Monday, 25th November 2024

Belekeri case: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ; ಕಾಂಗ್ರೆಸ್‌ ಶಾಸಕ ಸತೀಶ್ ಸೈಲ್‌ ಬಂಧನ

Belekeri case

ಬೆಂಗಳೂರು: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ (Belekeri case) ಸಂಬಂಧಿಸಿ ಕಾರವಾರ ಕಾಂಗ್ರೆಸ್‌ ಶಾಸಕ ಸತೀಶ್ ಸೈಲ್‌ (MLA Satish Sail) ಅವರ ಬಂಧನವಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಂಧಿಸುವಂತೆ ಗುರುವಾರ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ಶಾಸಕ ಸತೀಶ್ ಸೈಲ್ ಅವರನ್ನು ಬಂಧಿಸಿದ್ದಾರೆ.

2010ರ ಬೇಲೆಕೇರಿ ಬಂದರಿನಲ್ಲಿನ ಅದಿರು ನಾಪತ್ತೆ ಪ್ರಕರಣ ಸಂಬಂಧ ಕೋರ್ಟ್ ತೀರ್ಪು ಪ್ರಕಟಿಸಿದೆ. ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರು ಅಪರಾಧಿ ಎಂಬುದಾಗಿ ತನ್ನ ತೀರ್ಪಿನಲ್ಲಿ ಕೋರ್ಟ್ ಪ್ರಕಟಿಸಿದೆ. ಆದರೇ ಶಿಕ್ಷೆಯ ಪ್ರಮಾಣವನ್ನು ಶುಕ್ರವಾರ ಪ್ರಕಟಿಸುವುದಾಗಿ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ಶಾಸಕ ಸತೀಶ್ ಸೈಲ್ ಅವರನ್ನು ಬಂಧಿಸಿದ್ದಾರೆ.

ಪ್ರಕರಣದ ಸಂಬಂಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಾದ-ಪ್ರತಿವಾದವನ್ನು ಆಲಿಸಿತ್ತು. ಇದೀಗ ಪ್ರಕರಣ ಸಂಬಂಧ ತೀರ್ಪು ಪ್ರಕಟಿಸಿದ್ದು, ಬೇಲೆಕೇರಿಯಲ್ಲಿ ಸೀಜ್ ಆಗಿದ್ದಂತಹ 11,312 ಮೆಟ್ರಿಕ್ ಟನ್ ಅದಿರನ್ನು ಅನುಮತಿ ಇಲ್ಲದೇ ಸಾಗಾಟ ಮಾಡಲಾಗಿತ್ತು. ಈ ಸಂಬಂಧ ಒಟ್ಟು 6 ಪ್ರಕರಣಗಳು ದಾಖಲಾಗಿದ್ದವು.

ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ವಾದ-ಪ್ರತಿವಾದ ಆಲಿಸಿ, ಕಾಂಗ್ರೆಸ್ ಶಾಸಕ ಸತೀಶ್ ಸೈಲ್, ಅರಣ್ಯಾಧಿಕಾರಿ ಮಹೇಶ್ ಬಿಳಿಯೆ, ಮಲ್ಲಿಕಾರ್ಜುನ ಶಿಪ್ಪಿಂಗ್ ಸೇರಿ ಹಲವರನ್ನು ದೋಷಿಗಳು ಎಂಬುದಾಗಿ ತೀರ್ಪು ನೀಡಿದೆ. ಈ ಹಿನ್ನೆಲೆಯಲ್ಲಿ ಆರೋಪಿಗಳನ್ನು ಸಿಬಿಐ ಬಂಧಿಸಿ, ಪರಪ್ಪನ ಅಗ್ರಹಾರ ಜೈಲು ಸೇರಿಸಿದೆ.

ಈ ಸುದ್ದಿಯನ್ನೂ ಓದಿ | Terror Attack: ಜಮ್ಮು & ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ; ಸೇನಾ ವಾಹನದ ಮೇಲೆ ದಾಳಿ

ಸಿಬಿಐ ನಿಂದ ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಾಗಿತ್ತು. ಈ ಪ್ರಕರಣ ವಿಚಾರಣೆ ನಡೆಸಿದಂತ ನ್ಯಾಯಾಲಯವು ಇಂದು ಶಾಸಕ ಸತೀಶ್ ಸೈಲ್ ಸೇರಿ ಎಲ್ಲಾ ಆರೋಪಿಗಳು ದೋಷಿ ಎಂಬುದಾಗಿ ತೀರ್ಪು ನೀಡಿದೆ. ಶಿಕ್ಷೆಯ ಪ್ರಮಾಣವನ್ನು ನಾಳೆ ಪ್ರಕಟಿಸಲಿದೆ.