ಬೆಂಗಳೂರು: ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ (HD Kumaraswamy) ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಕರ್ನಾಟಕ ಹೈಕೋರ್ಟ್ (Karnataka High Court) ಆದೇಶ ನೀಡಿದೆ. ಲೋಕಾಯುಕ್ತ (Lokayukta) ಎಡಿಜಿಪಿ ಚಂದ್ರಶೇಖರ್ ದೂರಿನ ಮೇರೆಗೆ ದಾಖಲಿಸಿಕೊಳ್ಳಲಾದ ಪ್ರಕರಣದಲ್ಲಿ ಈ ಆದೇಶ ಹೊರಡಿಸಿದೆ.
ಬೆಂಗಳೂರಿನ ಸಂಜಯ್‌ನಗರ ಪೊಲೀಸ್ ಠಾಣೆಯಲ್ಲಿ ಎಚ್‌ಡಿಕೆ ವಿರುದ್ಧ ಎಫ್ಐಆರ್ ದಾಖಲಾಗಿತ್ತು.ಈ ಪ್ರಕರಣ ರದ್ದು ಕೋರಿ ಎಚ್.ಡಿ.ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ (Nikhil Kumaraswamy), ಸುರೇಶ್ ಬಾಬು ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಈ ತೀರ್ಪು ನೀಡಿದೆ.
ಪುತ್ರನ ಉಪಚುನಾವಣೆ ಸ್ಪರ್ಧೆಯ ಒತ್ತಡದ ಜೊತೆಗೆ ಈ ಎಫ್ಐಆರ್ ಟೆನ್ಷನ್‌ನಲ್ಲಿದ್ದ ಕುಮಾರಸ್ವಾಮಿಗೆ ಈಗ ಇದರಿಂದ ಮಧ್ಯಂತರ ರಿಲೀಫ್ ಸಿಕ್ಕಿದೆ. ಪೊಲೀಸರನ್ನು ಕಳಿಸಿ ತಮ್ಮನ್ನು ಬಂಧಿಸಲು ಯತ್ನಿಸುತ್ತಿದ್ದಾರೆ. 10 ವರ್ಷದ ಹಿಂದಿನ ನಿರೀಕ್ಷಣಾ ಜಾಮೀನು ರದ್ದುಪಡಿಸಲು ಯತ್ನಿಸುತ್ತಿದ್ದಾರೆ ಎಂದು ಕುಮಾರಸ್ವಾಮಿ ಪರ ಹಿರಿಯ ವಕೀಲ ಹಷ್ಮತ್ ಪಾಷಾ ವಾದ ಮಂಡಿಸಿದ್ದರು.
ಈ ವಾದ ಆಲಿಸಿದ ಹೈಕೋರ್ಟ್ ಏಕಸದಸ್ಯ ಪೀಠ, ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶಿಸಿದ. ಅಲ್ಲದೇ ಎಫ್ಐಆರ್ ಆಧರಿಸಿ ಹಳೆಯ ನಿರೀಕ್ಷಣಾ ಜಾಮೀನು ರದ್ದುಪಡಿಸುವಂತಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ನಿರ್ಬಂಧಿಸಿದೆ. ಬಲವಂತದ ಕ್ರಮ ಕೈಗೊಳ್ಳುವುದಿಲ್ಲವೆಂಬ SPP ಹೇಳಿಕೆಯನ್ನೂ ಸಹ ಹೈಕೋರ್ಟ್ ದಾಖಲಿಸಿಕೊಂಡಿದೆ.
ಆಂಧ್ರಪ್ರದೇಶ ಮೂಲದ ಜಂತಕಲ್ ಮೈನಿಂಗ್ ಕಂಪನಿಯ ಸಹವರ್ತಿ ಸಂಸ್ಥೆಯಾಗಿರುವ ಶ್ರೀ ಸಾಯಿ ವೆಂಕಟೇಶ್ವರ್ ಮಿನರಲ್ಸ್ ಕಂಪನಿಗೆ ಆಗ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಅವರು ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ಎನ್‌ಇಬಿ ರೇಂಜ್‌ನಲ್ಲಿ 550 ಎಕರೆ ಪ್ರದೇಶದಲ್ಲಿ ಗಣಿಗಾರಿಕೆ ಲೀಸ್ ನೀಡಲು ಪರವಾನಗಿಗೆ ಅನುಮೋದನೆ ಕಡತಕ್ಕೆ ಸಹಿ ಹಾಕಿದ್ದರು. 2007ರ ಅಕ್ಟೋಬರ್ 5ರಂದು ಸಹಿ ಹಾಕಲಾಗಿತ್ತು. ಈ ವೇಳೆ ಸಲ್ಲಿಕೆಯಾಗಿದ್ದ 29 ಅರ್ಜಿಗಳ ಪೈಕಿ ಕೊನೆಯದಾಗಿ ಸಲ್ಲಿಕೆಯಾಗಿದ್ದ ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಅರ್ಜಿಯನ್ನು ಸರ್ಕಾರ ನಿಯಮಾವಳಿ ಉಲ್ಲಂಘಿಸಿ ಅನುಮೋದಿಸಿ ಮಂಜೂರು ಮಾಡಲಾಗಿತ್ತು ಎಂಬುದು ಕುಮಾರಸ್ವಾಮಿ ಅವರ ಮೇಲಿರುವ ಆರೋಪವಾಗಿದೆ.
ಈ ಪ್ರಕರಣದಲ್ಲಿ ಹೆಚ್ಚುವರಿ ಸಾಕ್ಷ್ಯಾಧಾರಗಳು ದೊರೆತಿದ್ದರಿಂದ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಎಸ್‌ಐಟಿ ಮುಖ್ಯಸ್ಥರಾಗಿರುವ ಎಂ ಚಂದ್ರಶೇಖರ್ ಮನವಿ ಮಾಡಿದ್ದರು.
ಇದರಿಂದ ಕೆರಳಿದ ಕುಮಾರಸ್ವಾಮಿ ಅವರು ಸೆಪ್ಟೆಂಬರ್ 28 ಮತ್ತು 29ರಂದು ಮಾಧ್ಯಮಗೋಷ್ಠಿ ನಡೆಸಿ ತನ್ನ ವಿರುದ್ಧ ಸುಳ್ಳು ಮತ್ತು ದುರುದ್ದೇಶಪೂರಿತ ಆರೋಪ ಮಾಡಿ, ಬೆದರಿಕೆ ಹಾಕಿದ್ದಾರೆ. ಕರ್ನಾಟಕ ಕೇಡರ್‌ನಿಂದ ಬೇರೆ ರಾಜ್ಯಕ್ಕೆ ಕಳುಹಿಸುವುದಾಗಿ ಮೌಖಿಕವಾಗಿ ಬೆದರಿಕೆ ಹಾಕಿದ್ದು, ತಮ್ಮ ಕುಟುಂಬದ ವಿರುದ್ಧ ಸುಳ್ಳು ಆರೋಪ ಮಾಡಿ, ತೊಂದರೆ ಕೊಡುವುದಾಗಿ ಬೆದರಿಕೆ ಹಾಕಿದ್ದಾರೆ. ತಾನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ನಕಲಿ ವೈದ್ಯಕೀಯ ದಾಖಲೆ ಪಡೆದು ಕರ್ನಾಟಕ ಕೇಡರ್‌ಗೆ ಸೇರ್ಪಡೆಯಾಗಿರುವುದಾಗಿ ಆರೋಪಿಸಿದ್ದಾರೆ. ಅಲ್ಲದೇ, ತಾನು ಲಂಚ ಸ್ವೀಕರಿಸುತ್ತಿರುವುದಾಗಿ ಸುಳ್ಳು ಆರೋಪ ಮಾಡಿದ್ದಾರೆ ಎಂದು ಚಂದ್ರಶೇಖರ್ ದೂರಿನಲ್ಲಿ ತಿಳಿಸಿದ್ದರು.
ಸೆಪ್ಟೆಂಬರ್ 29ರಂದು ನಿಖಿಲ್ ಕುಮಾರಸ್ವಾಮಿ ಅವರು ತಮ್ಮ ವಿರುದ್ಧ ಮಾಧ್ಯಮ ಗೋಷ್ಠಿಯಲ್ಲಿ ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ಆನಂತರ ಜೆಡಿಎಸ್ ಶಾಸಕ ಸುರೇಶ್ ಬಾಬು ಅವರು ತನ್ನ ವಿರುದ್ಧ ಸುಳ್ಳು ಆರೋಪ ಮಾಡಿ ಕ್ರಮಕ್ಕೆ ಆಗ್ರಹಿಸಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದು, ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವ ಮೂಲಕ ಬೆದರಿಕೆ ಹಾಕಿದ್ದಾರೆ ಎಂದು ಚಂದ್ರಶೇಖರ್ ಅವರ ದೂರಿನಲ್ಲಿ ವಿವರಿಸಿದ್ದರು.
ಇದನ್ನೂ ಓದಿ: HD Kumaraswamy: ಜೀವ ಬೆದರಿಕೆ ಆರೋಪ; FIR ರದ್ದು ಕೋರಿ ಹೈಕೋರ್ಟ್‌ಗೆ ಎಚ್‌ಡಿಕೆ, ನಿಖಿಲ್ ಕುಮಾರಸ್ವಾಮಿ ಅರ್ಜಿ