ಧಾರವಾಡ: ಧಾರವಾಡ, ಹಾವೇರಿ, ದಾವಣಗೆರೆ ಸೇರಿ ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಧಾರವಾಡದಲ್ಲೂ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದ್ದು, ಕೆಐಎಡಿಬಿ ಎಇಇ ಗೋವಿಂದಪ್ಪ ಭಜಂತ್ರಿ ನಿವಾಸದ ಮೇಲೆ ದಾಳಿ ನಡೆಸಿದ ಅಧಿಕಾರಿಗಳು (Lokayukta Raid), ಅಸ್ತಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.
ಧಾರವಾಡದ ಗಾಂಧಿನಗರ ಬಡಾವಣೆಯಲ್ಲಿನ ಕೆಐಎಡಿಬಿ ಎಇಇ ಗೋವಿಂದಪ್ಪ ಭಜಂತ್ರಿ ಅವರ ಮನೆಗೆ ಲೋಕಾಯುಕ್ತ ಡಿವೈಎಸ್ಪಿ ವೆಂಕನಗೌಡ ಪಾಟೀಲ ನೇತೃತ್ವದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಇದರ ಜತೆಗೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿ ಮತ್ತು ಉಗರಗೋಳ ಗ್ರಾಮದ ಪಾರ್ಮಹೌಸ್ ಹಾಗೂ ಗದಗ ಜಿಲ್ಲೆಯ ನರಗುಂದದ ಅಳಿಯನ ಮನೆಯ ಮೆಲೂ ಲೋಕಾಯುಕ್ತ ದಾಳಿ ನಡೆದಿದೆ.
ಗೋವಿಂದಪ್ಪ, ಸಹೋದರನ ನಿವಾಸ ಸೇರಿ 5 ಕಡೆ ಲೋಕಾಯುಕ್ತ ದಾಳಿ ನಡೆಸಿ, ಮಹತ್ವದ ದಾಖಲೆಗಳನ್ನ ಪರಿಶೀಲನೆ ಮಾಡಲಾಗಿದೆ.
9 ಲಕ್ಷ ರೂ. ನಗದನ್ನು ಗಂಟು ಕಟ್ಟಿ ಹೊರಗೆಸೆದ ಅಧಿಕಾರಿ
ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ಪರಿಶೀಲನೆ ನಡೆಸಿದ್ದಾರೆ. ಈ ನಡುವೆ ಲೋಕಾಯುಕ್ತ ಅಧಿಕಾರಿಗಳನ್ನು ಕಂಡು ಹೆದರಿದ ಹಾವೇರಿ ಜಿಲ್ಲೆಯ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಹಿರೇಕೆರೂರು ಉಪವಿಭಾಗದ ಸಹಾಯಕ ಇಂಜಿನಿಯರ್ ಕಾಶಿನಾಥ್ ಭಜಂತ್ರಿ 9 ಲಕ್ಷ ರೂ. ನಗದು ಹಣವನ್ನು ಗಂಟು ಕಟ್ಟಿ ಹೊರಗೆಸೆದಿರುವುದು ಕಂಡುಬಂದಿದೆ.
ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳ ತಂಡ ಬಸವೇಶ್ವರನಗರದ 1ನೇ ಕ್ರಾಸ್‌ನಲ್ಲಿರುವ ಭಜಂತ್ರಿ ನಿವಾಸದ ಮೇಲೆ ದಾಳಿ ನಡೆಸಿತ್ತು. ಅಧಿಕಾರಿಗಳು ಮನೆಯ ಮುಂದೆ ಬಂದು ಬಾಗಿಲು ಬಡಿದಾಗ ಭಜಂತ್ರಿ ಗಾಬರಿಗೊಂಡಿದ್ದು ಕೂಡಲೇ ಕೋಣೆಗೆ ತೆರಳಿ 9 ಲಕ್ಷ ರೂ. ನಗದು ಗಂಟು ಕಟ್ಟಿ ಶೌಚಾಲಯದ ಕಿಟಕಿ ಮೂಲಕ ಹೊರಗೆಸೆದಿದ್ದಾರೆ. ಇದನ್ನು ಗಮನಿಸಿದ ಲೋಕಾಯುಕ್ತ ಅಧಿಕಾರಿಗಳು ಆ ಹಣವನ್ನು ವಶಪಡಿಸಿಕೊಂಡಿದ್ದಾರೆ. ಇನ್ನು ಅಷ್ಟೇ ಅಲ್ಲದೆ ಭಜಂತ್ರಿ 2 ಲಕ್ಷ ರೂಪಾಯಿ ನಗದನ್ನು ಹಾಸಿಗೆಯಲ್ಲಿ ಸುತ್ತಿ ಇಟ್ಟಿದ್ದರು. ಮನೆಯಲ್ಲಿದ್ದ 14 ಲಕ್ಷ ರೂಪಾಯಿ ನಗದು ಹಣವನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆಯಲಾಗಿದೆ
ಇನ್ನು ದಾವಣಗೆರೆಯಲ್ಲಿ ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಸಹಾಯಕ ನಿರ್ದೇಶಕ ಕಮಲ್ ರಾಜ್ ಮನೆ ಮೇಲೆ ದಾಳಿ ವೇಳೆ ರೂ. 1 ಲಕ್ಷ ನಗದು, ಇನ್ನೋವಾ ಕಾರು ಹಾಗೂ ಆಸ್ತಿಯ ದಾಖಲೆ ಪತ್ತೆಯಾಗಿವೆ. ಅನುಕಂಪದ ಆಧಾರದ ಮೇಲೆ ದ್ವಿತೀಯ ದರ್ಜೆ ಸಹಾಯಕರಾಗಿ ನೇಮಕಗೊಂಡಿದ್ದ ಕಮಲ್ ರಾಜ್ ಹಲವು ಬಡ್ತಿ ಪಡೆದು ಸಹಾಯಕ ನಿರ್ದೇಶಕರಾಗಿದ್ದರು. ಚಿತ್ರದುರ್ಗ ಹಾಗೂ ದಾವಣೆಗೆರೆಯಲ್ಲಿ ಮನೆ, ಮೂರು ನಿವೇಶನ ಸೇರಿ ಇತರೆ ಆಸ್ತಿಯನ್ನು ಲೋಕಾಯುಕ್ತ ಅಧಿಕಾರಿಗಳು ಪತ್ತೆ ಮಾಡಿದ್ದಾರೆ ಎನ್ನಲಾಗಿದೆ.
ಈ ಸುದ್ದಿಯನ್ನೂ ಓದಿ | Lokayukta Raid: ರಾಜ್ಯಾದ್ಯಂತ ಲೋಕಾಯುಕ್ತ ದಾಳಿ, ದಾಖಲೆಗಳ ಪರಿಶೀಲನೆ
ಬೆಂಗಳೂರಿನಲ್ಲಿ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಅಧಿಕಾರಿಯಾಗಿರುವ ವೆಂಕಟೇಶ್ ಎಂಬುವರ ಬೆಳಗಾವಿ ನಿವಾಸದ ಮೇಲೂ ದಾಳಿ ನಡೆದಿದ್ದು, ದಾಖಲೆ ಪತ್ರಗಳ ಪರಿಶೀಲನೆ ನಡೆಸಲಾಗಿದೆ. ಅದೇ ರೀತಿ ಬೀದರ್ ಜಿಲ್ಲಾ ತರಬೇತಿ ಕೇಂದ್ರದ ಸಹಾಯಕ ನಿರ್ದೇಶಕ ರವೀಂದ್ರ ರೊಟ್ಟಿ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ ನಡೆದಿದೆ. ಬೀದರ್, ಬೆಂಗಳೂರು ನಿವಾಸ, ಕಚೇರಿ ಮೇಲೆ ಏಕಕಾಲಕ್ಕೆ ದಾಳಿ ನಡೆಸಲಾಗಿದ್ದು, ಮಹತ್ವದ ದಾಖಲೆಗಳನ್ನಿ ವಶಕ್ಕೆ ಪಡೆಯಲಾಗಿದೆ.