Friday, 22nd November 2024

Channapatna By Election: ಮೈಸೂರು ರಾಜಮನೆತನಕ್ಕೆ ಕಾಂಗ್ರೆಸ್ ಸರ್ಕಾರದಿಂದ ಕಿರುಕುಳ; ಕುಮಾರಸ್ವಾಮಿ ಆರೋಪ

Channapatna By Election

ಚನ್ನಪಟ್ಟಣ: ಮೈಸೂರು ರಾಜ ಮನೆತನದ ಬಗ್ಗೆ ಈ ಸರ್ಕಾರ ದ್ವೇಷ ಸಾಧನೆ ಮಾಡುತ್ತಿದೆ. ರಾಜ್ಯದ ಅಭಿವೃದ್ಧಿಗೆ ಮಹೋನ್ನತ ಕೊಡುಗೆ ನೀಡಿರುವ ಆ ಕುಟುಂಬಕ್ಕೆ ಕಿರುಕುಳ ನೀಡುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಆರೋಪಿಸಿದರು. ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ (Channapatna By Election) ಕೂಡ್ಲೂರು ಗ್ರಾಮದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿ, ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ.

ಚಾಮುಂಡೇಶ್ವರಿ ತಾಯಿ ಅರಸು ಮನೆತನದ ದೇವತೆ. ಅವರ ಕುಟುಂಬದ ಆರಾಧ್ಯದೈವ. ಅವರ ಮನೆತನದಿಂದ ದೇವರನ್ನು ದೂರ ಮಾಡುವ ಕೇಡಿನ ಕೆಲಸ ಮಾಡುತ್ತಿದೆ ಈ ಸರ್ಕಾರ ಎಂದು ಸಚಿವರು ದೂರಿದರು. ಚಾಮುಂಡೇಶ್ವರಿ ಪುಣ್ಯಕ್ಷೇತ್ರ ಅರಸರ ಉಸ್ತುವಾರಿಯಲ್ಲಿಯೇ ಇತ್ತು. ಆ ಕ್ಷೇತ್ರದ ಅಭಿವೃದ್ಧಿಗೆ ಒಡೆಯರ್ ಸಾಕಷ್ಟು ಕೆಲಸ ಮಾಡಿದ್ದಾರೆ. ರಾಜ್ಯದ ಅಭಿವೃದ್ಧಿಗೆ, ನೀರಾವರಿ, ಶಿಕ್ಷಣ, ಕೈಗಾರಿಕಾಭಿವೃದ್ಧಿಗೆ ಮಹಾರಾಜರು ಅನನ್ಯ ಕೊಡುಗೆ ನೀಡಿದ್ದಾರೆ. ಅಂತಹ ಕುಟುಂಬಕ್ಕೆ ಸಿದ್ದರಾಮಯ್ಯ ಸರ್ಕಾರ ಇನ್ನಿಲ್ಲದ ಕಿರುಕುಳ ಕೊಡುತ್ತಿದೆ ಎಂದು ಕೇಂದ್ರ ಸಚಿವರು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿಯನ್ನೂ ಓದಿ | Channapatna By Election: ಅಭಿವೃದ್ಧಿ ವಿಚಾರ ಇಟ್ಟುಕೊಂಡು ಪ್ರಚಾರ ಮಾಡುತ್ತಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

ಚಾಮುಂಡೇಶ್ವರಿ ಕ್ಷೇತ್ರದ ಉಸ್ತುವಾರಿಯನ್ನು ರಾಜಮನೆತನ ಬಹಳ ಉತ್ತಮವಾಗಿ ನಿರ್ವಹಣೆ ಮಾಡುತ್ತಿತ್ತು. ತಾಯಿಯ ಸನ್ನಿಧಾನದಲ್ಲಿ ನಡೆಯುತ್ತಿದ್ದ ಕೈಂಕರ್ಯಗಳನ್ನು ಶ್ರದ್ಧಾ ಭಕ್ತಿಗಳಿಂದ ನೋಡಿಕೊಳ್ಳುತ್ತಿತ್ತು. ಅಂತಹ ಕುಟುಂಬಕ್ಕೆ ದಕ್ಕಿದ್ದ ದೇವರ ಸೇವೆ ಅವಕಾಶವನ್ನು ಸಿದ್ದರಾಮಯ್ಯ ಸರ್ಕಾರ ಕಿತ್ತುಕೊಂಡಿದೆ ಎಂದು ಅವರು ಆರೋಪಿಸಿದರು. ಮೈಸೂರು ರಾಜ ವಂಶಸ್ಥರು ಹಾಗೂ ಮೈಸೂರು-ಕೊಡಗು ಕ್ಷೇತ್ರದ ಲೋಕಸಭೆ ಸದಸ್ಯ ಯದುವೀರ್ ಒಡೆಯರ್ ಅವರು ಕೂಡ ಉಪಸ್ಥಿತರಿದ್ದರು.

ಈ ಸುದ್ದಿಯನ್ನೂ ಓದಿ | R Ashok: ಕಾಂಗ್ರೆಸ್‌ ಸರ್ಕಾರದ ಕುಮ್ಮಕ್ಕಿನಿಂದ ರಾಜ್ಯದಲ್ಲೀಗ ಲ್ಯಾಂಡ್‌ ಜಿಹಾದ್‌; ಆರ್. ಅಶೋಕ್‌ ಆರೋಪ

ದೇವರ ಹೊಸಹಳ್ಳಿ ಗ್ರಾಮದಲ್ಲಿ ಶ್ರೀ ಸಂಜೀವರಾಯ ಸ್ವಾಮಿ ದೇವಾಲಯದಲ್ಲಿ ಹಾಗೂ ಕೂಡ್ಲೂರು ಗ್ರಾಮದಲ್ಲಿ ಶ್ರೀ ಶ್ರೀರಾಮ ದೇವರ ದೇವಾಲಯದಲ್ಲಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪೂಜೆ ಸಲ್ಲಿಸಿದರು.