Wednesday, 30th October 2024

Actor Darshan: ಜಾಮೀನು ನೀಡಿದ ಹೈಕೋರ್ಟ್‌ ದರ್ಶನ್‌ಗೆ ವಿಧಿಸಿದ ಶರತ್ತುಗಳು ಏನೇನು?

darshan bellari jail 2

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ (Renuka Swamy Murder Case) ಆರೋಪದ ಮೇಲೆ ಕಳೆದ ಸುಮಾರು ಐದು ತಿಂಗಳಿಂದ ಜೈಲಿನಲ್ಲಿರುವ ನಟ ದರ್ಶನ್​ಗೆ (Actor Darshan) ಕಡೆಗೂ ಜಾಮೀನು (Bail) ದೊರೆತಿದೆ. ದರ್ಶನ್​ಗೆ ಕರ್ನಾಟಕ ಹೈಕೋರ್ಟ್ (Karnataka High Court) ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು, ಇದಕ್ಕೆ ಹಲವು ಶರತ್ತುಗಳನ್ನು ವಿಧಿಸಿದೆ.

ಹೈಕೋರ್ಟ್‌ ದರ್ಶನ್‌ ಜಾಮೀನಿಗೆ ವಿಧಿಸಿರುವ ಶರತ್ತುಗಳು ಹೀಗಿವೆ:

1) ದರ್ಶನ್ ಆರೋಗ್ಯ ಸಮಸ್ಯೆಯನ್ನು ಪರಿಗಣನೆಗೆ ತೆಗೆದುಕೊಂಡು ಆರು ವಾರಗಳ ಅವಧಿಯ ಮಧ್ಯಂತರ ಜಾಮೀನು ನೀಡಲಾಗಿದೆ.

2) ಚಿಕಿತ್ಸೆ ಕಾರಣಕ್ಕಾಗಿ ಜಾಮೀನು ನೀಡಲಾಗಿದೆ. ದರ್ಶನ್ ಇಚ್ಛಿಸಿದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದಾಗಿದೆ.

3) ಒಂದು ವಾರದ ಒಳಗಾಗಿ ನ್ಯಾಯಾಲಯಕ್ಕೆ ಚಿಕಿತ್ಸೆಯ ವಿವರಗಳನ್ನು ಸಲ್ಲಿಸಬೇಕಿದೆ.

4) ಎಸ್​ಪಿಪಿ ಮನವಿ ಮೇರೆಗೆ ಪಾಸ್​ಪೋರ್ಟ್​ ವಶಕ್ಕೆ ನೀಡುವಂತೆ ಸೂಚಿಸಲಾಗಿದೆ. ದೇಶ ಬಿಟ್ಟು ಹೋಗುವಂತಿಲ್ಲ.

5) ಸಾಕ್ಷಿಗಳನ್ನು ತಿರುಚುವ, ತಿದ್ದುವ, ಪ್ರಭಾವ ಬೀರುವ ಯತ್ನ ಮಾಡುವಂತಿಲ್ಲ.

ಈ ಹಿಂದೆ ವಿಚಾರಣಾ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ದರ್ಶನ್​ರ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು. ಬಳಿಕ ದರ್ಶನ್ ಪರ ವಕೀಲರಾದ ಸಿವಿ ನಾಗೇಶ್ ಹೈಕೋರ್ಟ್​ನಲ್ಲಿ ಅರ್ಜಿ ಹಾಕಿದ್ದರು. ಹೈಕೋರ್ಟ್​ನಲ್ಲಿ ದರ್ಶನ್ ಆರೋಗ್ಯ ಸಮಸ್ಯೆಯನ್ನು ಪ್ರಮುಖ ಕಾರಣವಾಗಿ ಪರಿಗಣಿಸಿ ಜಾಮೀನು ನೀಡುವಂತೆ ಮನವಿ ಮಾಡಲಾಗಿತ್ತು. ದರ್ಶನ್​ಗೆ ತೀವ್ರ ಬೆನ್ನುನೋವಿನ ಸಮಸ್ಯೆ ಇದ್ದು, ಅವರಿಗೆ ಶಸ್ತ್ರಚಿಕಿತ್ಸೆಯ ಅವಶ್ಯಕತೆ ಇದೆ. ಒಂದೊಮ್ಮೆ ಚಿಕಿತ್ಸೆ ತಡವಾದರೆ ಅವರು ಪಾರ್ಶ್ವವಾಯುವಿಗೆ ಈಡಾಗುವ ಆತಂಕ ಇದೆ ಎಂದು ವೈದ್ಯರು ನೀಡಿದ್ದ ವರದಿಯನ್ನು ದರ್ಶನ್ ಪರ ವಕೀಲರು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಎರಡೂ ಕಡೆಯ ವಾದ ಆಲಿಸಿದ ನ್ಯಾಯಮೂರ್ತಿ ವಿಶ್ವೇಶ್ವರ ಭಟ್ ಅವರು, ‘ವೈದ್ಯಕೀಯ ಚಿಕಿತ್ಸೆ ವಿಚಾರಣಾಧೀನ ಕೈದಿಯ ಹಕ್ಕು’ ಎಂದು ಹೇಳಿ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದಾರೆ.

ಇದನ್ನೂ ಓದಿ: Darshan Thoogudeepa Bail : ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್‌ಗೆ ಷರತ್ತುಬದ್ಧ ಜಾಮೀನು