ ಸೂಚ್ಯಂಕವನ್ನಾಧರಿಸಿ 2024ರ ಜುಲೈ 1ರಿಂದ ಅನ್ವಯವಾಗುವಂತೆ ಕೇಂದ್ರ ಸರ್ಕಾರಿ ನೌಕರರಿಗೆ ಶೇ. 3ರಷ್ಟು ತುಟ್ಟಿಭತ್ಯೆಯನ್ನು ಮಂಜೂರು ಮಾಡಿ ಆದೇಶಿಸಿದೆ. ಆದ್ದರಿಂದ, ಕೇಂದ್ರ ಸರ್ಕಾರದ ಆದೇಶದಂತೆ ರಾಜ್ಯದ ಸರ್ಕಾರಿ ನೌಕರರಿಗೆ ಜುಲೈ 1 ರಿಂದ ಅನ್ವಯವಾಗುವಂತೆ ಶೇ. 3ರಷ್ಟು ತುಟ್ಟಿಭತ್ಯೆಯನ್ನು ಸಂಪೂರ್ಣ ನಗದು ರೂಪದಲ್ಲಿ ನೀಡಿ ಆದೇಶ ಹೊರಡಿಸಲು ಸಂಬಂಧಪಟ್ಟವರಿಗೆ ನಿರ್ದೇಶನ ನೀಡಲು ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌.ಷಡಾಕ್ಷರಿ ಕೋರಿದ್ದಾರೆ.

ಈ ಸುದ್ದಿಯನ್ನೂ ಓದಿ | DA Hike: ದೀಪಾವಳಿ ಹಬ್ಬಕ್ಕೂ ಮುನ್ನ ಕೇಂದ್ರ ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌; ತುಟ್ಟಿ ಭತ್ಯೆ 3% ಹೆಚ್ಚಳ