Monday, 25th November 2024

Prajwal Revanna Case: ಪ್ರಜ್ವಲ್‌ ರೇವಣ್ಣಗೆ ಜೈಲೇ ಗತಿ; ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

Prajwal Revanna Case

ನವದೆಹಲಿ: ಮಹಿಳೆಯ ಮೇಲೆ ಅತ್ಯಾಚಾರ ಆರೋಪದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ (Prajwal Revanna Case) ಮತ್ತೆ ಹಿನ್ನಡೆಯಾಗಿದೆ. ಜಾಮೀನು ಕೋರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ ವಜಾಗೊಳಿಸಿದೆ.

ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ್ದ ಹೈಕೋರ್ಟ್ ಆದೇಶ ಪ್ರಶ್ನಿಸಿ ಪ್ರಜ್ವಲ್ ರೇವಣ್ಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ನ್ಯಾ. ದೇಲಾ ಎಂ. ತ್ರಿವೇದಿ ಹಾಗೂ ನ್ಯಾ. ಸತೀಶ್ ಚಂದ್ರ ಶರ್ಮಾ ಅವರಿದ್ದ ಪೀಠವು, ಪ್ರಜ್ವಲ್ ರೇವಣ್ಣ ಅತ್ಯಂತ ಪ್ರಭಾವಿ ಎಂಬುದನ್ನು ಪರಿಗಣಿಸಿ ಅರ್ಜಿ ತಿರಸ್ಕರಿಸಿದೆ.

ಪ್ರಜ್ವಲ್ ಪರ ವಾದ ಮಂಡಿಸಿದ ಮುಕುಲ್ ರೋಹಟಗಿ ಅವರು, ಪ್ರಕರಣ ಸಂಬಂಧ ಈಗಾಗಲೇ ಆರೋಪಪಟ್ಟಿ ಸಲ್ಲಿಕೆಯಾಗಿದೆ. ಪ್ರಜ್ವಲ್ ವಿರುದ್ಧ ಸಲ್ಲಿಕೆಯಾಗಿರುವ ಆರಂಭಿಕ ದೂರಿನಲ್ಲಿ ಐಪಿಸಿಯ ಸೆಕ್ಷನ್ 376ರ ಉಲ್ಲೇಖ ಇಲ್ಲ ಎಂದು ಕೋರ್ಟ್‌ಗೆ ಹೇಳಿದರು.

ಬಳಿಕ ಸುಪ್ರೀಂ ಕೋರ್ಟ್ ಪೀಠ, ಕರ್ನಾಟಕ ಹೈಕೋರ್ಟ್ ಜಾಮೀನು ನಿರಾಕರಿಸಿ ಅಕ್ಟೋಬರ್ 21ರಂದು ನೀಡಿರುವ ಆದೇಶದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದಿದೆ. ಪ್ರಜ್ವಲ್ ವಿರುದ್ಧ ದಾಖಲಾಗಿರುವ ಅತ್ಯಾಚಾರ ಮತ್ತು ಕಿರುಕುಳ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ 2,144 ಪುಟಗಳ ಆರೋಪಪಟ್ಟಿಯನ್ನು ಆಗಸ್ಟ್‌ನಲ್ಲಿ ಸಲ್ಲಿಸಿತ್ತು.

ಅತ್ಯಾಚಾರ ಪ್ರಕರಣ ಸೇರಿ ಒಟ್ಟು ಮೂರು ಪ್ರಕರಣಗಳು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲೆ ಇತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ನಲ್ಲಿ ಈ ಮೂರು ಪ್ರಕರಣಗಳ ವಿಚಾರಣೆ ನಡೆಸಿದ್ದ ಹೈಕೋರ್ಟ್ ಜಾಮೀನು ಅರ್ಜಿ ಹಾಗೂ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೂಡ ವಜಾಗೊಳಿಸಿ ಆದೇಶ ಹೊರಡಿಸಿತ್ತು. ಇದೀಗ ಸುಪ್ರೀಂಕೋರ್ಟ್ ಕೂಡ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ಈ ಸುದ್ದಿಯನ್ನೂ ಓದಿ | UP Judge Attacked: ನ್ಯಾಯಾಧೀಶರಿಗೇ ಇಲ್ಲ ಸೇಫ್ಟಿ! ಜೀವಾವಧಿ ಶಿಕ್ಷೆ ವಿಧಿಸಿದ್ದ ಜಡ್ಜ್‌ ಕಾರನ್ನು ತಡೆದು ಮಾರಕಾಸ್ತ್ರ ಝಳಪಿಸಿದ ಗೂಂಡಾಗಳು

ಎಚ್‌ಡಿ ಕುಮಾರಸ್ವಾಮಿಗೆ ಅವಹೇಳನಕಾರಿ ಮಾತು ಬಳಸಿದ ಜಮೀರ್‌ ಅಹ್ಮದ್‌

zameer ahmed

ರಾಮನಗರ: ಚನ್ನಪಟ್ಟಣದಲ್ಲಿ ವಿಧಾನಸಭೆ (Channapatna Bypoll) ಉಪಚುನಾವಣೆ ಪ್ರಚಾರ ಕಾವೇರಿದ್ದು, ಪ್ರಚಾರದ ಭರಾಟೆಯ ನಡುವೆ ಶಾಸಕ ಜಮೀರ್‌ ಅಹ್ಮದ್‌ ಖಾನ್‌ (Zameer Ahmed khan)​ ಅವರು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ (HD Kumaraswamy) ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ʼಕರಿಯʼ ಎಂಬ ಪದ ಬಳಸಿ ನಿಂದಿಸಿದ್ದಾರೆ.

ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ, ಸಚಿವ ಬಿ. ಝಡ್​. ಜಮೀರ್​ ಅಹ್ಮದ್​ ಖಾನ್ ಅವರು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದು, ಭಾಷಣದ ಮಧ್ಯೆ ʼಕರಿಯ ಕುಮಾರಸ್ವಾಮಿʼ ಎಂದು ಟೀಕಿಸಿದ್ದಾರೆ.

ರವಿವಾರ ರಾತ್ರಿ ಚನ್ನಪಟ್ಟಣದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಸಿಪಿ ಯೋಗೇಶ್ವರ ಪರವಾಗಿ ಜಮೀರ್​ ಅಹ್ಮದ್​ ಪ್ರಚಾರಕ್ಕೆ ಆಗಮಿಸಿದ್ದರು. ಪ್ರಚಾರ ಭಾಷಣದಲ್ಲಿ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ಮಾಡುವ ಭರದಲ್ಲಿ “ಬಿಜೆಪಿಯವರಿಗಿಂತ ಕಾಲಾ ಕುಮಾರಸ್ವಾಮಿ (ಕರಿಯ ಕುಮಾರಸ್ವಾಮಿ) ಹೆಚ್ಚು ಖತರ್ನಾಕ್​​” ಎಂದು ಉರ್ದುವಿನಲ್ಲಿ ಹೇಳಿದರು.

“ಯೋಗೇಶ್ವರ್ ನಮ್ಮ ಪಕ್ಷದಿಂದ ರಾಜಕೀಯ ಪ್ರಾರಂಭ ಮಾಡಿದರು. ಕೆಲವು ವ್ಯತ್ಯಾಸಗಳಾಗಿ ಬಿಜೆಪಿಗೆ ಹೋದರು. ಜೆಡಿಎಸ್ ಹೋಗಬೇಕು ಅಂತ ಅಂದುಕೊಂಡಿದ್ದರು, ಆದರೆ ಕರಿಯ ಕುಮಾರಸ್ವಾಮಿ, ಬಿಜೆಪಿಗಿಂತ ಡೇಂಜರ್ ಅಂತ‌ ಜೆಡಿಎಸ್​ಗೆ ಹೋಗಿಲ್ಲ. ಈ ಹಿಂದೆ ಹಿಜಾಬ್ ಬೇಡ ಅಂದಿದ್ದೀರಿ. ಈಗ ನಿನಗೆ ಮುಸಲ್ಮಾನರ ಮತ ಬೇಕಾ? ಕುಮಾರಸ್ವಾಮಿ ಬಿಜೆಪಿಗೆ ಹೋಗಿ ಮುಸಲ್ಮಾನರನ್ನು ಖರೀದಿ ಮಾಡ್ತಾನಂತೆ. ಏ ಕುಮಾರಸ್ವಾಮಿ ನಿನ್ ರೇಟು ಹೇಳು, ಮುಸಲ್ಮಾನರು ಒಂದೊಂದ್ ಪೈಸೆ ಹಾಕಿ ಇಡೀ ನಿನ್ನ ಕುಟುಂಬವನ್ನೇ ಖರೀದಿ ಮಾಡುತ್ತಾರೆ” ಎಂದು ವಾಗ್ದಾಳಿ ಮಾಡಿದ್ದಾರೆ.

ಜಮೀರ್​ ಅಹ್ಮದ್​ ಈ ಹಿಂದೆಯೂ ಇದೇ ರೀತಿಯಾದ ಹೇಳಿಕೆ ನೀಡಿದ್ದರು. 2021ರಲ್ಲಿ ಬೀದರ್​ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣಾ ಪ್ರಚಾರದ ಬಹಿರಂಗ ಸಭೆಯಲ್ಲಿ ಹೆಚ್​ಡಿ ಕುಮಾರಸ್ವಾಮಿ ಅವರನ್ನು ಜಮೀರ್​ ಅಹ್ಮದ್​ ಕಾಲಾ ಕುಮಾರಸ್ವಾಮಿ (ಕರಿಯ ಕುಮಾರಸ್ವಾಮಿ) ಎಂದು ಉರ್ದು ಭಾಷೆಯಲ್ಲಿ ನಿಂದಿಸಿದ್ದರು.

ಇದನ್ನೂ ಓದಿ: HD Kumaraswamy: ಐಪಿಎಸ್ ಅಧಿಕಾರಿ ಚಂದ್ರಶೇಖರ್ ಒಬ್ಬ ಕ್ರಿಮಿನಲ್, ಬ್ಲ್ಯಾಕ್ ಮೇಲರ್; ಎಚ್‌ಡಿ ಕುಮಾರಸ್ವಾಮಿ ಕಿಡಿ