ಚೆನ್ನೈ: ತಮಿಳುನಾಡು, ಪುದುಚೆರಿಯಲ್ಲಿ ಇಂದು ಸಂಜೆ ಕರಾವಳಿ ಪ್ರದೇಶಗಳಿಗೆ ನಿವಾರ್ ಚಂಡಮಾರುತ ಅಪ್ಪಳಿಸಲಿದೆ. ಇದರ ಪರಿಣಾಮ ನೆರೆಯ ರಾಜ್ಯಗಳಾದ ಕರ್ನಾಟಕ, ಕೇರಳ, ಆಂಧ್ರ ಪ್ರದೇಶದ ಮೇಲೂ ಉಂಟಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತಮಿಳುನಾಡಿನಲ್ಲಿ ಮಳೆಯ ಅಬ್ಬರ ಶುರುವಾಗಿದೆ. ನಿವಾರ್ ಚಂಡಮಾರುತದ ಹಿನ್ನೆಲೆಯಲ್ಲಿ ಚೆನ್ನೈಗೆ ತೆರಳುವ 24 ವಿಮಾನ ಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿ, ಹೈಅಲರ್ಟ್ ಘೋಷಿಸಲಾಗಿದೆ.
ತಮಿಳುನಾಡಿನಲ್ಲಿ 24 ಸಾವಿರಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಶಿಫ್ಟ್ ಮಾಡಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯು ಭಾರ ಕುಸಿತ ಉಂಟಾಗಿರುವುದರಿಂದ ನಿವಾರ್ ಚಂಡಮಾರುತ ಅಪ್ಪಳಿಸಲಿದೆ. ಗಂಟೆಗೆ 150 ಕಿಮೀ ವೇಗದಲ್ಲಿ ನಿವಾರ್ ಚಂಡ ಮಾರುತ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ಇದೆ.
ಭೀಕರ ನಿವಾರ್ ಚಂಡಮಾರುತದ ಪರಿಣಾಮದಿಂದ ತಮಿಳುನಾಡಿನಲ್ಲಿ ಇಂದು ಸರ್ಕಾರಿ ರಜೆ ಘೋಷಿಸಲಾಗಿದೆ. ತಮಿಳುನಾಡು, ಕರ್ನಾಟಕ, ಆಂಧ್ರಪ್ರದೇಶದಲ್ಲಿ ನಿವಾರ್ ಚಂಡಮಾರುತದ ಪ್ರಭಾವ ಹೆಚ್ಚಾಗಿರಲಿದೆ ಎನ್ನಲಾಗಿದೆ.