ಶಿಗ್ಗಾಂವಿ: ಇದು ಕೇವಲ ಉಪಚುನಾವಣೆಯಲ್ಲ. ನನಗೆ, ನನ್ನ ಸರ್ಕಾರಕ್ಕೆ ಹೆಚ್ಚಿನ ಶಕ್ತಿ ನೀಡುವ ಮಹತ್ವದ ಚುನಾವಣೆ. ಆದ್ದರಿಂದ ಕಾಂಗ್ರೆಸ್ ಅಭ್ಯರ್ಥಿ ಪೈಲ್ವಾನ್ ಪಠಾಣ್ ಅವರನ್ನು ಗೆಲ್ಲಿಸಿ ನನಗೆ ಶಕ್ತಿ ನೀಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ. ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ (Shiggaon By Election) ಹುರಳಿಕುಪ್ಪಿ ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.
ನಾವು ನುಡಿದಂತೆ ನಡೆದಿದ್ದೇವೆ. ಸರ್ಕಾರ ಬಂದ 8 ತಿಂಗಳಲ್ಲೇ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ. ಇಡೀ ರಾಜ್ಯದ ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡುತ್ತಿದ್ದೇವೆ. ಇದಕ್ಕಾಗಿ ಗ್ಯಾರಂಟಿ ಯೋಜನೆಗಳಿಗಾಗಿ 56 ಸಾವಿರ ಕೋಟಿ ರೂಪಾಯಿಯನ್ನು ನೇರವಾಗಿ ರಾಜ್ಯದ ಜನರ ಖಾತೆಗೆ ಹಾಕಿದ್ದೇವೆ ಎಂದು ತಿಳಿಸಿದರು.
ಈ ಸುದ್ದಿಯನ್ನೂ ಓದಿ | DK Shivakumar: ವಕ್ಫ್ ವಿಚಾರವಾಗಿ ಬಿಜೆಪಿಯವರು ಪ್ರತಿಭಟನೆ ಮಾಡುತ್ತಿಲ್ಲ, ರಾಜಕೀಯ ಮಾಡುತ್ತಿದ್ದಾರೆ; ಡಿ.ಕೆ. ಶಿವಕುಮಾರ್
ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿ
ಬಸರಾಜ ಬೊಮ್ಮಾಯಿ ಅವರು ನೀರಾವರಿ ಸಚಿವರಾಗಿ, ಗೃಹ ಸಚಿವರಾಗಿ, ಮುಖ್ಯಮಂತ್ರಿಯಾಗಿ ಕ್ಷೇತ್ರಕ್ಕೆ ಏನು ನೀಡಿದ್ದಾರೆ ಹುಡುಕಿ ಹೇಳಿ. ಕ್ಷೇತ್ರಕ್ಕೆ ಏನೂ ಕೆಲಸ ಮಾಡದ ಬೊಮ್ಮಾಯಿ ಅವರ ಪುತ್ರನಿಗೆ ಮತ ಹಾಕುವುದರಲ್ಲಿ ಅರ್ಥವೇ ಇಲ್ಲ. 40 ವರ್ಷದಲ್ಲಿ ಸಣ್ಣ ಕಪ್ಪು ಚುಕ್ಕೆ ಕೂಡ ಇಲ್ಲದ ನನ್ನನ್ನು ಕೇವಲ ಷಡ್ಯಂತ್ರದಿಂದ ಕೆಳಗಿಳಿಸಲು ಪಿತೂರಿ ಮಾಡುತ್ತಿದ್ದಾರೆ. ಇದಕ್ಕೆ ನೀವು ಅವಕಾಶ ನೀಡ್ತೀರಾ? ಬಿಜೆಪಿ ಷಡ್ಯಂತ್ರ ಸೋಲಿಸಬೇಕೆಂದರೆ ಶಿಗ್ಗಾಂವಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿ ಎಂದು ಹೇಳಿದರು.
ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡ್ತಾರೆ ಎಂದು ವಿಜಯೇಂದ್ರ, ಆರ್. ಅಶೋಕ, ಯತ್ನಾಳ್ ಎಲ್ಲರೂ ಬೊಬ್ಬೆ ಹೊಡೆಯುತ್ತಿದ್ದಾರೆ. ರಾಜ್ಯದ ಜನರ ನೈತಿಕ ಶಕ್ತಿ ನನ್ನ ಜತೆಗೆ ಇರುವವರೆಗೂ ನಾನು ಬಿಜೆಪಿ ಪರಿವಾರದ ಷಡ್ಯಂತ್ರಕ್ಕೆ ಹೆದರುವ, ಬೆದರುವ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರ ಐದಕ್ಕೆ ಐದೂ ವರ್ಷ ಪೂರೈಸುವುದು ಶತಸಿದ್ದ ಎಂದು ಸಿಎಂ ತಿಳಿಸಿದರು.
ನೋಟಿಸ್ ವಾಪಸ್ ಪಡೆಯಲು ಸ್ಪಷ್ಟ ನಿರ್ದೇಶನ
ವಕ್ಫ್ ಆಸ್ತಿ ಸರ್ಕಾರದ ಆಸ್ತಿ ಅಲ್ಲ. ಅದು ವಕ್ಫ್ ಬೋರ್ಡ್‌ಗೆ ಸೇರಿದ ಆಸ್ತಿ. ಈ ಆಸ್ತಿ ಒತ್ತುವರಿ ಮಾಡಿದವರನ್ನು ತೆರವುಗೊಳಿಸಲು ಯಡಿಯೂರಪ್ಪ, ಬೊಮ್ಮಾಯಿ, ಕುಮಾರಸ್ವಾಮಿ ಅವಧಿಯಲ್ಲೂ ನೋಟಿಸ್ ನೀಡಿದ್ದಾರೆ. ಒತ್ತುವರಿ ತೆರವುಗೊಳಿಸಿದ್ದಾರೆ. ಆದರೆ ನಮ್ಮ ಸರ್ಕಾರದಿಂದ ಮಾತ್ರ ಯಾವುದೇ ರೈತರಿಗೂ ತೊಂದರೆ ಆಗುವುದಿಲ್ಲ ಎಂದು ಭರವಸೆ ನೀಡಿ, ನೋಟಿಸ್ ವಾಪಾಸ್ ಪಡೆಯಲು ಸ್ಪಷ್ಟ ನಿರ್ದೇಶನ ನೀಡಿದ್ದೇನೆ ಎಂದು ಹೇಳಿದರು.
ಈ ಸುದ್ದಿಯನ್ನೂ ಓದಿ | Karnataka Rain: ನವೆಂಬರ್‌ನಲ್ಲಿ ಆರ್ಭಟಿಸಲಿದ್ದಾನೆ ವರುಣ; ರಾಜ್ಯದಲ್ಲಿ ವಾಡಿಕೆಗಿಂತ ಅಧಿಕ ಮಳೆ ಮುನ್ಸೂಚನೆ
ಅಜ್ಜಂಪೀರ್ ಖಾದ್ರಿ ಅವರಿಗೆ ಒಳ್ಳೆ ಸ್ಥಾನ ಕೊಡ್ತೇವೆ. ಶಿಗ್ಗಾಂವಿನಲ್ಲಿ ಪಠಾಣ್ ಅವರನ್ನು ಗೆಲ್ಲಿಸಿ ನನಗೆ ಶಕ್ತಿ ನೀಡಿ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದರು.