Friday, 22nd November 2024

CM Siddaramaiah: ಕುಮಾರಸ್ವಾಮಿ ಹಿಂದೆ ಚುನಾವಣೆಯಲ್ಲಿ ಸೋತಾಗ ಅಭಿಮನ್ಯು ಆಗಿರಲಿಲ್ಲವೇ ? ಸಿದ್ದರಾಮಯ್ಯ ವ್ಯಂಗ್ಯ

BPL Cards

ಬೆಂಗಳೂರು: ʼʼಕೇಂದ್ರ ಸಚಿವ ಕುಮಾರಸ್ವಾಮಿ (HD Kumaraswamy) ಅವರು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಮಂಡ್ಯದಲ್ಲಿ ಹಾಗೂ ನಂತರ ರಾಮನಗರದಲ್ಲಿ ಸೋತಿದ್ದರು. ಆಗ ಅವರು ಅಭಿಮನ್ಯು ಆಗಿರಲಿಲ್ಲವೇ?ʼʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಪ್ರಶ್ನಿಸಿದ್ದಾರೆ.

ನಿಖಿಲ್ ಕುಮಾರಸ್ವಾಮಿ ಉಪಚುನಾವಣೆಯಲ್ಲಿ ಅಭಿಮನ್ಯುವಲ್ಲ, ಅರ್ಜುನನಾಗಿ ಹೊರಹೊಮ್ಮಲಿದ್ದಾರೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಹೇಳಿರುವ ಬಗ್ಗೆ ಸಿಎಂ ಭಾನುವಾರ ಪ್ರತಿಕ್ರಿಯೆ ನೀಡಿದ್ದಾರೆ. ಉಪಚುನಾವಣೆಗಳ ಸಿದ್ದತೆಗಳ ಬಗ್ಗೆ ಕಾರ್ಯಪ್ರವೃತ್ತರಾಗುವಂತೆ ಮನವಿ ಮಾಡಲು ಸಚಿವರು, ಸಂಸದರು, ಶಾಸಕರೊಂದಿಗೆ ನಡೆಸಿದ ಸಭೆಯಲ್ಲಿ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.

ಕಾಂಗ್ರೆಸ್‌ ವಿರುದ್ಧ ಎಚ್‌ಡಿಕೆ ವಾಗ್ದಾಳಿ

ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ವಿರೋಧ ಪಕ್ಷಗಳ ಮೇಲೆ ದಬ್ಬಾಳಿಕೆ ನಡೆಸುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶನಿವಾರ ಆರೋಪಿಸಿದ್ದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ʼʼಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸಿದ್ದಾರೆ. ಆ ಸಂದರ್ಭದಲ್ಲಿ ಕ್ಷೇತ್ರದ ಕಾರ್ಯಕರ್ತರು, ಸಾರ್ವಜನಿಕರು ಸೇರಿದ್ದರು. ಎನ್‌ಡಿಎ ಮೈತ್ರಿಕೂಟದ ನಾಯಕರು ದೊಡ್ಡ ಪ್ರಮಾಣದಲ್ಲಿ ಸೇರಿದ್ದರು. ಇದು ಐತಿಹಾಸಿಕ ಸಭೆ ಆಗಿತ್ತು. ಇದು ಕಾಂಗ್ರೆಸ್ ನಾಯಕರ ಕಣ್ಣು ಕುಕ್ಕಿದೆʼʼ ಎಂದು ಅವರು ದೂರಿದ್ದರು.

ʼʼಈ ಸರ್ಕಾರ ದಬ್ಬಾಳಿಕೆ ನಡೆಸುತ್ತಿದೆ. ಜನ ಕಾರ್ಯಕ್ರಮಕ್ಕೆ ಬರಬಾರದಾ? ಶುಕ್ರವಾರ ನಾಮಪತ್ರ ಸಲ್ಲಿಕೆಯ ನಂತರ ಒಂದು ನೊಟೀಸ್ ಕೊಟ್ಟಿದ್ದಾರೆ. ಬರುವವರ ಮೇಲೆಲ್ಲ ಕೇಸ್ ಹಾಕಿಕೊಂಡು ಚುನಾವಣೆ ನಡೆಸಲು ಹೊರಟಿದ್ದಾರೆ ಇವರು. ಶುಕ್ರವಾರ ನಮ್ಮ ಪಕ್ಷದ ಅಧ್ಯಕ್ಷರಿಗೆ ನೊಟೀಸ್ ಕೊಟ್ಟಿದ್ದಾರೆ. ಇದಕ್ಕೆಲ್ಲಾ ನಾವು ಹೆದರುವ ಪ್ರಶ್ನೆ ಇಲ್ಲ. ಜನರ ಬಳಿ ನಾವು ಮತ ಕೇಳುತ್ತೇವೆ. ಅವರೇ ತೀರ್ಪು ಕೊಡುತ್ತಾರೆʼʼ ಎಂದು ಕೇಂದ್ರ ಸಚಿವರು ಗುಡುಗಿದ್ದರು.

ವಾಹನಗಳಿಗೆ ನೊಟೀಸ್

ʼʼಸರ್ಕಾರ ಈ ಕಾರ್ಯಕ್ರಮಕ್ಕೆ ಬಂದ ವಾಹನಗಳಿಗೆ ನೊಟೀಸ್ ನೀಡಿದೆ. ಸಿಎಂ, ಡಿಸಿಎಂ ಆದಿಯಾಗಿ ಅವರ ಕಡೆಯಿಂದ ಎಲ್ಲಾರೂ ಚನ್ನಪಟ್ಟಣಕ್ಕೆ ಹೀಗಿದ್ದರಲ್ಲವೇ? ಹಾಗಿದ್ದರೆ ಅವರ ಸಭೆಗಳಿಗೆ ಬಂದ ಜನರಿಗೆ ವಾಹನದ ವ್ಯವಸ್ಥೆ ಮಾಡೇ ಇರಲಿಲ್ಲವೇ?ʼʼ ಎಂದು ಎಚ್‌.ಡಿ. ಕುಮಾರಸ್ವಾಮಿ ಖಾರವಾಗಿ ಪ್ರಶ್ನಿಸಿದ್ದರು.

ಅಧಿಕಾರ ದುರುಪಯೋಗ

ʼʼಶನಿವಾರ ನಮ್ಮ ಕಾರ್ಯಕ್ರಮಕ್ಕೆ ಬಂದವರ ವಿಡಿಯೋ ಮಾಡಿಕೊಂಡು, ಅಧಿಕಾರಿಗಳಿಗೆ ಹೇಳಿ ಕೇಸ್ ಹಾಕಿಸಿ ಯಾವ ಚುನಾವಣೆ ನಡೆಸಲು ಹೋಗ್ತಿದ್ದಾರೆ ಇವರು? ನಮ್ಮ ಪಕ್ಷದ ಅಧ್ಯಕ್ಷರಿಗೆ ಇದರ ಬಗ್ಗೆ ಒಂದು ನೊಟೀಸ್ ಕೊಟ್ಟಿದ್ದಾರೆ. ದಬ್ಬಾಳಿಕೆ ಮೂಲಕ ಇವರು ಚುನಾವಣೆ ನಡೆಸಲು ಹೋಗ್ತಿದ್ದಾರೆ. ಅಧಿಕಾರ ದುರುಪಯೋಗ ಮಾಡುತ್ತಿದೆ ಸರ್ಕಾರ. ಇದೆಲ್ಲವನ್ನೂ ನಾವು ಮೊದಲೇ ನಿರೀಕ್ಷೆ ಮಾಡಿದ್ದೆವುʼʼ ಎಂದು ಅವರು ಕಿಡಿಕಾರಿದ್ದರು.

ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಸೇರಿದಂತೆ ಮೂರೂ ಕ್ಷೇತ್ರಗಳಲ್ಲೂ ತಮ್ಮ ಅಭ್ಯರ್ಥಿಗಳು ದೊಡ್ಡ ಅಂತರದಲ್ಲಿ ಗೆಲುವು ಸಾಧಿಸುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದರು.

ಈ ಸುದ್ದಿಯನ್ನೂ ಓದಿ | BY Vijayendra: 3 ಕ್ಷೇತ್ರಗಳ ಉಪ ಚುನಾವಣೆಗೆ ರಾಜ್ಯ ರಾಜಕಾರಣದ ದಿಕ್ಕು ಬದಲಿಸುವ ಶಕ್ತಿಯಿದೆ ಎಂದ ವಿಜಯೇಂದ್ರ