Sunday, 24th November 2024

Maharashtra Election: ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿಯ ಸೀಟು ಹಂಚಿಕೆಯ ಗೊಂದಲ ಇತ್ಯರ್ಥ; ಉದ್ಧವ್ ಠಾಕ್ರೆ ಶಿವಸೇನೆಯ ಪಟ್ಟಿ ರಿಲೀಸ್‌

Maharashtra Election

ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆ (Maharashtra Election)ಯ ಚಟುವಟಿಕೆ ಗರಿಗೆದರಿದೆ. ಈಗಾಗಲೇ ಬಿಜೆಪಿ (BJP) ಮತ್ತು ಅಜಿತ್‌ ಪವಾರ್ ನೇತೃತ್ವದ ಎನ್‌ಸಿಪಿ (NCP) ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಇದೀಗ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (Shiv Sena-UBT) ಬಣದ ಸರದಿ. ಬುಧವಾರ (ಅಕ್ಟೋಬರ್‌ 22) 65 ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ್ದು, ಮೈತ್ರಿ ಪಕ್ಷಗಳೊಂದಿಗೆ ಮಹಾರಾಷ್ಟ್ರದ ಸೀಟು ಹಂಚಿಕೆಯನ್ನು ಅಂತಿಮಗೊಳಿಸಲಾಗಿದೆ ಎಂದು ಹೇಳಿದೆ. ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ), ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಮತ್ತು ಕಾಂಗ್ರೆಸ್ ಅನ್ನು ಒಳಗೊಂಡಿರುವ ಮಹಾ ವಿಕಾಸ್ ಅಘಾಡಿ (Maha Vikas Aghadi) ಶತಾಯ ಗಥಾಯ ಈ ಬಾರಿ ರಾಜ್ಯದಲ್ಲಿ ಅಧಿಕಾರ ಹಿಡಿಯಲೇ ಬೇಕು ಎನ್ನುವ ಪಣ ತೊಟ್ಟಿದೆ.

ಯಾರಿಗೆಷ್ಟು ಸೀಟು?

ಮಹಾ ವಿಕಾಸ್ ಅಘಾಡಿಯ ಮೈತ್ರಿ ಪಕ್ಷಗಳಾದ ಶಿವಸೇನೆ (ಯುಬಿಟಿ), ಕಾಂಗ್ರೆಸ್‌ ಮತ್ತು ಶರದ್‌ ಪವಾರ್‌ ಅವರ ಎನ್‌ಸಿಪಿ (ಶರದ್‌ಚಂದ್ರ ಪವಾರ್‌-Nationalist Congress Party (Sharadchadra Pawar) ಬಣ ತಲಾ 85 ಸೀಟುಗಳಲ್ಲಿ ಸ್ಪರ್ಧಿಸಲಿದೆ. ಇನ್ನುಳಿದ 33 ಕಡೆ ಮಹಾ ವಿಕಾಸ್ ಅಘಾಡಿಯ ಸಣ್ಣ ಮಿತ್ರಪಕ್ಷಗಳು ಕಣಕ್ಕಿಳಿಯಲಿವೆ ಎಂದು ಮೂಲಗಳು ತಿಳಿಸಿವೆ.

ಚುನಾವಣೆ ಯಾವಾಗ?

ಮಹಾರಾಷ್ಟ್ರದಲ್ಲಿ ನವೆಂಬರ್ 20ರಂದು ಒಂದೇ ಹಂತದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ನವೆಂಬರ್ 23ರಂದು ಫಲಿತಾಂಶ ಪ್ರಕಟವಾಗಲಿದೆ. ಬಿಜೆಪಿ, ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮಹಾರಾಷ್ಟ್ರದಲ್ಲಿ ಅಧಿಕಾರವನ್ನು ಉಳಿಸಿಕೊಳ್ಳಲು ಮುಂದಾಗಿದೆ. ಬಿಜೆಪಿ ನೇತೃತ್ವದ ಈ ಮೈತ್ರಿಕೂಟಕ್ಕೆ ಮಹಾಯುತಿ ಎಂದು ಹೆಸರಿಡಲಾಗಿದೆ.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು 288 ಸ್ಥಾನಗಳಿವೆ. 2019ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 105 ಸ್ಥಾನಗಳನ್ನು ಗೆದ್ದರೆ, ಶಿವಸೇನೆ 56 ಮತ್ತು ಕಾಂಗ್ರೆಸ್ 44 ಸ್ಥಾನಗಳನ್ನು ಗಳಿಸಿತ್ತು. 2014ರಲ್ಲಿ ಬಿಜೆಪಿ 122, ಶಿವಸೇನೆ 63 ಮತ್ತು ಕಾಂಗ್ರೆಸ್ 42 ಕಡೆ ಜಯ ಗಳಿಸಿದ್ದವು.

ಬಿಜೆಪಿಯ 99 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ

ಬಿಜೆಪಿ ತನ್ನ ಮೊದಲ ಪಟ್ಟಿಯನ್ನು ಅಕ್ಟೋಬರ್‌ 20ರಂದು ಪ್ರಕಟಿಸಿತ್ತು. ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಚಂದ್ರಶೇಖರ್ ಬವಾನ್ಕುಲೆ ಸೇರಿದಂತೆ 99 ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದೆ. ದೇವೇಂದ್ರ ಫಡ್ನವೀಸ್ ನಾಗ್ಪುರ ನೈಋತ್ಯ ಕ್ಷೇತ್ರದಿಂದ ಸ್ಪರ್ಧಿಸಿದರೆ, ಬವಾನ್ಕುಲೆ ಕಾಮ್ತಿಯಿಂದ ಸ್ಪರ್ಧಿಸಲಿದ್ದಾರೆ. ಬಿಜೆಪಿ ನಾಯಕ ಮತ್ತು ರಾಜ್ಯಸಭಾ ಸಂಸದ ಅಶೋಕ್ ಚವಾಣ್ ಅವರ ಪುತ್ರಿ ಶ್ರೀಜಯ ಚವಾಣ್ ಭೋಕರ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಅದೇ ರೀತಿ  ಸಚಿವರಾದ ಗಿರೀಶ್ ಮಹಾಜನ್, ಸುಧೀರ್ ಮುಂಗಂತಿವಾರ್ ಮತ್ತು ಅತುಲ್ ಸಾವೆ ಅವರಂತಹ ಪ್ರಮುಖ ಹೆಸರುಗಳಿವೆ.

ಈ ಸುದ್ದಿಯನ್ನೂ ಓದಿ: Maharashtra Election 2024 : ಮಹಾರಾಷ್ಟ್ರ ಚುನಾವಣೆಗೆ ಬಿಜೆಪಿಯ 99 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ